IAS Officers Transfer: ರಾಜ್ಯ ಸರ್ಕಾರದಿಂದ 6 ಮಂದಿ ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ
IAS Officers Transfer: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುತ್ತಲಿರುತ್ತದೆ. ಹಾಗೆಯೇ ಇದೀಗ ಐದು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಾಗಾದ್ರೆ ಯಾರನ್ನು ಎಲ್ಲಿಗೆ ವರ್ಗಾಯಿಸಲಾಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಆಡಳಿತಾತ್ಮಕ ಹಿತದೃಷ್ಟಿಯಿಂದ ರಾಜ್ಯ ಸರ್ಕಾರವು 6 ಮಂದಿ ಹಿರಿಯ ಹಾಗೂ ಕಿರಿಯ ಶ್ರೇಣಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಕೆಲವು ಪ್ರಮುಖ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಿ ಅಧಿಕೃತ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಈ ಅಧಿಸೂಚನೆ ಪ್ರಕಟಿಸಿದ್ದು, ಕಂದಾಯ, ಗೃಹ, ಅರಣ್ಯ, ಬಿಎಂಟಿಸಿ ಹಾಗೂ ಐಟಿ-ಬಿಟಿ ಸೇರಿದಂತೆ ಪ್ರಮುಖ ಇಲಾಖೆಗಳಲ್ಲಿ ಬದಲಾವಣೆ ಮಾಡಲಾಗಿದೆ.

ಐಎಎಸ್ ಅಧಿಕಾರಿಗಳ ವರ್ಗಾವಣೆ
ಸರ್ಕಾರದ ಹೊಸ ಆದೇಶದಂತೆ ಹಿರಿಯ ಐಎಎಸ್ ಅಧಿಕಾರಿ ಅಂಜುಮ್ ಪರ್ವೇಜ್ ಅವರಿಗೆ ಪ್ರಸ್ತುತ ನಿರ್ವಹಿಸುತ್ತಿರುವ ಕಂದಾಯ ಇಲಾಖೆಯ ಜವಾಬ್ದಾರಿಯ ಜೊತೆಗೆ ಮಹತ್ವದ ಲೋಕೋಪಯೋಗಿ ಇಲಾಖೆಯ (PWD) ಹೆಚ್ಚುವರಿ ಹೊಣೆಗಾರಿಕೆಯನ್ನು ನೀಡಲಾಗಿದೆ. ಮತ್ತೊಂದೆಡೆ ಹಿರಿಯ ಅಧಿಕಾರಿ ರಾಜೇಂದರ್ ಕುಮಾರ್ ಕಟಾರಿಯಾ ಅವರನ್ನು ಗೃಹ ಇಲಾಖೆಗೆ ವರ್ಗಾಯಿಸಲಾಗಿದೆ.
ಇದೇ ವೇಳೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿರುವ ಮಹೇಶ್ವರ ರಾವ್ ಅವರಿಗೆ ಅರಣ್ಯ ಮತ್ತು ಪರಿಸರ ಇಲಾಖೆಯ ಹೆಚ್ಚುವರಿ ಪ್ರಭಾರವನ್ನು ವಹಿಸಲಾಗಿದೆ. ಇನ್ನೂ ಪ್ರಮುಖ ಆಡಳಿತಾತ್ಮಕ ಸಂಸ್ಥೆಗಳಿಗೂ ಸರ್ಕಾರ ಹೊಸ ಅಧಿಕಾರಿಗಳನ್ನು ನೇಮಕ ಮಾಡಿದೆ.
ಕೃಷ್ಣ ಬಾಜಪೈ ಅವರನ್ನು ಕರ್ನಾಟಕ ಮೇಲ್ಮನವಿ ನ್ಯಾಯಾಧಿಕರಣದ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ನೇಮಕಾತಿಯೊಂದಿಗೆ, ಇಲ್ಲಿಯವರೆಗೆ ಆ ಹುದ್ದೆಯ ಹೆಚ್ಚುವರಿ ಹೊಣೆ ಹೊತ್ತಿದ್ದ ಹಿರಿಯ ಐಎಎಸ್ ಅಧಿಕಾರಿ ಹರ್ಷ ಗುಪ್ತಾ ಅವರನ್ನು ಆ ಜವಾಬ್ದಾರಿಯಿಂದ ಬಿಡುಗಡೆಗೊಳಿಸಲಾಗಿದೆ.
ಬಿಎಂಟಿಸಿ ಮತ್ತು ಐಟಿ-ಬಿಟಿ ಇಲಾಖೆಗಳಿಗೆ ನೇಮಕ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ (ಐಟಿ-ಬಿಟಿ) ಇಲಾಖೆಯ ಹುದ್ದೆಗಳಿಗೆ ಡಾ.ಗಿರೀಶ್ ದಿಲೀಪ್ ಬಡೋಲೆ ಹಾಗೂ ಶ್ರೀಮತಿ ಅಪರ್ಣಾ ರಮೇಶ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಈ ಇಬ್ಬರು ಅಧಿಕಾರಿಗಳ ನೇಮಕದಿಂದಾಗಿ, ಈವರೆಗೆ ಆ ಹುದ್ದೆಗಳ ಹೆಚ್ಚುವರಿ ಪ್ರಭಾರ ನಿರ್ವಹಿಸುತ್ತಿದ್ದ ಐಎಎಸ್ ಅಧಿಕಾರಿ ಭರತ್ ಎಸ್. ಅವರನ್ನು ಹೆಚ್ಚುವರಿ ಹೊಣೆಗಾರಿಕೆಯಿಂದ ಮುಕ್ತಗೊಳಿಸಲಾಗಿದೆ. ರಾಜ್ಯದ ಪ್ರಮುಖ ಇಲಾಖೆಗಳ ಕಾರ್ಯವೈಖರಿಗೆ ಮತ್ತಷ್ಟು ವೇಗ ನೀಡುವ ಉದ್ದೇಶದಿಂದ ಸರ್ಕಾರ ಈ ಆಡಳಿತಾತ್ಮಕ ಬದಲಾವಣೆಗಳನ್ನು ಜಾರಿಗೆ ತಂದಿದೆ.
ಐಎಎಸ್ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆಯ ವಿವರ
* ಅಂಜುಮ್ ಪರ್ವೇಜ್: ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದ ಇವರನ್ನು ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ (ಎಸಿಎಸ್) ವರ್ಗಾವಣೆ ಮಾಡಲಾಗಿದ್ದು, ಇದರ ಜೊತೆಗೆ ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಲಾಗಿದೆ.
* ರಾಜೇಂದರ್ ಕುಮಾರ್ ಕಟಾರಿಯಾ: ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದ ಇವರನ್ನು ಒಳಾಡಳಿತ (ಗೃಹ) ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ (ಎಸಿಎಸ್) ವರ್ಗಾಯಿಸಲಾಗಿದೆ.
* ಮಹೇಶ್ವರ ರಾವ್ ಎಂ.: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿರುವ ಇವರಿಗೆ, ಹಾಲಿ ಹುದ್ದೆಯ ಜೊತೆಗೆ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.
* ಕೃಷ್ಣ ಬಾಜಪೈ: ಬೆಂಗಳೂರಿನ ಕರ್ನಾಟಕ ಮೇಲ್ಮನವಿ ನ್ಯಾಯಾಧಿಕರಣದ ಸದಸ್ಯರಾಗಿದ್ದ ಇವರಿಗೆ ಪದೋನ್ನತಿ ನೀಡಿ, ಅದೇ ನ್ಯಾಯಾಧಿಕರಣದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
* ಡಾ. ಗಿರೀಶ್ ದಿಲೀಪ್ ಬಡೋಲೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಆಡಳಿತ ನಿರ್ದೇಶಕರಾಗಿರುವ ಇವರಿಗೆ, ಹಾಲಿ ಹುದ್ದೆಯ ಜೊತೆಗೆ ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾಗಿ (ವಿಜ್ಞಾನ ಮತ್ತು ತಂತ್ರಜ್ಞಾನ) ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.
* ಅಪರ್ಣಾ ರಮೇಶ್: ವಾಣಿಜ್ಯ ತೆರಿಗೆ ಇಲಾಖೆಯ (ಸೇವಾ ವಿಶ್ಲೇಷಣಾ ವಿಭಾಗ) ಹೆಚ್ಚುವರಿ ಆಯುಕ್ತರಾಗಿರುವ ಇವರಿಗೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ನಿರ್ದೇಶಕರಾಗಿ (ಮಾಹಿತಿ ತಂತ್ರಜ್ಞಾನ - ಐಟಿ) ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಲಾಗಿದೆ.


Click it and Unblock the Notifications
