ಕಮಲ-ದಳ ದೋಸ್ತಿ: ಲೋಕಸಭಾ ಚುನಾವಣೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಸ್ಪರ್ಧೆಗೆ ಹೆಚ್ಚಿದ ಒತ್ತಡ
ಬೆಂಗಳೂರು,ಡಿಸೆಂಬರ್ 23: 2024ರ ಲೋಕಸಭೆ ಚುನಾವಣೆಯಲ್ಲಿ ನಾನು ಮತ್ತು ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಆದರೆ, ಪಕ್ಷದ ಕಾರ್ಯಕರ್ತರು ಹಾಗೂ ಬಿಜೆಪಿಯ ಒತ್ತಡಕ್ಕೆ ಮಣಿದು ಮಾಜಿ ಮುಖ್ಯಮಂತ್ರಿ ಮನಸ್ಸು ಬದಲಿಸಿ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನುವ ಮಾತುಗಳು ಕೇಳಿ ಬಂದಿದೆ.
ಕುಮಾರಸ್ವಾಮಿ ಸಂಸದರಾದರೆ ಮತ್ತು ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬಂದರೆ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಕುಮಾರಸ್ವಾಮಿ ಕೇಂದ್ರ ಸಚಿವರಾದರೇ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಮೇಲೆ ಪರಿಣಾಮ ಬೀರುವ ರಾಜ್ಯದ ಅಭಿವೃದ್ಧಿಗೆ ಸಹಾಯ ಮಾಡಬಹುದು ಎಂದು ಜೆಡಿಎಸ್ ಮೂಲಗಳು ತಿಳಿಸಿದ್ದು, ಕುಮಾರಸ್ವಾಮಿ ಅವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಯೇ ಎಂಬುದನ್ನ ಕಾದುನೋಡಬೇಕಿದೆ.

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ರಾಜ್ಯದ 28 ಸ್ಥಾನಗಳ ಪೈಕಿ ನಾಲ್ಕು ಸ್ಥಾನಗಳ ನಿರೀಕ್ಷೆಯಲ್ಲಿದೆ. ಪಕ್ಷದ ವರಿಷ್ಠರು ಹಾಗೂ ರಾಜ್ಯಸಭಾ ಸದಸ್ಯ ಎಚ್‌ಡಿ ದೇವೇಗೌಡರು ಸ್ಪರ್ಧಿಸುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ. ಕುಮಾರಸ್ವಾಮಿ ಸ್ಪರ್ಧಿಸಿದರೆ ಮಂಡ್ಯ ಅವರ ಆಯ್ಕೆ ಆಗಲಿದ್ದು, ಈಗಾಗಲೇ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅಲ್ಲಿ ಸಂಭಾವ್ಯ ಅಭ್ಯರ್ಥಿ ಎಂದು ಪ್ರಚಾರ ನಡೆಸುತ್ತಿದ್ದಾರೆ.
2019 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧಿಸಿದ್ದರು ಆದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ವಿರುದ್ಧ ಸೋತರು. ಆದರೆ 2024ರಲ್ಲಿ ಒಕ್ಕಲಿಗ-ಲಿಂಗಾಯತ ಮೈತ್ರಿ ಕುಮಾರಸ್ವಾಮಿ ಪರವಾಗಿ ಕೆಲಸ ಮಾಡಲಿದೆ ಎಂದು ರಾಜಕೀಯ ವೀಕ್ಷಕರು ಹೇಳಿದ್ದಾರೆ. ಜೆಡಿಎಸ್ ಒಕ್ಕಲಿಗರ ಬೆಂಬಲಕ್ಕೆ ಹೆಸರುವಾಸಿಯಾಗಿದೆ, ಆದರೆ ಬಿಜೆಪಿ ಲಿಂಗಾಯತರ ಬೆಂಬಲವನ್ನು ಹೊಂದಿದೆ.
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಹೆಚ್ ಡಿ ದೇವೇಗೌಡರೊಂದಿಗೆ ಗುರುವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಜೆಡಿಎಸ್-ಬಿಜೆಪಿ ಮೈತ್ರಿ ಕುರಿತು ಚರ್ಚೆ ನಡೆಸಿದರು. ಮುಂದಿನ ವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ ನಂತರ ಕ್ಷೇತ್ರ ಹಂಚಿಕೆ ಕುರಿತು ಅಂತಿಮ ತಿರ್ಮಾನ ತೆಗೆದುಕೊಳ್ಳಲಿದೆ ಎಂದು ಹೇಳಲಾಗಿದೆ.

ಇನ್ನೂ ಶುಕ್ರವಾರ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಚರ್ಚೆ ನಡೆಸಿದ್ದಾರೆ. ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಸಹಕಾರ ಯಾವಾಗಲೂ ಇರುತ್ತದೆ ಎಂದು ಅವರು ನನಗೆ ಭರವಸೆ ನೀಡಿದರು ಎಂದು ಕುಮಾರಸ್ವಾಮಿ ಪೋಸ್ಟ್ ಮಾಡಿದ್ದಾರೆ.












Click it and Unblock the Notifications