ಹೈದರಾಬಾದ್ ಕರ್ನಾಟಕ ಇನ್ನು ಮುಂದೆ ಕಲ್ಯಾಣ ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 06 : ಹೈದರಾಬಾದ್ ಕರ್ನಾಟಕ ಇನ್ನು ಮುಂದೆ ಕಲ್ಯಾಣ ಕರ್ನಾಟಕ ಎಂದು ಬದಲಾಗಲಿದೆ. 371 ಜೆ ಕಾಯ್ದೆಯಡಿ ಹೈದರಾಬಾದ್-ಕರ್ನಾಟಕದ ವ್ಯಾಪ್ತಿಗೆ ಒಳಪಡುವ ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನವನ್ನು ನೀಡಲಾಗಿದೆ.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಶುಕ್ರವಾರ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಕಲ್ಯಾಣ ಕರ್ನಾಟಕ ಎಂದು ಹೆಸರು ಬದಲಾವಣೆ ಮಾಡಲು ಅನುಮೋದನೆ ನೀಡಲಾಗಿದೆ. ಎಲ್ಲಾ ಸರ್ಕಾರಿ ದಾಖಲೆಗಳಲ್ಲಿ ಹೆಸರು ಬದಲಾಗಲಿದೆ.
ಸಭೆಯ ಬಳಿಕ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ. ಸಿ. ಮಾಧುಸ್ವಾಮಿ, "ಸರ್ಕಾರಿ ದಾಖಲೆಗಳಲ್ಲಿ ಹೈದರಾಬಾದ್-ಕರ್ನಾಟಕ ಎಂಬ ಹೆಸರನ್ನು ಕಲ್ಯಾಣ ಕರ್ನಾಟಕ ಎಂದು ಬದಲಾವಣೆ ಮಾಡಲಾಗುತ್ತದೆ" ಎಂದು ಹೇಳಿದರು.

ಹೈದರಾಬಾದ್-ಕರ್ನಾಟಕದ ವ್ಯಾಪ್ತಿಗೆ ಬರುವ ಜಿಲ್ಲೆಗಳಿಗೆ 371ಜೆ ಅಡಿ ವಿಶೇಷ ಸ್ಥಾನಮಾನ ಸಿಗುತ್ತಿದೆ. ಬೀದರ್, ಬಳ್ಳಾರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳು ಹೈದರಾಬಾದ್ ಕರ್ನಾಟಕದ ವ್ಯಾಪ್ತಿಗೆ ಸೇರುತ್ತವೆ.
ಹೈದರಾಬಾದ್-ಕರ್ನಾಟಕ ಅಭಿವೃದ್ಧಿ ಬಗ್ಗೆ ತೀರ್ಮಾನ ಕೈಗೊಳ್ಳಲು ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸ್ಥಾಪನೆ ಮಾಡಲಾಗಿದೆ. ಇನ್ನು ಮುಂದೆ ಅದು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಾಗಿ ಬದಲಾಗಲಿದೆ.
ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಬೇಕು ಎಂದು ಹೈದರಾಬಾದ್ ಕರ್ನಾಟಕ ಭಾಗದ 41 ಶಾಸಕರು ಕರ್ನಾಟಕ ಸರ್ಕಾರಕ್ಕೆ ಮನವಿ ಮಾಡಿದ್ದರು. ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನವನ್ನು ಕೈಗೊಂಡಿದೆ.












Click it and Unblock the Notifications