ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಪ್ರಕರಣ: ನ.29ಕ್ಕೆ ವಿಚಾರಣೆ
ಬೆಂಗಳೂರು, ನವೆಂಬರ್ 23: ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ವಿರುದ್ಧದ ಆದಾಯಕ್ಕೂ ಮೀರಿದ ಅಧಿಕ ಆಸ್ತಿ ಗಳಿಕೆ ಆರೋಪ ಪ್ರಕರಣದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನವೆಂಬರ್ 29ರಂದು ಕೈಗೆತ್ತಿಕೊಳ್ಳಲಿದೆ. ತಮ್ಮ ವಿರುದ್ಧದ ಸಿಬಿಐ ತನಿಖೆಗೆ ಆದೇಶಿಸಿದ್ದ ಹಿಂದಿನ ಸರ್ಕಾರದ ಆದೇಶ ರದ್ದು ಕೋರಿ ಡಿ. ಕೆ. ಶಿವಕುಮಾರ್ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ.
ಸಿಬಿಐ ತನಿಖೆಗೆ ಅನುಮತಿ ನೀಡಿ 2021ರ ಸೆಪ್ಟೆಂಬರ್ 25ರಂದು ಹಿಂದಿನ ಸರ್ಕಾರ ಹೊರಡಿಸಿದ್ದ ಆದೇಶ ರದ್ದು ಕೋರಿ ಡಿ. ಕೆ. ಶಿವಕುಮಾರ್ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ವಜಾಗೊಳಿಸಿ 2023ರ ಏಪ್ರಿಲ್‌ನಲ್ಲಿ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಆದೇಶಿಸಿತ್ತು. ಆ ಆದೇಶ ಪ್ರಶ್ನಿಸಿ ಶಿವಕುಮಾರ್ ಸಲ್ಲಿಸಿರುವ ಮೇಲ್ಮನವಿಯು ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಾಳೆ ಅವರ ನೇತೃತ್ವದ ವಿಭಾಗೀಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.

ಬೆಳಗಿನ ಕಲಾಪದ ಆರಂಭವಾಗುತ್ತಿದ್ದಂತೆ ಸಿಬಿಐ ಪರ ಕೇಂದ್ರ ಸರ್ಕಾರದ ಸಹಾಯಕ ಸಾಲಿಸಿಟರ್ ಜನರಲ್ ಎಸ್.ವಿ ರಾಜು ಹಾಜರಾಗಿ, ಸಿಬಿಐ ವಾದ ಮಂಡನೆಗೆ ನವೆಂಬರ್ 27ರಂದು ದಿನಾಂಕ ನಿಗದಿಪಡಿಸುವಂತೆ ನ್ಯಾಯಪೀಠವನ್ನು ಕೋರಿದರು.
ಅದಕ್ಕೆ ನ್ಯಾಯಪೀಠ, ಮಧ್ಯಾಹ್ನ ಮೇಲ್ಮನವಿದಾರರ ಪರ ವಕೀಲರ ವಾದ ಆಲಿಸಲಾಗುವುದು. ನಂತರ ಸಿಬಿಐ ವಾದ ಆಲಿಸಲು ಸೂಕ್ತ ದಿನಾಂಕ ನಿಗದಿಪಡಿಸಲಾಗುವುದು ಎಂದು ತಿಳಿಸಿ, ವಿಚಾರಣೆಯನ್ನು ಮಧ್ಯಾಹ್ನಕ್ಕೆ ಮುಂದೂಡಿತು.
ಆದರೆ, ಮಧ್ಯಾಹ್ನದ ಕಲಾಪದ ವೇಳೆ ಸಿಬಿಐ ಮತ್ತು ಮೇಲ್ಮನವಿದಾರರ ಪರ ವಕೀಲರು ಹಾಜರಾಗಿ, ವಾದ ಮಂಡನೆಗೆ ಸ್ವಲ್ಪ ಕಾಲಾವಕಾಶ ನೀಡುವಂತೆ ಜಂಟಿಯಾಗಿ ಮನವಿ ಮಾಡಿದರು. ಅದನ್ನು ಪರಿಗಣಿಸಿದ ವಿಭಾಗೀಯ ಪೀಠ, ವಿಚಾರಣೆಯನ್ನು ನವೆಂಬರ್ 29ಕ್ಕೆ ಮುಂದೂಡಿತು.
ಎರಡು ವಾರಗಳಲ್ಲಿ ಇತ್ಯರ್ಥಕ್ಕೆ ಸೂಚನೆ: ಸಿಬಿಐ ಪರ ವಕೀಲರು ನವೆಂಬರ್ 15ರಂದು ವಿಭಾಗೀಯ ಪೀಠದ ಮುಂದೆ ಹಾಜರಾಗಿ, ಪ್ರಕರಣದ ತನಿಖೆಗೆ ಹೈಕೋರ್ಟ್ ನೀಡಿರುವ ತಡೆ ತೆರವುಗೊಳಿಸುವ ವಿಚಾರವಾಗಿ ಸುಪ್ರೀಂಕೋರ್ಟ್‌ಗೆ ವಿಶೇಷ ಮೇಲ್ಮನವಿ ಸಹ ಸಲ್ಲಿಸಲಾಗಿತ್ತು.
ಅದರ ವಿಚಾರಣೆ ನಡೆಸಿದ್ದ ಸುಪ್ರಿಂ ಕೋರ್ಟ್, ತನಿಖೆಗೆ ನೀಡಿರುವ ತಡೆಯನ್ನು ತೆರವು ಕೋರಿ ಸಿಬಿಐ ಸಲ್ಲಿಸಿರುವ ಮಧ್ಯಂತರ ಅರ್ಜಿ ಹಾಗೂ ಡಿ. ಕೆ. ಶಿವಕುಮಾರ್ ಅವರ ಮೇಲ್ಮನವಿಯನ್ನು ಎರಡು ವಾರಗಳಲ್ಲಿ ಇತ್ಯರ್ಥಪಡಿಸುವಂತೆ ಹೈಕೋರ್ಟ್‌ಗೆ ಸೂಚಿಸಿದೆ ಎಂದು ತಿಳಿಸಿದ್ದರು. ಅದಕ್ಕೆ ಒಪ್ಪಿದ್ದ ವಿಭಾಗೀಯ ಪೀಠವು ಮೇಲ್ಮನವಿ ವಿಚಾರಣೆಯನ್ನು ನವೆಂಬರ್ 22ಕ್ಕೆ ನಿಗದಿಪಡಿಸಿತ್ತು.












Click it and Unblock the Notifications