'ಸಿದ್ದರಾಮಯ್ಯನನ್ನು ರಾಜಕೀಯವಾಗಿ ಮುಗಿಸಿದ್ರೆ, ಕಾಂಗ್ರೆಸ್ ಅಂತ್ಯ ಎನ್ನುವುದು ಭ್ರಮೆ'
ಬೆಂಗಳೂರು, ಆಗಸ್ಟ್ 19: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ತೀವ್ರ ಒತ್ತಾಯಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ನಾಯಕರು ಹಾಗೂ ಇತರ ಕೆಲವು ಸಂಘಟನೆಗಳು ಸಿದ್ದರಾಮಯ್ಯ ಪರ ನಿಂತಿದ್ದು, ರಾಜ್ಯದ ಅನೇಕ ಕಡೆಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.
ಈ ಬಗ್ಗೆ ಬೆಂಗಳೂರಿನ ಚಿತ್ರಕಲಾ ಪರಿಷತ್‌ನಲ್ಲಿ ಮಾಧ್ಯಮಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಪ್ರಕರಣದಲ್ಲಿ ನನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದರು.

ರಿಟ್ ಅರ್ಜಿಯಲ್ಲಿ ಮಧ್ಯಂತರ ಪರಿಹಾರವಾಗಿ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ನೀಡಬೇಕೆಂದು ಕೋರಲಾಗಿದೆ. ಈ ರಿಟ್ ಅರ್ಜಿಯ ಬಗ್ಗೆ ಖ್ಯಾತ ವಕೀಲರಾದ ಅಭಿಷೇಕ್ ಮನು ಸಿಂಗ್ವಿಯವರು ವಾದ ಮಂಡಿಸಲಿದ್ದಾರೆ. ನನ್ನ ಆತ್ಮಸಾಕ್ಷಿ ಸ್ಪಷ್ಟವಾಗಿದ್ದು, ನಾನು ಯಾವ ತಪ್ಪನ್ನೂ ಎಸಗಿಲ್ಲ.
ನಾನು ಮಂತ್ರಿಯಾಗಿ 40 ವರ್ಷಗಳು ಕಳೆದಿದ್ದು, ಈ ಅವಧಿಯಲ್ಲಿ ನನ್ನ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ. ಜನರ ಆಶೀರ್ವಾದದಿಂದ ಅವರ ಸೇವೆಯಲ್ಲಿ ನಿರತನಾಗಿದ್ದೇನೆ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕವಿದ್ದಂತೆ. ನಾನು ಯಾವುದೇ ತಪ್ಪು ಮಾಡಿಲ್ಲವೆಂದು ರಾಜ್ಯದ ಜನರಿಗೂ ತಿಳಿದಿದೆ ಎಂದು ಹೇಳಿದರು.
ರಾಜಭವನವನ್ನು ಬಳಸಿಕೊಂಡು ಕರ್ನಾಟಕ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಕೇಂದ್ರ ಬಿಜೆಪಿ ಸರ್ಕಾರದವರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ದುರುದ್ದೇಶದಿಂದ ನನ್ನ ಮೇಲೆ ಮಸಿ ಬಳಿಯಲು ಇಂತಹ ಕೃತ್ಯಕ್ಕೆ ಕೈಹಾಕಿದ್ದಾರೆ. ಬಿಜೆಪಿಯವರು ದುರುದ್ದೇಶದಿಂದ ಪ್ರತಿಭಟನೆ ಮಾಡುತ್ತಿದ್ದು, ರಾಜಕೀಯವಾಗಿ ಇದನ್ನು ಎದಿರುಸುತ್ತೇವೆ ಎನ್ನುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದರು.
ಇನ್ನು ಈ ಪಿತೂರಿಯ ವಿರುದ್ಧ ಕಾನೂನು ಹಾಗೂ ರಾಜಕೀಯ ಹೋರಾಟವನ್ನು ಕೈಗೊಳ್ಳುತ್ತೇವೆ. ಇಂತಹ ರಾಜಕೀಯ ಹೋರಾಟಗಳನ್ನು ನಿರಂತರವಾಗಿ ಮಾಡಿಕೊಂಡು ಬಂದಿದ್ದು, ಇನ್ನೂ ಹೆಚ್ಚಿನ ಸ್ಪೂರ್ತಿಯೊಂದಿಗೆ ಹೋರಾಡುತ್ತೇನೆ. ನಾನು ಬಡಜನರ ಪರವಾಗಿರುವುದೇ ಪ್ರತಿಪಕ್ಷಗಳ ಭಯಕ್ಕೆ ಕಾರಣವಾಗಿದೆ. ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿರುವುದು ಅವರನ್ನು ಕಾಡುತ್ತಿದೆ. ಸಿದ್ದರಾಮಯ್ಯನನ್ನು ರಾಜಕೀಯವಾಗಿ ಮುಗಿಸಿದರೆ, ಕಾಂಗ್ರೆಸ್ ಪಕ್ಷವನ್ನು ಮುಗಿಸಬಹುದು ಎಂಬ ಭ್ರಮೆಯಲ್ಲಿ ಪ್ರತಿಪಕ್ಷಗಳಿವೆ ಎಂದು ಬಿಜೆಪಿ ವಿರುದ್ಧ ವ್ಯಂಗ್ಯವಾಡಿದರು.












Click it and Unblock the Notifications