ಶಿವಲಿಂಗೇಗೌಡರನ್ನು ಮಂತ್ರಿಗಿರಿ ಆಫರ್ ನೀಡಿದ ಸಿದ್ದರಾಮಯ್ಯ: ಕೊಟ್ಟ ಟಾಸ್ಕ್ ಏನು ಗೊತ್ತಾ?
ಹಾಸನ, ಏಪ್ರಿಲ್ 22: ಲೋಕಸಭಾ ಚುನಾವಣೆ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರಿಗೆ ಹಾಗೂ ಆಡಳಿತರೂಢ ಕಾಂಗ್ರೆಸ್ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ಅಬ್ಬರದ ಪ್ರಚಾರವನ್ನ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭಾ ಚುನಾವಣೆ ಹೊತ್ತಲಿ ಅರಸೀಕೆರೆ ಶಾಸಕ ಶಿವಲಿಂಗೇಗೌಡರಿಗೆ ಬಿಗ್ ಆಫರ್ ನೀಡಿದ್ದಾರೆ.
ಹೌದು, ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಪ್ರಚಾರ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶ್ರೇಯಸ್ ಪಟೇಲ್ ಅವರನ್ನು ಹಾಸನ ಲೋಕಸಭಾ ಕ್ಷೇತ್ರದಿಂದ ಗೆಲ್ಲಿಸಿಕೊಂಡು ಬನ್ನಿ. ಶಾಸಕ ಶಿವಲಿಂಗೇಗೌಡರನ್ನು ಮಂತ್ರಿ ಮಾಡುವ ಜವಾಬ್ದಾರಿ ನನಗೆ ಬಿಡಿ ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಘೋಷಿಸುವ ಮೂಲಕ ಹಾಸನ ಜನತೆಗೆ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸುವ ಜವಾಬ್ದಾರಿಯನ್ನ ನೀಡಿದ್ದಾರೆ.

ದೇವೇಗೌಡರು ತಮ್ಮ ಕುಟುಂಬದ ರಾಜಕೀಯ ಹಿತಾಸಕ್ತಿಗಾಗಿ ಮೋದಿಯವರನ್ನು ಹಿಗ್ಗಾ ಮುಗ್ಗಾ ಹೊಗಳುತ್ತಿದ್ದಾರೆ. ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೀನಿ ಎಂದಿದ್ದ ದೇವೇಗೌಡರೇ, ಈಗ ಮೋದಿಯವರು ರಾಜ್ಯದ ಜನತೆಯ ಕೈಗೆ ನೀಡಿದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ಹೊಗಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ದೇವೇಗೌಡರ ಅಳಿಯ ಬೆಂಗಳೂರು ಗ್ರಾಮಾಂತರದಲ್ಲಿ, ಮಗ ಮಂಡ್ಯದಲ್ಲಿ, ಮೊಮ್ಮಗ ಹಾಸನದಲ್ಲಿ ಸ್ಪರ್ಧಿಸಿದ್ದಾರೆ. ಇವರಿಗೆ ತಮ್ಮ ಕುಟುಂಬದ ಆಚೆ ಅಭ್ಯರ್ಥಿಗಳೇ ಕಾಣುತ್ತಿಲ್ಲ. ಹೀಗಾಗಿ ಈ ಬಾರಿ ಪ್ರಜ್ವಲ್ ರೇವಣ್ಣ ಅವರನ್ನು ಮನೆಗೆ ಕಳುಹಿಸಿ ಶ್ರೇಯಸ್ ಪಟೇಲ್ ಅವರನ್ನು ಗೆಲ್ಲಿಸಿಕೊಂಡು ಬನ್ನಿ ಎಂದು ಕರೆ ನೀಡಿದರು.
ರಾಜ್ಯದಲ್ಲಿ ಅತಿ ಹೆಚ್ಚು ಒಕ್ಕಲಿಗ ನಾಯಕರನ್ನು ರಾಜಕೀಯವಾಗಿ ಮುಗಿಸಿದ ಶ್ರೇಯಸ್ಸು ದೇವೇಗೌಡರದ್ದಾಗಿದೆ. ಅರಸೀಕೆರೆ ಶಿವಲಿಂಗೇಗೌಡರು ಕಾಂಗ್ರೆಸ್ ಸೇರಿ ಬಚಾವಾದರು ಎಂದರು. ಶಿವಲಿಂಗೇಗೌಡರು ಕ್ಷೇತ್ರದ ಅಭಿವೃದ್ದಿಗೆ ಕೇಳುವ ಎಲ್ಲಾ ಕೆಲಸಗಳಿಗೆ ಸಹಿ ಹಾಕಲು ನಾನು ಸಿದ್ದನಿದ್ದೇನೆ. ಶಿವಲಿಂಗೇಗೌಡರನ್ನು ಮಂತ್ರಿ ಮಾಡುವ ಜವಾಬ್ದಾರಿಯನ್ನೂ ನನಗೆ ಬಿಡಿ, ಇದಕ್ಕಾಗಿ ಶ್ರೇಯಸ್ ಪಟೇಲ್ ಅವರನ್ನು ಭರ್ಜರಿ ಬಹುಮತದಿಂದ ಗೆಲ್ಲಿಸಿಕೊಂಡು ಬನ್ನಿ ಎಂದು ಕರೆ ನೀಡಿದರು.












Click it and Unblock the Notifications