IAS: ಐಎಎಸ್ ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ, ಯಾವ ಹುದ್ದೆ?
ಬೆಂಗಳೂರು, ನವೆಂಬರ್ 14: ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿ ಸಿ. ಶಿಖಾ ಅವರು ಕೇಂದ್ರ ಸೇವೆಗೆ ನಿಯೋಜನೆಗೊಂಡಿದ್ದಾರೆ. ರಾಜ್ಯದ ಹಿರಿಯ ಐಎಎಸ್ ಅಧಿಕಾರಿ ಆಗಿರುವ ಸಿ. ಶಿಖಾ ಬಿಎಂಟಿಸಿ ಎಂಡಿ, ಮೈಸೂರು ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಣೆ ಮಾಡಿದ್ದಾರೆ, ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಶೀಘ್ರದಲ್ಲೇ ಅವರು ಕೇಂದ್ರದ ಸೇವೆಗೆ ತೆರಳಲಿದ್ದು, ಅಧಿಕಾರ ವಹಿಸಿಕೊಳ್ಳಲಿದ್ದಾರೆ.
2004ನೇ ಬ್ಯಾಚ್ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿ ಸಿ. ಶಿಖಾ ಅವರು ಸದ್ಯ ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರನ್ನು ಕೇಂದ್ರ ಸೇವೆಗೆ ನಿಯೋಜನೆ ಮಾಡಲಾಗಿದ್ದು, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವಾಲಯ ಜಂಟಿ ಕಾರ್ಯದರ್ಶಿಯಾಗಿ ನಿಯೋಜನೆ ಮಾಡಲಾಗಿದೆ.

ಸಿ. ಶಿಖಾ ಅವರು ಕೆಲವೇ ದಿನಗಳಲ್ಲಿ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವಾಲಯ ಜಂಟಿ ಕಾರ್ಯದರ್ಶಿಯಾಗಿ ಅಧಿಕಾರವಹಿಸಿಕೊಳ್ಳಲಿದ್ದಾರೆ. ಸಿ. ಶಿಖಾ ಅವರ ಪತಿ ಅಜಯ್ ನಾಗಭೂಷಣ್ ಸಹ ಐಎಎಸ್ ಅಧಿಕಾರಿ.
ಸಿ. ಶಿಖಾ ಮೈಸೂರು ಜಿಲ್ಲಾಧಿಕಾರಿಯಾಗಿ, ಸೆಸ್ಕಾ ಮತ್ತು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ, ಪಿಯು ಬೋರ್ಡ್ ನಿರ್ದೇಶಕರಾಗಿ, ಬಿಎಂಟಿಸಿ ಎಂಡಿಯಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಸದ್ಯ ಅವರು ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ: ಭಾರತ ಚುನಾವಣಾ ಆಯೋಗ ಅತ್ಯುತ್ತಮ ಚುನಾವಣಾ ಅಭ್ಯಾಸಗಳನ್ನು ಪ್ರೋತ್ಸಾಹಿಸಲು ಪ್ರತಿ ವರ್ಷ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ನೀಡುವ ರಾಷ್ಟ್ರಮಟ್ಟದ ಪ್ರಶಸ್ತಿಯನ್ನು ಸಿ. ಶಿಖಾ ಅವರು ಪಡೆದಿದ್ದಾರೆ.
ಸಿ. ಶಿಖಾ ಅವರು 2023ರ ಸಾಲಿನಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ವಾಣಿಜ್ಯ ತೆರಿಗೆ ಆಯುಕ್ತರಾಗಿ ಇಲಾಖೆಯ ಮೂಲಕ ಮತದಾರರಲ್ಲಿ ಉಚಿತ ಉಡುಗೊರೆಗಳ ಕುರಿತು ಹಮ್ಮಿಕೊಂಡಿದ್ದ ಜನಜಾಗೃತಿ, ವಾಣಿಜ್ಯ ಕ್ಷೇತ್ರದಲ್ಲಿ ಚುನಾವಣಾ ನೀತಿ ಸಂಹಿತಿ ಪಾಲನೆ ಸೇರಿದಂತೆ ಕಟ್ಟುನಿಟ್ಟಿನ ಚುನಾವಣೆ ನಡೆಸಲು ಪ್ರಮುಖ ಪಾತ್ರವಹಿಸಿದ್ದಕ್ಕಾಗಿ ಆಯೋಗ ಅವರಿಗೆ ಪ್ರಶಸ್ತಿಯನ್ನು ನೀಡಿತ್ತು.
ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ಸಿ. ಶಿಖಾ ಅವರು ಉತ್ತಮವಾಗಿ ಕಾರ್ಯ ನಿರ್ವಹಣೆ ಮಾಡಿದ್ದರು. ಮೂರುವರೆ ವರ್ಷಗಳ ಕಾಲ ಅವರು ಜಿಲ್ಲಾಧಿಕಾರಿಯಾಗಿದ್ದು. 2016ರ ಆಗಸ್ಟ್ 10ರಂದು ಅವರನ್ನು ವರ್ಗಾವಣೆ ಮಾಡಲಾಗಿತ್ತು.
ಸಿ. ಶಿಖಾ ಅವರು ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ಕಾರ್ಯ ನಿರ್ವಹಣೆ ಮಾಡಿದ ರೀತಿಯನ್ನು ಅಲ್ಲಿನ ಜನಪ್ರತಿನಿಧಿಗಳು, ಜನರು ಇಂದಿಗೂ ನೆನಪು ಮಾಡಿಕೊಳ್ಳುತ್ತಾರೆ. ಮೈಸೂರಿನಿಂದ ವರ್ಗಾವಣೆಗೊಂಡ ಬಳಿಕ ಅವರು ಬಿಎಂಟಿಸಿ ಎಂಡಿಯಾಗಿಯೂ ಕಾರ್ಯ ನಿರ್ವಹಣೆ ಮಾಡಿದ್ದಾರೆ.
ಬೆಂಗಳೂರಿನ ವಾಣಿಜ್ಯ ತೆರಿಗೆ ಕಛೇರಿಯಲ್ಲಿ ಈಗಾಗಲೇ ಸಿ. ಶಿಖಾ ಅವರಿಗೆ ಬೀಳ್ಕೊಡುಗೆ ನೀಡಲಾಗಿದೆ. ಸಿಬ್ಬಂದಿಗಳು ಕೇಂದ್ರ ಸೇವೆಯಲ್ಲಿಯೂ ಸಹ ಶಿ. ಶಿಖಾ ಅವರು ಉತ್ತಮವಾಗಿ ಕಾರ್ಯ ನಿರ್ವಹಣೆ ಮಾಡಲಿ ಎಂದು ಹಾರೈಸಿದರು.
ಸಿ. ಶಿಖಾ ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ. ಮರೀಗೌಡ ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದರು. ಈ ಪ್ರಕರಣದ ವಿಚಾರಣೆ ಇನ್ನೂ ಕೋರ್ಟ್‌ನಲ್ಲಿ ನಡೆಯುತ್ತಿದೆ.












Click it and Unblock the Notifications