ಕುಮಾರಸ್ವಾಮಿಗೂ ಮೊದಲು ಚನ್ನಪಟ್ಟಣ ನೋಡಿದವನು ನಾನು: ಡಿ.ಕೆ.ಶಿವಕುಮಾರ್
ಮಂಗಳೂರು, ಜೂನ್ 25: ಕುಮಾರಸ್ವಾಮಿ ಅವರು ಚನ್ನಪಟ್ಟಣ ನೋಡುವುದಕ್ಕೂ ಮೊದಲೇ ನಾನು ನೋಡಿದ್ದೇನೆ. ಅವರು ತಡವಾಗಿ ರಾಜಕೀಯಕ್ಕೆ ಬಂದವರು. ಅವರಿಗಿಂತ 10 ವರ್ಷ ಮೊದಲೇ ನನಗೆ ಚನ್ನಪಟ್ಟಣ ಗೊತ್ತು. ನಾನು ಅದೇ ಜಿಲ್ಲೆಯವನು" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು.
ಮಂಗಳೂರಿನ ಬಜಪೆ ವಿಮಾನ ನಿಲ್ದಾಣ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಬಳಿ ಚನ್ನಪಟ್ಟಣಕ್ಕೆ ನೀವು ಏನೂ ಮಾಡಿಲ್ಲ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಚನ್ನಪಟ್ಟಣಕ್ಕೆ ನಾನು ಏನು ಮಾಡಿದ್ದೇನೆ, ಏನು ಮಾಡಿಲ್ಲ ಎಂದು ಎಚ್.ಡಿ. ಕುಮಾರಸ್ವಾಮಿಯವರಿಗೇನು ಗೊತ್ತು? ನಾನು 1985 ರಲ್ಲೇ ಅವರ ತಂದೆ ವಿರುದ್ಧ ಚುನಾವಣೆಗೆ ನಿಂತವನು ಎಂದು ಹೇಳಿದರು.

ಕುಮಾರಸ್ವಾಮಿ ಅವರು 1995 ರ ಬಳಿಕ ಲೋಕಸಭಾ ಚುನಾವಣೆಗೆ ನಿಂತವರು. ದೊಡ್ಡವರು ಅಧಿಕಾರ ಅನುಭವಿಸಿದರೂ ಚನ್ನಪಟ್ಟಣದಲ್ಲಿ ಏನೂ ಅಭಿವೃದ್ಧಿ ಆಗಿಲ್ಲ ಎಂಬ ಭಾವನೆ ಅಲ್ಲಿನ ಜನರಲ್ಲಿದೆ. ಅಲ್ಲಿನ ಜನರಿಗೆ ಅಳಿಲು ಸೇವೆ ಮಾಡೋಣ. ಹಿಂದೆ ಮಂತ್ರಿಯಾಗಿದ್ದಾಗ ಸೇವೆ ಮಾಡಿದ್ದೇನೆ. ಈಗ ಉತ್ತಮ ಸಮಯ ಒದಗಿ ಬಂದಿದೆ. ಸಣ್ಣ ಸಹಾಯ ಮಾಡೋಣ ಎಂದು ಕಾರ್ಯಪ್ರವೃತ್ತನಾಗಿದ್ದೇನೆ' ಎಂದು ಹೇಳಿದರು.
'ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ತಮ್ಮ ಡಿ.ಕೆ. ಸುರೇಶ್ ಗೆ ಆಸಕ್ತಿಯಿಲ್ಲ. ಜನರು ಸುರೇಶ್ ಗೆ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೆ ಹೇಳಿದ್ದಾರೆ. ಆದರೆ ಅವರಿಗೆ ಪಕ್ಷದ ಕೆಲಸ ಮಾಡಬೇಕೆಂಬ ಆಸೆಯಿದೆ. ನಮ್ಮನ್ನು ನಂಬಿ ಚನ್ನಪಟ್ಟಣದ ಜನ 85 ಸಾವಿರ ಮತಕೊಟ್ಟಿದ್ದಾರೆ. ನಮ್ಮನ್ನು ನಂಬಿದ ಜನರ ಕೈ ಬಿಡುವುದಕ್ಕೆ ಆಗುವುದಿಲ್ಲ. ದೇವರಂತ ಜನ ರಾಜ್ಯದಲ್ಲಿ ನಮಗೆ 136 ಸ್ಥಾನ ಗೆಲ್ಲಿಸಿ ಅಧಿಕಾರ ಕೊಟ್ಟಿದ್ದಾರೆ. ಅದನ್ನು ಜನರ ಅಭಿವೃದ್ಧಿಗೆ ವಿನಿಯೋಗಿಸಬೇಕಿದೆ" ಎಂದರು.
ತಮ್ಮ ಮೇಲಿನ ದ್ವೇಷದ ಕಾರಣಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ ಗಣಿಗಾರಿಕೆಗೆ ರಾಜ್ಯ ಸರ್ಕಾರ ಅನುಮತಿ ನೀಡುತ್ತಿಲ್ಲ ಎಂಬ ಕುಮಾರಸ್ವಾಮಿಯವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಅವರು 'ಮೈನಿಂಗ್ ಬಗ್ಗೆ ಹೆಚ್ಡಿಕೆ ಅವರಿಗೆ ತಿಳುವಳಿಕೆ ಇದೆಯೋ ಇಲ್ಲವೋ ಗೊತ್ತಿಲ್ಲ. ನನಗಂತೂ ಆ ಬಗ್ಗೆ ಏನೂ ಗೊತ್ತಿಲ್ಲ' ಎಂದರು.
ಕುಕ್ಕೆ ಸುಬ್ರಹ್ನಣ್ಯ ಕ್ಷೇತ್ರಕ್ಕೆ ಭೇಟಿ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು, 'ನಾವು ಹಿಂದೂ ಧರ್ಮದವರು. ನಮ್ಮ ರಾಜ್ಯದಲ್ಲಿ ಎಲ್ಲಾ ಸಂಸ್ಕೃತಿಯನ್ನು ಒಟ್ಟಿಗೆ ತೆಗೆದುಕೊಂಡು ಹೋಗುವವರು. ಬಹಳ ದಿನದಿಂದ ಸುಬ್ರಹ್ಮಣ್ಯಕ್ಕೆ ಹೋಗಬೇಕೆಂಬ ಆಸೆಯಿತ್ತು. ಆದ ಕಾರಣ ಕುಟುಂಬ ಸಮೇತ ಹೋಗುತ್ತಿದ್ದೇನೆ. ಅವರವರ ನಂಬಿಕೆ ಪ್ರಕಾರ ಅವರು ಪ್ರಾರ್ಥಿಸುತ್ತಾರೆʼ ಎಂದು ಹೇಳಿದರು.
ಕುಕ್ಕೆ ಅಭಿವೃದ್ದಿ ಪ್ರಾಧಿಕಾರ ಸ್ಥಾಪನೆ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿ, ಈ ಪ್ರಸ್ತಾವನೆ ನಮ್ಮ ಗಮನಕ್ಕೆ ಬಂದಿದೆ. ಈ ವಿಚಾರವಾಗಿ ಕಾರ್ಯಕರ್ತರ ಅಭಿಪ್ರಾಯ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರ ಚರ್ಚೆಗೆ ಬರುತ್ತದೆ. ದೇವಾಸ್ಥಾನದ ಗೌರವ, ಘನತೆ ಉಳಿಸಿಕೊಂಡು ಹೋಗಲಾಗುವುದು ಎಂದು ಹೇಳಿದರು.
ಪ್ರಜ್ವಲ್ ರೇವಣ್ಣ ಪ್ರಕರಣರದಲ್ಲಿ ಮಾಜಿ ಶಾಸಕ ಪೀತಂಗೌಡ ವಿರುದ್ಧ ಎಫ್ ಐಆರ್ ದಾಖಲಾಗಿರುವ ಬಗ್ಗೆ ಕೇಳಿದಾಗ "ಇದರ ಬಗ್ಗೆ ನನಗೆ ಗೊತ್ತಿಲ್ಲ. ಮಂಗಳೂರಿನಲ್ಲಿ ಮಲಗಿದ್ದವನು ಈಗ ಎದ್ದಿದ್ದೇನೆ. ನನಗೆ ಏನು ಗೊತ್ತಿಲ್ಲ" ಎಂದರು.












Click it and Unblock the Notifications