ಭಾನುವಾರ ಯಡಿಯೂರಪ್ಪ ಪರ ಶ್ರೀಗಳ ಶಕ್ತಿ ಪ್ರದರ್ಶನ!
ಬೆಂಗಳೂರು, ಜುಲೈ 23; ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಜುಲೈ 25 ಮತ್ತು 26ರಂದು ರಾಜ್ಯ ರಾಜಕೀಯದಲ್ಲಿ ಹಲವಾರು ವಿದ್ಯಮಾನಗಳು ನಡೆಯುವ ಸುಳಿವು ಸಿಕ್ಕಿದೆ.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಹಲವಾರು ಮಠಾಧೀಶರು ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಮಾಡಬಾರದು ಎಂದು ಬಿಜೆಪಿ ಹೈಕಮಾಂಡ್ ನಾಯಕರನ್ನು ಒತ್ತಾಯಿಸುತ್ತಿದ್ದಾರೆ.
ಬಿಜೆಪಿ ಹೈಕಮಾಂಡ್ ನಾಯಕರ ಗಮನ ಸೆಳೆಯಲು ಜುಲೈ 25ರಂದು ಬೆಂಗಳೂರಿನಲ್ಲಿ ಸ್ವಾಮೀಜಿಗಳು ಬೃಹತ್ ಸಮಾವೇಶ ನಡೆಸಲು ತೀರ್ಮಾನಿಸಿದ್ದಾರೆ. ಈ ಕುರಿತು ಬಾಳೆ ಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

"ಬಿ. ಎಸ್. ಯಡಿಯೂರಪ್ಪ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಅವಕಾಶ ನೀಡಬೇಕು ಎಂದು ಬಿಜೆಪಿ ಹೈಕಮಾಂಡ್ ನಾಯಕರನ್ನು ಒತ್ತಾಯಿಸಲು ಜುಲೈ 25ರಂದು ಬೆಂಗಳೂರಿನಲ್ಲಿ ಸ್ವಾಮೀಜಿಗಳ ಬೃಹತ್ ಸಮಾವೇಶ ನಡಸಲಾಗುತ್ತದೆ" ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ.
ಸರ್ಕಾರಕ್ಕೆ 2 ವರ್ಷ; ಮುಖ್ಯಮಂತ್ರಿ ಯಡಿಯೂರಪ್ಪ ಗುರುವಾರ ಮೊದಲ ಬಾರಿ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ. "ಇದೇ 26ಕ್ಕೆ ಸರ್ಕಾರ ಎರಡು ವರ್ಷವನ್ನು ಪೂರೈಸುತ್ತದೆ. ಆ ದಿನ ಪಕ್ಷದ ವರಿಷ್ಠರು ಯಾವ ಸಂದೇಶ ಕಳುಹಿಸುತ್ತಾರೋ ಅದನ್ನು ಚಾಚೂ ತಪ್ಪದೇ ಪಾಲಿಸುತ್ತೇನೆ" ಎಂದು ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ "ಕಳೆದ ಎರಡು ದಿನಗಳಿಂದ ಹೊಸ ರೀತಿಯ ಬೆಳವಣಿಗೆ ನಡೆಯುತ್ತಿದೆ. ವಿವಿಧ ಮಠಗಳ ಸ್ವಾಮೀಜಿಗಳು ಯಡಿಯೂರಪ್ಪ ಅವರು ಮುಂದುವರಿಬೇಕು ಅಂತಾ ಭಾವನೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಸ್ವಾಮೀಜಿಗಳ ಭಾವನೆಗಳಿಗೆ ಬಿಜೆಪಿ ನಾಯಕರು ಯಾವ ರೀತಿ ಸ್ಪಂದನೆ ಮಾಡುತ್ತಾರೆ ಎಂಬುದನ್ನು ಅವರು ಹೇಳಬೇಕು" ಎಂದು ಹೇಳಿಕೆ ಕೊಟ್ಟಿದ್ದಾರೆ.
ಯಡಿಯೂರಪ್ಪ ಟ್ವೀಟ್; ನಾಯಕತ್ವ ಬದಲಾವಣೆ ಸುದ್ದಿಗಳ ಬೆನ್ನಲ್ಲೇ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. "ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು. ಪಕ್ಷ ನನಗೆ ಮಾತೃ ಸಮಾನ,ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ" ಎಂದು ಹೇಳಿದ್ದಾರೆ.












Click it and Unblock the Notifications