Weather Report: ಬೆಂಗಳೂರು ಸೇರಿ ಕರ್ನಾಟಕದಲ್ಲಿ ಮಳೆ ಕಡಿಮೆ, ಶೀತಗಾಳಿ ಪ್ರಮಾಣ ಹೆಚ್ಚಳ ಐಎಂಡಿ ಮುನ್ಸೂಚನೆ
Weather Report: ಚಂಡಮಾರುತ ಪ್ರಸರಣದ ತೀವ್ರತೆ ಅಲ್ಪ ಇಳಿಕೆ ಹಿನ್ನೆಲೆಯಲ್ಲಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ. ಬಂಗಾಳ ಕೊಲ್ಲಿ ಪೂರ್ವ - ಮಧ್ಯ ಭಾಗದಲ್ಲಿ ಮೇಲ್ಮಟ್ಟದ ವಾಯು ಚಂಡಮಾರುತ ಪರಿಚಲನೆ ಈಗ ಬಂಗಾಳಕೊಲ್ಲಿಯ ಮಧ್ಯಭಾಗದಲ್ಲಿದ್ದು, ಸರಾಸರಿ ಸಮುದ್ರ ಮಟ್ಟಕ್ಕಿಂತ 3.1 ಕಿ.ಮೀ ಎತ್ತರದಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇಂದಿನ ಬೆಂಗಳೂರು ಹಾಗೂ ಕರ್ನಾಟಕದ ಸಂಪೂರ್ಣ ಹವಾಮಾನ ವರದಿ ಇಲಿದೆ.
ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಮಳೆ ತುಸು ಬಿಡುವು ನೀಡಿದೆ. ನವೆಂಬರ್ 11ರ ಮಂಗಳವಾರದಂದು ಬಹುತೇಕ ಪ್ರದೇಶಗಳಲ್ಲಿ ಒಣಹವೆ ಮುಂದುವರಿದಿದೆ. ತಮಿಳುನಾಡಿನ ಉತ್ತರ ಒಳನಾಡು ಹಾಗೂ ನೆರೆಹೊರೆ ಪ್ರದೇಶಗಳಲ್ಲಿ ಸರಾಸರಿ ಸಮುದ್ರ ಮಟ್ಟಕ್ಕಿಂತ 3.1 ಕಿ.ಮೀ ಎತ್ತರದಲ್ಲಿ ಮೇಲ್ಮಟ್ಟದ ವಾಯು ಚಂಡಮಾರುತದ ಪರಿಚಲನೆ ಮುಂದುವರಿದಿದೆ. ಹೀಗಾಗಿ, ಮುಂದಿನ ಎರಡು ದಿನಗಳಲ್ಲಿ ಮಳೆ ಆಗುವ ಸಾಧ್ಯತೆಯೂ ಇದೆ.

ಕರ್ನಾಟಕದಲ್ಲಿ ಮಳೆ ಬಿಡುವು ಕೊಟ್ಟಿದ್ದು, ಚಳಿ ಪ್ರಮಾಣ ವಿವಿಧ ಜಿಲ್ಲೆಗಳಲ್ಲಿ ಹೆಚ್ಚಾಗಿದೆ. ಮುಂದಿನ ಮೂರರಿಂದ ನಾಲ್ಕು ದಿನಗಳ ವರೆಗೆ ಬೀದರ್, ಬೆಳಗಾವಿ, ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆ ಇದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
ಬೆಂಗಳೂರಿನಲ್ಲಿ ಹವಾಮಾನ ಹೇಗಿದೆ ?
ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ಯಾವುದೇ ಮಳೆ ಮುನ್ಸೂಚನೆ ಇಲ್ಲ. ಮುಂದಿನ 24 ಗಂಟೆ ಅವಧಿಯಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಕೆಲವು ಕಡೆಗಳಲ್ಲಿ ಮುಂಜಾನೆ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಇನ್ನು ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್ ಹಾಗೂ 17 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಇನ್ನು ಮುಂದಿನ 48 ಗಂಟೆಯ ಅವಧಿಯಲ್ಲೂ ಇದೇ ವಾತಾವರಣ ಇರುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ನಾಳೆ ಈ ಜಿಲ್ಲೆಗಳಲ್ಲಿ ಮಳೆ: ನವೆಂಬರ್ 12 ಬುಧವಾರ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಆಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಹೇಳಲಾಗಿದೆ.
ಇನ್ನು ರಾಜ್ಯದ ಸಮತಟ್ಟದ ಪ್ರದೇಶಗಳಲ್ಲಿ ಅತಿ ಕನಿಷ್ಠ ತಾಪಮಾನವು 11.2 ಡಿಗ್ರಿ ಸೆಲ್ಸಿಯಸ್ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಾದ್ಯಂತ ಈಶಾನ್ಯ ಮುಂಗಾರು ದುರ್ಬಲವಾಗಿತ್ತು. ಕರ್ನಾಟಕದ ಒಳನಾಡಿನಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಇತ್ತು.












Click it and Unblock the Notifications