MUDA: ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೆ ರಾಷ್ಟ್ರಪತಿ ಭೇಟಿ: ಸಚಿವ
ಬೆಂಗಳೂರು, ಆಗಸ್ಟ್ 10: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಹೆಸರು ಕೇಳಿ ಬರುತ್ತಿದ್ದಂತೆ ಪ್ರಕರಣದ ಕಾವು ರಾಜ್ಯಾದ್ಯಂತ ವ್ಯಾಪಿಸಿತು. ರಾಜಕಾರಣದಲ್ಲಂತೂ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಾಲದೆಂಬಂತೆ ದೂರಿನ ಆಧಾರದಲ್ಲಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ನೋಟಿಸ್ ಜಾರಿ ಮಾಡಿದ್ದಾರೆ. ಈ ನೋಟಿಸ್ ಹಿಂಪಡೆಯುವಂತೆ ಒತ್ತಾಯ ಮಾಡಿರುವ ಸಂಪುಟ ಸಚಿವರು, ಮುಂದಿನ ದಿನಗಳಲ್ಲಿ ರಾಷ್ಟ್ರಪತಿ ಭೇಟಿಗೆ ನಿರ್ಧರಿಸಿದ್ದಾರೆ.
ಮೂಡಾ ಪ್ರಕರಣ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಶನಿವಾರ ಪ್ರತಿಕ್ರಿಯಿಸಿದ್ದು, ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವುದಿಲ್ಲ ಎಂಬ ವಿಶ್ವಾಸವಿದೆರು.

ಒಂದು ವೇಳೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೆ, ಸರ್ಕಾರ ಕಾನೂನು ಹೋರಾಟ ನಡೆಸಲಾಗುವುದು. ಕಾನೂನು ಹೋರಾಟ ಪ್ರಾರಂಭವಾದ ಬಳಿಕ ಮುಂದಿನ ಬೆಳವಣಿಗೆ ಏನೆಂಬುದನ್ನು ಗಮನಿಸಿ ರಾಷ್ಟ್ರಪತಿಯವರನ್ನು ಭೇಟಿ ಮಾಡಲು ನಿರ್ಧರಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಹತ್ತಾರು ಪ್ರಕರಣಗಳು ರಾಜ್ಯಪಾಲರ ಕಚೇರಿಯಲ್ಲಿ ಬಾಕಿ ಉಳಿದಿವೆ. ಯಾವುದಕ್ಕು ಕೂಡ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಮುಂದಾಗಿಲ್ಲ. ಮೂಡಾ ವಿಚಾರದಲ್ಲಿ ತರಾತುರಿಯಲ್ಲಿ ನೋಟಿಸ್ ನೀಡಿದ್ದಾರೆ. ಜುಲೈ 26ರಂದು ರಾಜ್ಯಪಾಲರಿಗೆ ಟಿ.ಜೆ.ಅಬ್ರಹಾಂ ಮನವಿ ಕೊಡುತ್ತಾರೆ. ಅದೇ ದಿನ ರಾಜ್ಯಪಾಲರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆಯುತ್ತಾರೆ.
ಇನ್ನೂ ಮುಖ್ಯ ಕಾರ್ಯದರ್ಶಿಯವರು ಹೋಗಿ ಸ್ಪಷ್ಟನೆ ನೀಡಿ ಬಂದಿದ್ದಾರೆ. ಅದೇದಿನ ಸಂಜೆ ಸಿಎಂ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ಇದರ ಹಿಂದಿನ ಉದ್ದೇಶ ಏನೆಂಬುದನ್ನು ರಾಜ್ಯಪಾಲರು ಹೇಳಬೇಕಲ್ಲವೇ ಎಂದು ಅವರು ಪ್ರಶ್ನಿಸಿದರು.
ರಾಜ್ಯಪಾಲರು ಅಧಿಕಾರಿ, ರಾಜಕಾರಣಿ ಅಲ್ಲ
ರಾಜ್ಯಪಾಲರು ಸಾಮಾನ್ಯ ರಾಜಕಾರಣಿಯೋ ಅಥವಾ ಅಧಿಕಾರಿಯೋ ಅಲ್ಲ. ಸಂವಿಧಾನದ ಮುಖ್ಯಸ್ಥರು. ಅನೇಕ ಪ್ರಕರಣಗಳು ಅವರ ಕಚೇರಿಯಲ್ಲಿ ಬಾಕಿ ಉಳಿದು, ಯಾವುದಕ್ಕು ಗಮನ ಹರಿಸದೇ ಏಕಾಏಕಿ ಮುಖ್ಯಮಂತ್ರಿಯವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಇದರ ಹಿಂದೆ ಷಡ್ಯಂತ್ರ ಇದೆ. ರಾಜ್ಯಪಾಲರ ಮುಂದಿನ ನಡೆ ಏನು ಎಂಬುದನ್ನು ಕಾದು ನೋಡುತ್ತೇವೆ.

ಬಿಜೆಪಿ ಕಾಲದಲ್ಲಿ ಸಾಕಷ್ಟು ಹಗರಣಗಳಾಗಿವೆ. ತನಿಖೆಗೆ ಆದೇಶ ಮಾಡಿದ್ದೇವೆ. ವರದಿಯನ್ನು ಆಧರಿಸಿ ಮುಂದಿನ ಕ್ರಮದ ಬಗ್ಗೆ ಕ್ಯಾಟಿನೆಟ್‌ನಲ್ಲಿ ನಿರ್ಧರಿಸುತ್ತೇವೆ ಎಂದು ತಿಳಿಸಿದರು.
ಬಿಜೆಪಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೋ ಪ್ರಕರಣದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ತೆರವು ಮಾಡಿಸಲು ಅಡ್ವೋಕೇಟ್ ಜನರಲ್‌ಗೆ ತಿಳಿಸಲಾಗಿದೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಎಚ್‌ಡಿ ಕುಮಾರಸ್ವಾಮಿಗೆ ತಿರುಗೇಟು
ಕೆಲವು ದಿನಗಳಲ್ಲಿ ಸರ್ಕಾರದಲ್ಲಿ ಯಾರು ಎಲ್ಲೆಲ್ಲಿರಬೇಕು, ಏನೇನಾಗುತ್ತದೆ ಎಂದು ಕಾದು ನೋಡಿ ಎಂದು ಎಚ್‌ಡಿ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು ಅವರು ಎಚ್ಚರಿಕೆ ನೀಡಲಿ ನಮ್ಮದೇನು ತಕಾರಾರು ಇಲ್ಲ. ಅದಕ್ಕು ಮುನ್ನ ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡಲಿ. ಬೇರೆ ಬೇರೆ ಪ್ರಕರಣಗಳ ಕುರಿತು ತನಿಖೆ ಆಗುತ್ತಿದೆ. ದೇವರಾಜು ಅರಸು ಟ್ರಕ್ ಟರ್ಮಿನಲ್‌ನಲ್ಲಿ 47 ಕೋಟಿ ರೂ. ಚೆಕ್ ಮೂಲಕ ಪಡೆದುಕೊಂಡಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಅಧಿಕಾರಿಗಳನ್ನು ಬಂಧಿಸಲಾಗಿದೆ. ಈ ಬಗ್ಗೆ ಗಮನದಲ್ಲಿ ಇತ್ತು, ಇರಲಿಲ್ಲ ಎಂಬುದರ ಕುರಿತು ಬಿಜೆಪಿಯವರು ಉತ್ತರಿಸಲಿ ಎಂದು ಸವಾಲೊಡ್ಡಿದ್ದರು.
ಸರ್ಕಾರ ಬೀಳಿಸುವುದು ಸುಲಭವೇ?, 136 ಶಾಸಕರಿದ್ದೇವೆ. ಯಾವ ರೀತಿ ಸರ್ಕಾರ ಬೀಳಿಸುತ್ತಾರೆ ನೀವೆ ಹೇಳಿ?. ಈ ಹಿಂದೆಯು ಹಲವು ಭಾರಿ ಸರ್ಕಾರ ಪತನವಾಗಲಿದೆ ಎಂದಿದ್ದರು, ಆಯಿತೇ?. ಈಗ ಮೂರು ತಿಂಗಳಲ್ಲಿ ಪತನ ಎಂದಿದ್ದಾರೆ. ನೀವು ಮೂರು ತಿಂಗಳು ಕಾಯಬೇಕು. ಸರ್ಕಾರ ಬೀಳಿಸುವುದು ತಮಾಷೆಯಲ್ಲ ಎಂದು ಅವರು ಎಚ್ಚರಿಸಿದರು.












Click it and Unblock the Notifications