Accident: ಲಾರಿ ಪಲ್ಟಿಯಾಗಿ 14 ಮಂದಿ ದುರ್ಮರಣ: 3 ಲಕ್ಷ ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಉತ್ತರ ಕನ್ನಡ, ಜನವರಿ 22: ಹಣ್ಣು ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 14 ಜನರು ಜೀವ ಕಳೆದುಕೊಂಡು 10ಕ್ಕೂ ಜನ ಗಂಭೀರವಾಗಿ ಗಾಯವಾದ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಭಾಗದಲ್ಲಿ ಇಂದು ಬೆಳಗಿನ ಜಾವ ನಡೆದಿದೆ.
ಹಾವೇರಿಯಿಂದ ಕುಮಟಾದ ಕಡೆ ಹಣ್ಣು ತರಕಾರಿ ತುಂಬಿದ್ದ ಲಾರಿ ರಾಷ್ಟ್ರೀಯ ಹೆದ್ದಾರಿ 63 ರ ಗುಳ್ಳಾಪುರ ಭಾಗಕ್ಕೆ ಬರುತ್ತಿದ್ದಂತೆ ಚಾಲಕನ ನಿರ್ಲಕ್ಷದಿಂದ ಲಾರಿಯೂ ಪಲ್ಟಿಯಾಗಿದೆ. ಇನ್ನೂ ಈ ಘಟನೆಯಿಂದ ಸ್ಥಳದಲ್ಲೇ 9 ಜನರ ಪ್ರಾಣಬಿಟ್ಟಿದ್ದು, ಗಾಯಗೊಂಡವರನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇನ್ನೂ ಜೀವ ಕಳೆದುಕೊಂಡವರೆಲ್ಲ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದವರು ಎಂದು ತಿಳಿದು ಬಂದಿದ್ದು, ಫಯಾಜ್ ಜಮಖಂಡಿ (45), ವಾಸೀಂ ಮುಡಗೇರಿ (35), ಇಜಾಜ್ ಮುಲ್ಲಾ (20), ಸಾದೀಕ್ ಭಾಷ್ (30), ಗುಲಾಮ್ ಹುಷೇನ್ ಜವಳಿ (40), ಇಮ್ತಿಯಾಜ್ ಮುಳಕೇರಿ (36), ಅಲ್ಪಾಜ್ ಜಾಫರ್ ಮಂಡಕ್ಕಿ (25), ಜೀಲಾನಿ ಅಬ್ದುಲ್ ಜಖಾತಿ (25), ಅಸ್ಲಂ ಬಾಬುಲಿ ಬೆಣ್ಣಿ (24), ಜಲಾಲ ಬಾಷಾ (26) ಜೀವ ಕಳೆದುಕೊಂಡವರಾಗಿದ್ದಾರೆ.
ಇನ್ನೂ ಈ ದುರ್ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಬನಿ ಮಿಡಿದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಜೀವ ಕಳೆದುಕೊಂಡಿರುವ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು. ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮನವಿ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಈ ಘಟನೆ ಕುರಿತು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದು, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಅರಬೈಲ್ ಬಳಿ ನಡೆದ ಲಾರಿ ಅಪಘಾತದಲ್ಲಿ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹತ್ತು ಜನರು ದುರಂತ ಸಾವಿಗೀಡಾದ ಸುದ್ದಿ ಮನಸ್ಸಿಗೆ ನೋವುಂಟು ಮಾಡಿದೆ. ಈ ಘಟನೆಯಲ್ಲಿ ಇನ್ನೂ ಕೆಲವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ರಾಜ್ಯ ಸರ್ಕಾರವು ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು, ಹಾಗೂ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದು ಆಗ್ರಹಿಸುತ್ತೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಸ್ಥರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.












Click it and Unblock the Notifications