Siddaramaiah: ಮೈಸೂರಿನ ರಸ್ತೆಗೆ ಸಿದ್ದರಾಮಯ್ಯ ಹೆಸರು: ಸಿಎಂ ಕೊಟ್ಟ ಸ್ಪಷ್ಟನೆ ಏನು?
ಮೈಸೂರು, ಜನವರಿ 11: ಮೈಸೂರಿನ ಕೆಆರ್‌ಎಸ್ ತೆರಳುವ ರಸ್ತೆಗೆ ಪ್ರಿನ್ಸಸ್ ರಸ್ತೆ ಎಂಬುದಕ್ಕೆ ಯಾವುದೇ ದಾಖಲೆ ಇಲ್ಲ. ಇದಕ್ಕೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಹೆಸರಿಡುವ ವಿಚಾರವಾಗಿ, ನಾನು ಯಾರಿಗೂ ರಸ್ತೆಗೆ ನನ್ನ ಹೆಸರಿಡಿ ಎಂದು ಹೇಳಿಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾನು 40 ವರ್ಷದಿಂದ ರಾಜಕಾರಣದಲ್ಲಿದ್ದೇನೆ. ಯಾರಿಗೂ ನನ್ನ ಹೆಸರಡಿ ಎಂದು ಹೇಳಿಲ್ಲ. ಮೈಸೂರು ವಿವಿಯಲ್ಲಿ ಗೌರವ ಡಾಕ್ಟರೇಟ್ ಕೊಟ್ಟಾಗಲೇ ನಾನು ಬೇಡ ಅಂದೇ. ಡಾಕ್ಟರೇಟ್ ತೆಗೆದುಕೊಳ್ಳುವಷ್ಟು ನನಗೆ ಯೋಗ್ಯತೆ ಇಲ್ಲ. ಆ ರಸ್ತೆಗೆ ಬೇರೆ ಹೆಸರಿದ್ದರೆ ಬದಲಾವಣೆ ಮಾಡುವುದು ಬೇಡ. ಹೆಸರಿಡುವ ವಿಚಾರವಾಗಿ ನಾನು ಯಾರ ಜೊತೆ ಚರ್ಚೆಯನ್ನ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.

20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ. ಆದ್ರೂ ಯಾಕಿಂಗಾಯ್ತು. ಇಷ್ಟೆಲ್ಲಾ ಅವ್ಯವಸ್ಥೆ ಯಾಕಾಯ್ತು ಎಂದು ಬಿಜೆಪಿ-ಜೆಡಿಎಸ್-ಕಾಂಗ್ರೆಸ್ ಶಾಸಕರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.
ಅಲ್ರೀ ಎಲ್ಲಾ ಪಕ್ಷದ ಶಾಸಕರು ನೀವುಗಳೇ ಸುಮಾರು 20 ವರ್ಷಗಳಿಂದ ಮುಡಾ ಸದಸ್ಯರಿದ್ದೀರಿ. ನೀವುಗಳು ಸದಸ್ಯರಾಗಿದ್ದೂ ಯಾಕಿಂಗಾಯ್ತು? ಯಾಕೆ ಅವ್ಯವಸ್ಥೆ ಆಗಲು ಬಿಟ್ಟಿದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಳಿದರು.
ಹೊಸ ಬಡಾವಣೆ ಮಾಡುವಾಗ ವಿದ್ಯುತ್ ಸಂಪರ್ಕ, ರಸ್ತೆ, ಒಳಚರಂಡಿ ಇತ್ಯಾದಿ ಸೌಲಭ್ಯಗಳನ್ನು ಕಲ್ಪಿಸುವುದು ಬಡಾವಣೆ ಅಭಿವೃದ್ಧಿ ಮಾಡುವವರ ಜವಾಬ್ದಾರಿ. ಬಳಿಕ ಅದನ್ನು ನಗರ ಸ್ಥಳೀಯ ಸಂಸ್ಥೆಗೆ ಹಸ್ತಾಂತರಿಸಬೇಕಾಗಿತ್ತು. ಆದರೆ ಇಂತಹ ಸುಮಾರು 950 ಬಡಾವಣೆಗಳನ್ನು ಹಸ್ತಾಂತರಿಸದೇ ಇರುವುದರಿಂದ ಸಮಸ್ಯೆ ಮುಂದುವರೆದಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಯೋಜನೆ ತ್ವರಿತವಾಗಿ ಆಗದೆ ಕುಂಟುತ್ತಿರುವ ಬಗ್ಗೆ ಕೇಂದ್ರದ ಮತ್ತು ರಾಜ್ಯದ ಅಧಿಕಾರಿಗಳನ್ನು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಕೇಂದ್ರದ ಸಚಿವರಿಗೆ ವಿವರವಾದ ಪತ್ರ ಬರೆಯಲು ಮತ್ತು ಅನುಷ್ಠಾನ ಕುರಿತು ಕೇಂದ್ರ ವಿಮಾನಯಾನ ಸಚಿವರನ್ನು ಜ 15 ರಂದು ಭೇಟಿಯಾಗಿ ಮಾತುಕತೆ ನಡೆಸಲು ತೀರ್ಮಾನಿಸಿದರು.
ನಕ್ಸಲಿಂ ನ್ನು ಸಂಪೂರ್ಣ ತೊಡೆದುಹಾಕವುದು ಕಾಂಗ್ರೆಸ್ ಸರ್ಕಾರದ ಉದ್ದೇಶ.ಯಾವುದೇ ಹೋರಾಟಗಳಾಗಲಿ ಶಾಂತಿಯುತವಾಗಿರಬೇಕೇ ಹೊರತು ಹಿಂಸಾತ್ಮಕ ದಾರಿ ಹಿಡಿಯಬಾರದೆಂಬುದು ಸರ್ಕಾರದ ನಿಲುವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶರಣಾಗತರಾದ ನಕ್ಸಲರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳುವ ಬಗ್ಗೆ ಹಾಗೂ ನಕ್ಸಲರ ಶರಣಾಗತಿಯ ಬಗ್ಗೆ ಪರವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ನಕ್ಸಲರು ಶರಣಾಗಿದ್ದು, ಅವರ ಶಸ್ತ್ರಾಸ್ತ್ರಗಳನ್ನೂ ಮೊಹಜರು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಹೋರಾಟುಗಳು ಸಂವಿಧಾನತ್ಮಕ ರೀತಿಯಲ್ಲಿ ನಡೆಯಬೇಕೆಂದು ಡಾ.ಅಂಬೇಡ್ಕರ್ ರವರೂ ಹೇಳಿದ್ದಾರೆ. ಅನ್ಯಾಯದ ವಿರುದ್ಧ ಧ್ವನಿಎತ್ತಲು ಸಂವಿಧಾನದಲ್ಲಿ ಅವಕಾಶವಿದ್ದರೂ, ಕಾನೂನನ್ನು ಕೈಗೆ ತೆಗೆದುಕೊಳ್ಳುವ ಅವಕಾಶ ಯಾರಿಗೂ ನೀಡಲಾಗಿಲ್ಲ. ಶೃಂಗೇರಿಯಲ್ಲಿ ಮತ್ತೊಬ್ಬ ನಕ್ಸಲ್ ಇರುವ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೂ ಅವರೂ ಕೂಡ ಕಾನೂನಿಗೆ ಶರಣಾಗಿ ಮುಖ್ಯವಾಹಿನಿಗೆ ಬರುವಂತಾಗಲಿ ಎಂದು ಕೋರುವುದಾಗಿ ತಿಳಿಸಿದರು.
ನವದೆಹಲಿಯಲ್ಲಿ ಎಂಎಸ್ ಪಿ ಬೇಡಿಕೆ ಸಂಬಂಧ ರೈತರ ಬಹಳ ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ಕೇಂದ್ರ ಸರ್ಕಾರ ಅವರ ನ್ಯಾಯಬದ್ಧ ಬೇಡಿಕೆಗೆ ಸ್ಪಂದಿಸುತ್ತಿಲ್ಲವೆಂಬ ಬಗ್ಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿ, ಕೇಂದ್ರಸರ್ಕಾರ ರೈತರ ಪರವಾದ ಸರ್ಕಾರವಲ್ಲ. ಬೆಳೆಗಳಿಗೆ ಎಂಎಸ್ ಪಿ ನೀಡುವುದಕ್ಕೆ ಕಾನೂನು ರಚಿಸುವಂತೆ ರೈತರ ಬೇಡಿಕೆಯಾಗಿದ್ದು, ಈ ಬೇಡಿಕೆಗೆ ಮಣಿಯದ ಅಮಾನವೀಯ ಹಾಗೂ ರೈತವಿರೋಧಿ ಸರ್ಕಾರವಾಗಿದೆ. ನೂರಾರು ರೈತರು ಪ್ರತಿಭಟನೆಯನ್ನು ಪ್ರಾಣ ಕಳೆದುಕೊಂಡಿದ್ದರೂ ಸಹ ರೈತರ ಬೇಡಿಕೆಗೆ ಮಣಿಯುತ್ತಿಲ್ಲ ಎಂದರು.












Click it and Unblock the Notifications