ಕಾಂಗ್ರೆಸ್ ಶಾಸಕರಿಗೆ ಹೆಚ್ ಡಿ ಕುಮಾರಸ್ವಾಮಿ ಕೊಟ್ಟ ಆಫರ್ ಕುರಿತು ಸತ್ಯ ಬಿಚ್ಚಿಟ್ಟ ಡಿ ಕೆ ಶಿವಕುಮಾರ್
ಬೆಂಗಳೂರು, ಫೆಬ್ರವರಿ 19: ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ನಮ್ಮ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವುದು, ಧಮಕಿ ಹಾಕುತ್ತಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿ, ಕುಮಾರಸ್ವಾಮಿ ಯಾರಿಗೆ ಫೋನ್ ಮಾಡಿ, ಏನು ಮಾತನಾಡುತ್ತಿದ್ದಾರೆ, ಯಾರಿಗೆ ಧಮಕಿ ಹಾಕುತ್ತಿದ್ದಾರೆ, ಎಲ್ಲವೂ ನಮಗೆ ತಿಳಿಯುತ್ತಿದೆ. ಕುಮಾರಸ್ವಾಮಿ ಯಾರಿಗೆ, ಯಾವೆಲ್ಲಾ ಆಫರ್ ಕೊಟ್ಟಿದ್ದಾರೆ ಎಂದು ಶಾಸಕರು ನಮಗೆ ಮಾಹಿತಿ ನೀಡಿದ್ದಾರೆ. ಬಿಜೆಪಿ ತಂತ್ರಗಾರಿಕೆ ಬಗ್ಗೆಯೂ ಗೊತ್ತಿದೆ. ಮೊದಲು ಅವರು ತಮ್ಮ ಮನೆ ಸರಿಪಡಿಸಿಕೊಳ್ಳಲಿ. ಈಗ ಇದರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದು ಹೇಳಿದರು.

ವಿರೋಧ ಪಕ್ಷಗಳು ಅಡ್ಡಮತದಾನದ ಪ್ರಯತ್ನ ಮಾಡುತ್ತಿದ್ದಾರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿ ಕೆ ಶಿವಕುಮಾರ್, ಸುಮ್ಮನೇ ಐದನೇ ಅಭ್ಯರ್ಥಿ ಕಣಕ್ಕಿಳಿಸುತ್ತಾರಾ? ಒಂದು ಪ್ರಯತ್ನ ಮಾಡೋಣ ಎಂದು ಹಾಕಿದ್ದಾರೆ. ಮತದಾನದ ದಿನ ಎಲ್ಲವೂ ಗೊತ್ತಾಗಲಿದೆ ಎಂದು ತಿಳಿಸಿದರು.
ವಿರೋಧ ಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ರೂಪಿಸುತ್ತೀರಾ ಎಂಬ ಪ್ರಶ್ನೆ ಕುರಿತು ಉತ್ತರಿಸಿ, ನಮಗೆ ಅದರ ಅಗತ್ಯವಿಲ್ಲ. ಜನ ನಮಗೆ 136 ಸೀಟುಗಳನ್ನು ನೀಡಿದ್ದಾರೆ. 2 ಕ್ಷೇತ್ರದ ಪಕ್ಷೇತರರು ನಮ್ಮ ಜತೆಗಿದ್ದಾರೆ. ನಮ್ಮ ಜತೆ ಇರುವ ಬೇರೆಯವರ ಬಗ್ಗೆ ಈಗ ಮಾತನಾಡುವುದಿಲ್ಲ. ಮತದಾನದ ನಂತರ ಮಾತನಾಡುತ್ತೇವೆ ಎಂದು ತಿಳಿಸಿದರು.

ಬರದಿಂದಾಗಿ ನೀರಿನ ಕೊರತೆ ವಿಚಾರವಾಗಿ ಮಾತನಾಡಿ, ಬರ ಪರಿಸ್ಥಿತಿಯಿಂದಾಗ ನೀರಿನ ಅಭಾವ ಹೆಚ್ಚಿದೆ. 200 ತಾಲೂಕುಗಳಲ್ಲಿ ಅಂತರ್ಜಲ ನೀರಿನ ಮಟ್ಟ ಕುಸಿದಿದೆ. ಬೆಂಗಳೂರಿನ 110 ಹಳ್ಳಿಗಳಿಗೆ ಸೇರಿದಂತೆ ಕುಡಿಯುವ ನೀರು ಪೂರೈಸಲು ನಮ್ಮ ಸರ್ಕಾರ ಬಜೆಟ್ ನಲ್ಲಿ ಅಗತ್ಯ ಕ್ರಮ ಕೈಗೊಂಡಿದೆ. ಇನ್ನು ಬೆಂಗಳೂರಿಗೆ ಹೆಚ್ಚುವರಿಯಾಗಿ 6 ಟಿಎಂಸಿ ನೀರನ್ನು ಬಳಸಲು ಆದೇಶ ಹೊರಡಿಸಲಾಗಿದೆ.
ಬೆಂಗಳೂರಿನ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ರಾಜ್ಯದ ಇತರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಧಿಕಾರಿಗಳಿಗೆ ಹಣ ನೀಡಲಾಗಿದೆ. ಕೆಲವು ಶಾಸಕರು ಈಗಾಗಲೇ ಇರುವ ಕೊಳವೆ ಬಾವಿಗಳನ್ನು ಇನ್ನು 500 ಅಡಿಗಳಷ್ಟು ಆಳಕ್ಕೆ ಕೊರೆಸಿದರೆ ಹೊಸ ಕೊಳವೆಬಾವಿ ಕೊರೆಯುವ ಅಗತ್ಯವಿಲ್ಲ ಎಂದು ಸಲಹೆ ನೀಡಿದ್ದಾರೆ. ಈ ಅವಕಾಶದ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ಮಾಡುತ್ತೇನೆ" ಎಂದು ತಿಳಿಸಿದರು.
ತಮಿಳುನಾಡಿನಲ್ಲಿ ಕಮಲ್ ಹಸನ್ ಅವರು ಇಂಡಿಯಾ ಮೈತ್ರಿಕೂಟಕ್ಕೆ ಸೇರಲು ಮುಂದಾಗಿದ್ದು ಇದರಿಂದ ಮೈತ್ರಿಗೆ ಅನುಕೂಲವಾಗುತ್ತದೆಯೇ ಎಂದು ಕೇಳಿದಾಗ, "ಖಂಡಿತವಾಗಿಯೂ ಅನುಕೂಲವಾಗುತ್ತದೆ. ನಮ್ಮ ಜತೆ ಕೈಜೋಡಿಸುವವರಿಗೆ ನಾವು ಸ್ವಾಗತಿಸುತ್ತೇವೆ ಎಂದು ತಿಳಿಸಿದರು.
ಶಾಲೆಗಳಲ್ಲಿ ಘೋಷವಾಕ್ಯ ಬದಲಾವಣೆ ವಿಚಾರವಾಗಿ ಬಿಜೆಪಿ ಟೀಕೆ ಕುರಿತು ಮಾತನಾಡಿ, ನನಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ನಾವು ಕುವೆಂಪು ಅವರ ಆಚಾರ, ವಿಚಾರ ಪ್ರಚಾರ ಮಾಡುತ್ತಿದ್ದೇವೆ. ಕುವೆಂಪು ಅವರ "ಭಾರತ ಜನನಿಯ ತನುಜಾತೆ...", "ಸರ್ವಜನಾಂಗದ ಶಾಂತಿಯ ತೋಟ..." ಸಂದೇಶವನ್ನು ಪ್ರತಿನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ರಾಜ್ಯದ ಜನರಿಗೆ ಹೇಳುತ್ತಾ ಬಂದಿದ್ದೇವೆ. ಕುವೆಂಪು ಅವರ ತತ್ವ ಸಿದ್ಧಾಂತಗಳನ್ನು ನಾವು ಪಾಲಿಸಿ ಅದಕ್ಕೆ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ. ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ. ಹೀಗಾಗಿ ಎಲ್ಲದರಲ್ಲೂ ತಪ್ಪು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಜನರ ಬದುಕಿನ ಬಗ್ಗೆ ಯೋಚಿಸುವುದಿಲ್ಲ, ಭಾವನೆ ಬಗ್ಗೆ ಮಾತ್ರ ಆಲೋಚಿಸಿ ಸಮಾಜ ಕೆಡಿಸುವ ಕೆಲಸ ಮಾಡುತ್ತಾರೆ ಎಂದರು.
ಈ ಘೋಷವಾಕ್ಯ ಬದಲಾವಣೆ ಅಗತ್ಯವೇನಿದೆ ಎಂಬ ಪ್ರಶ್ನೆಗೆ ಉತ್ತರಿಸಿ, "ಶಾಲೆಗಳಿಗೆ ಕೈಮುಗಿದು ಹೋಗುವುದರಲ್ಲಿ ತಪ್ಪೇನಿಲ್ಲ. ಹನುಮಂತಯ್ಯನವರು ಸರ್ಕಾರಿ ಕೆಲಸ ದೇವರ ಕೆಲಸ ಎಂದು ಹೇಳಿದ್ದಾರೆ. ಬಿಜೆಪಿಯವರು ಅನಗತ್ಯವಾಗಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದರು.












Click it and Unblock the Notifications