ಡಿಕೆಶಿ ಅಕ್ರಮ ಆಸ್ತಿ ಕೇಸ್: ಮಾ.22ಕ್ಕೆ ಹೈಕೋರ್ಟ್‌ನಲ್ಲಿ ತೀರ್ಪು?

ಬೆಂಗಳೂರು, ಮಾರ್ಚ್‌ 01: ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ವಿರುದ್ಧದ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ರಾಜ್ಯ ಸರ್ಕಾರ ಆದೇಶ ರದ್ದು ಕೋರಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್‌ ಮಾರ್ಚ್ 22ಕ್ಕೆ ಮುಂದೂಡಿದೆ.

ಅಂದು ಬೆಳಗ್ಗೆ 10.20ರಿಂದ ಸಂಜೆ 4.30ರ ನಡುವೆ ಅರ್ಜಿಗಳ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಾಲಯ ಹೇಳಿದೆ. ಹಾಗಾಗಿ ಬಹುತೇಕ ಎರಡೂ ಕಡೆ ವಾದ ಪ್ರತಿವಾದ ಆಲಿಸಿ ನ್ಯಾಯಾಲಯ ತೀರ್ಪು ಕಾಯ್ದಿರಿಸುವ ಸಾಧ್ಯತೆ ಇದೆ.

Illegal Assets Case Against DK Shivakumar Adjourned To March 22

ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಅರ್ಜಿಗಳು ನ್ಯಾಯಮೂರ್ತಿ ಕೆ. ಸೋಮಶೇಖರ್ ಮತ್ತು ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ ಅವರ ವಿಭಾಗೀಯ ಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದವು.

ಸಿಬಿಐ ಪರ ಕೇಂದ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌. ವಿ. ರಾಜು ಅವರು ವಾದ ಮಂಡಿಸಿ, "ಸರ್ಕಾರ ಅನುಮತಿ ಪಡೆದಿರುವುದರಿಂದ ಈ ಪ್ರಮುಖ ಪ್ರಕರಣದಲ್ಲಿ ಸಿಬಿಐ ತನಿಖೆ ಸ್ಥಗಿತಗೊಂಡಿದೆ. ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಬೇಕೆಂಬ ಮನವಿ ಕುರಿತ ವಾದವನ್ನು ಮಾರ್ಚ್ ಮೊದಲ ಅಥವಾ ಎರಡನೇ ವಾರದಲ್ಲಿ ಆಲಿಸಬೇಕು. ಅದಕ್ಕಾಗಿ ದಿನಾಂಕ ನಿಗದಿಪಡಿಸಬೇಕು" ಎಂದು ಕೋರಿದರು.

ಆದರೆ, ನ್ಯಾಯಾಲಯದಲ್ಲಿ ಹಾಜರಿದ್ದ ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ಡಿ. ಕೆ. ಶಿವಕುಮಾರ್ ಅವರ ಪರ ಮತ್ತೊಬ್ಬ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು, "ಆ ಸಮಯದಲ್ಲಿ ತಮಗೆ ಬೇರೆ ಪ್ರಕರಣಗಳ ವಿಚಾರಣೆ ಇವೆ" ಎಂದು ಪೀಠಕ್ಕೆ ತಿಳಿಸಿದರು.

ನ್ಯಾಯಮೂರ್ತಿ ಸೋಮಶೇಖರ್‌ ಅವರು, ಈ ವಿಭಾಗೀಯ ಪೀಠದ ಮತ್ತೋರ್ವ ನ್ಯಾಯಮೂರ್ತಿ ಅಡಿಗ ಅವರು ಧಾರವಾಡ ಪೀಠದಲ್ಲಿ ಅರ್ಜಿಗಳ ವಿಚಾರಣೆ ನಡೆಸುತ್ತಿದ್ದಾರೆ. ಈ ಅರ್ಜಿಗಳ ವಿಚಾರಣೆಗೆ ಅವರು ಭೌತಿಕವಾಗಿ ಬೆಂಗಳೂರಿನ ಪ್ರಧಾನ ಪೀಠಕ್ಕೆ ಬರಬೇಕಿದೆ ಎಂದು ತಿಳಿಸಿ ವಿಚಾರಣೆಯನ್ನು ಮಾರ್ಚ್ 22ಕ್ಕೆ ಮುಂದೂಡಿದರು.

ಪ್ರಕರಣದ ಹಿನ್ನೆಲೆ: 2019ರಲ್ಲಿ ಬಿಜೆಪಿ ಸರ್ಕಾರವು ಡಿ. ಕೆ. ಶಿವಕುಮಾರ್ ವಿರುದ್ಧ ಅಕ್ರಮ ಹಣ ಗಳಿಕೆ ಪ್ರಕರಣದ ತನಿಖೆ ಸಿಬಿಐಗೆ ಅನುಮತಿಸಿತ್ತು. ಇದನ್ನು ಪ್ರಶ್ನಿಸಿ ಡಿ. ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಜಾ ಮಾಡಿತ್ತು. ಆನಂತರ ಇದನ್ನು ಪ್ರಶ್ನಿಸಿ ಡಿ. ಕೆ. ಶಿವಕುಮಾರ್ ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದರು.

ಈ ಮಧ್ಯೆ, ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದು, ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ನವೆಂಬರ್ 28ರಂದು ಹಿಂಪಡೆದಿತ್ತು. ಈ ಹಿನ್ನೆಲೆಯಲ್ಲಿ ಡಿ. ಕೆ. ಶಿವಕುಮಾರ್ ಮೇಲ್ಮನವಿ ಹಿಂಪಡೆದಿದ್ದರು. ಹೀಗಾಗಿ, ವಿಭಾಗೀಯ ಪೀಠವು ಅರ್ಜಿ ಇತ್ಯರ್ಥಪಡಿಸಿತ್ತು.

ಇದಕ್ಕೆ ಆಕ್ಷೇಪಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇದೀಗ ಸಿಬಿಐ ಸಹ ಹೈಕೋರ್ಟ್ ಮೊರೆ ಹೋಗಿದೆ.

ಈ ಹಿಂದೆ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ನ್ಯಾಯಪೀಠ, ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಬೇಕು ಎಂದು ತಿಳಿಸಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾಯಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+