ಅಕ್ರಮ ಆಸ್ತಿಗಳಿಕೆ ಪ್ರಕರಣ; ಸಚಿವ ಜಮೀರ್‌ಗೆ ಹೊಸ ಸಂಕಷ್ಟ!
ಬೆಂಗಳೂರು, ನವೆಂಬರ್ 21: ಕಾಂಗ್ರೆಸ್ ನಾಯಕ, ವಸತಿ ಹಾಗೂ ಅಲ್ಪ ಸಂಖ್ಯಾತ ವ್ಯವಹಾರಗಳ ಖಾತೆ ಸಚಿವ ಜಮೀರ್ ಅಹ್ಮದ್ ಖಾನ್‌ಗೆ ಹೊಸ ಸಂಕಷ್ಟ ಎದುರಾಗಿದೆ. ಅವರ ವಿರುದ್ಧದ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಭ್ರಷ್ಟಾಚಾರ ನಿಗ್ರಹ ಕಾಯಿದೆಯಡಿ ದಾಖಲಿಸಿದ್ದ ಆದಾಯಕ್ಕೂ ಮೀರಿದ ಆಕ್ರಮ ಆಸ್ತಿ ಗಳಿಕೆ ಪ್ರಕರಣ ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣ ರದ್ದು ಕೋರಿ ಜಮೀರ್ ಅಹ್ಮದ್ ಖಾನ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಆದ್ದರಿಂದ ಸಚಿವರಿಗೆ ಕಾನೂನು ಹೋರಾಟದಲ್ಲಿ ಹಿನ್ನಡೆಯಾಗಿದೆ.

ತೀರ್ಪು 30 ದಿನ ಅಮಾನತು: ನ್ಯಾಯಪೀಠ ಜಮೀರ್ ಆಹ್ಮದ್ ಖಾನ್ ಅರ್ಜಿ ವಜಾಗೊಳಿಸುವ ಆದೇಶ ಪ್ರಕಟಿಸುತ್ತಿದ್ದಂತೆಯೇ, ಅವರ ಪರ ವಕೀಲರು ಸುಪ್ರೀಂಕೋರ್ಟ್ ನಲ್ಲಿ ಇದೇ ವಿಚಾರದ ಸಂಬಂಧದ ಮೇಲ್ಮನವಿ ಬಾಕಿ ಇರುವ ವಿಚಾರ ತಿಳಿಸಿ ಅದು ಇತ್ಯರ್ಥವಾಗುವವರೆಗೆ ಈ ತೀರ್ಪು ಅಮಾನತ್ತಿನಲ್ಲಿ ಇಡಬೇಕು ಎಂದು ಕೋರಿದರು. ಆ ಮನವಿಯನ್ನು ಮಾನ್ಯ ಮಾಡಿದ ನ್ಯಾಯಪೀಠ, ಈ ತೀರ್ಪನ್ನು 30 ದಿನ ಅಮಾನತ್ತಿನಲ್ಲಿರಿಸುವುದಾಗಿ ಆದೇಶಿಸಿತು.
"ಪ್ರಕರಣದ ಆದಾಯದ ಮೂಲದ ಮಾಹಿತಿ ವರದಿ (ಸೋರ್ಸ್ ಇನ್ಫಾರ್ಮೇಷನ್ ರಿಪೋರ್ಟ್ ) ಅಥವಾ ಜಾರಿ ನಿರ್ದೇಶಾಲಯ ಸೆಕ್ಷನ್ 66 (2)ರಡಿ ನೀಡಿರುವ ಸಂವಹನದಂತೆ ಮೇಲ್ನೋಟಕ್ಕೆ ಅರ್ಜಿದಾರರು ಭ್ರಷ್ಟಾಚಾರ ನಿಗ್ರಹ ತಡೆ ಕಾಯಿದೆ ಸೆಕ್ಷನ್ 13(1)(ಬಿ) ವ್ಯಾಪ್ತಿಗೆ ಒಳಪಡುತ್ತಾರೆ" ಎಂದು ನ್ಯಾಯಾಲಯ ಆದೇಶಿಸಿದೆ.
ಅಲ್ಲದೆ, ಅರ್ಜಿದಾರರ ಎಲ್ಲ ವಾದಗಳನ್ನು ತಳ್ಳಿಹಾಕಿರುವ ನ್ಯಾಯಾಲಯ "ಐಎಂಎ ಪವರ್ತಕರ ವಿರುದ್ಧ ಅಪರಾಧ ಪ್ರಕರಣ ದಾಖಲಿಸಲಾಗಿದೆ ಮತ್ತು ಅದೇ ಸಂಬಂಧ ಅರ್ಜಿದಾರರ ಕಚೇರಿ ಹಾಗೂ ನಿವಾಸಗಳಲ್ಲಿ ಶೋಧ ಕಾರ್ಯ ನಡೆಸಲಾಗಿದೆ. ಅದರ ತನಿಖೆ ಇನ್ನೂ ಬಾಕಿ ಇದೆ. ಈ ಹಂತದಲ್ಲಿ ಜಾರಿ ನಿರ್ದೇಶನಾಲಯದ ವರದಿಯಲ್ಲಿ ಏನೂ ಇಲ್ಲ ಎಂದು ತಳ್ಳಿಹಾಕಲಾಗದು. ಅಪರಾಧಕ್ಕೆ ಅದೇ ಮೂಲವಾಗುತ್ತದೆ" ಎಂದು ನ್ಯಾಯಾಲಯ ಆದೇಶದಲ್ಲಿ ವಿವರಿಸಿದೆ.
ಜಮೀರ್ ಪರ ವಕೀಲರು, ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಎಫ್‌ಐಆರ್ ದಾಖಲಿಸುವ ಮುನ್ನ ತನಿಖಾ ಸಂಸ್ಥೆ ಪ್ರಾಥಮಿಕ ವಿಚಾರಣೆ ನಡೆಸುವುದು ಕಡ್ಡಾಯ. ಈ ಕುರಿತು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಆದರೆ, ಈ ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ ಎಸಿಬಿ ನೇರವಾಗಿ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡಿದೆ. ಅರ್ಜಿದಾರರು ಆದಾಯ ಮೀರಿ ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿದ್ದಾರೆಂದು ಆರೋಪಿಸಿ ಜಾರಿ ನಿರ್ದೇಶನಾಲಯ (ಇಡಿ) ವರದಿ ಸಲ್ಲಿಸಿತ್ತು. ಆ ವರದಿ ಆಧರಿಸಿ ಎಸಿಬಿ ಎಫ್‌ಐಆರ್ ದಾಖಲಿಸಿದೆ. ಇದು ಕಾನೂನು ಬಾಹಿರ ಕ್ರಮ. ಹಾಗಾಗಿ ಪ್ರಕರಣ ರದ್ದುಗೊಳಿಸಬೇಕೆಂದು ಕೋರಿದ್ದರು.
ಲೋಕಾಯುಕ್ತ ಪರ ವಕೀಲರು, ಅಕ್ರಮವಾಗಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುವ ಮುನ್ನ ಪ್ರಾಥಮಿಕ ವಿಚಾರಣೆ ನಡೆಸುವ ಅಗತ್ಯವೇನು ಇಲ್ಲ. ಹಾಗಾಗಿ, ಎಸಿಬಿಯು ಅರ್ಜಿದಾರರ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಕ್ರಮ ಕಾನೂನುಬದ್ಧವಾಗಿದೆ ಎಂದು ಹೇಳಿದ್ದರು.
ಪ್ರಕರಣದ ಹಿನ್ನೆಲೆ: ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಡಿ ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಮೇಲೆ ದಾಳಿ ನಡೆಸಿದ್ದ ಎಸಿಬಿ, 2022ರ ಮೇ 5ರಂದು ಎಫ್‌ಐಆರ್ ದಾಖಲಿಸಿತ್ತು. ಶಾಸಕರು ಆದಾಯ ಮೀರಿ 82 ಕೋಟಿ ರೂ. ಹೆಚ್ಚುವರಿ ಆಸ್ತಿ ಗಳಿಸಿರುವ ಅಂಶ ದಾಳಿ ವೇಳೆ ಪತ್ತೆಯಾಗಿದೆ ಎಂದು ಎಸಿಬಿ ತಿಳಿಸಿತ್ತು. ಕಳೆದ ವರ್ಷ ಎಸಿಬಿ ರಚನೆ ಹೈಕೋರ್ಟ್ ರದ್ದುಪಡಿಸಿತ್ತು ಇದರಿಂದ ಎಸಿಬಿ ದಾಖಲಿಸಿದ ಪ್ರಕರಣ ಲೋಕಾಯುಕ್ತ ಸಂಸ್ಥೆ ಮುಂದುವರಿಸುತ್ತಿದೆ.
ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದ ಜಮೀರ್ ಅಹ್ಮದ್ ಖಾನ್, ತಮ್ಮ ವಿರುದ್ಧ ಎಸಿಬಿ ದಾಖಲಿಸಿರುವ ಎಫ್‌ಐಆರ್ ರದ್ದು ಕೋರಿದ್ದರು. ಹಾಗೆಯೇ, ಅರ್ಜಿ ಇತ್ಯರ್ಥವಾಗುವರೆಗೆ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡುವಂತೆ ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಆದರೆ ಆ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಅವರು ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ಬಾಕಿ ಇದೆ. ಏಕೆಂದರೆ ಈ ಹಿಂದೆ ಏಕಸದಸ್ಯಪೀಠ ಕಳೆದ ಏ.6ರಂದು ಎಫ್‌ಐಅರ್ ರದ್ದುಗೊಳಿಸಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಲ್ಲಿಸಿರುವ ಮೇಲ್ಮನವಿ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ಬಾಕಿ ಇದೆ. ಹಾಗಾಗಿ ಸುಪ್ರೀಂಕೋರ್ಟ್‌ನಲ್ಲಿ ಬಾಕಿ ಇರುವ ಮೇಲ್ಮನವಿ ಇತ್ಯರ್ಥವಾಗುವವರೆಗೆ ಈ ಆದೇಶ ಜಾರಿಯಾಗುವುದಿಲ್ಲ.












Click it and Unblock the Notifications