ಕರ್ನಾಟಕ; ನವೆಂಬರ್ 6ರ ತನಕ ವಿವಿಧ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು, ನವೆಂಬರ್ 02; ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ವಾಯುಭಾರ ಕುಸಿತದ ಪರಿಣಾಮ ನವೆಂಬರ್ 4ರ ತನಕ ಹೆಚ್ಚು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶ್ರೀಲಂಕಾ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದಾಗಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನವೆಂಬರ್ 2 ರಿಂದ 6ರ ತನಕ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಭಾಗದ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 3 ರಿಂದ ಮತ್ತು ನವೆಂಬರ್ 6ರಿಂದ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಇರಲಿದ್ದು, ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

IMD Issued Heavy Rain Alert In Karnataka Till November 6

ಬಂಗಾಳಕೊಲ್ಲಿಯ ಮಧ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬೆಂಗಳೂರು ನಗರದಲ್ಲಿ ಸಹ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

ಸೋಮವಾರ ಕುಕ್ಕೆ ಸುಬ್ರಮಣ್ಯದಲ್ಲಿ 8 ಸೆಂ. ಮೀ. ಮಳೆಯಾಗಿದೆ. ಭಾಗಮಂಡಲದಲ್ಲಿ 5, ಸುಳ್ಯ 4, ಸಕಲೇಶಪುರ 4, ಕಾರ್ಕಳ 3, ಬೆಳ್ತಂಗಡಿ, ಬೆಳಗಾವಿ, ನಂಜನಗೂಡಿನಲ್ಲಿ ತಲಾ 1 ಸೆಂ. ಮೀ. ಮಳೆಯಾಗಿದೆ.

ಕೆಆರ್‌ಎಸ್‌ಗೆ ಬಾಗಿನ; ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೆಆರ್‌ಎಸ್ ಜಲಾಶಯ ಭರ್ತಿಯಾಗಿದೆ. 11 ವರ್ಷಗಳ ಬಳಿಕ ಕೆಆರ್‌ಎಸ್ ಡ್ಯಾಂ ಅಕ್ಟೋಬರ್ ತಿಂಗಳಿನಲ್ಲಿ ಭರ್ತಿಯಾಗಿದ್ದು ಜಲಸಂಪನ್ಮೂಲ ಇಲಾಖೆ ಹಾಗೂ ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಬಾಗಿನ ಸಮರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕೃಷ್ಣರಾಜಸಾಗರ (ಕೆಆರ್‌ಎಸ್) ಜಲಾಶಯದ ಶ್ರೀ ಕಾವೇರಿ ಪ್ರತಿಮೆಯ ಬಳಿ ಜಲಾಶಯವು ತುಂಬಿರುವ ಶುಭ ಸಂದರ್ಭದಲ್ಲಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಬಾಗಿನ ಸಮರ್ಪಣೆ ಮಾಡಲಾಗುತ್ತದೆ. ಬಾಗಿನ ಸಮರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಳ್ಳಲಿದ್ದಾರೆ. ಇದಕ್ಕೂ ಮೊದಲು ಮುಖ್ಯಂಮತ್ರಿಗಳು ಮೈಸೂರಿನಲ್ಲಿರುವ ಕಬಿನಿ ಜಲಾಶಯಕ್ಕೆ ಸಹ ಬಾಗಿನ ಅರ್ಪಿಸಲಿದ್ದಾರೆ.

ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ, ರೇಷ್ಮೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ. ಸಿ ನಾರಾಯಣ ಗೌಡ, ಸಹಕಾರ ಸಚಿವರಾದ ಎಸ್. ಟಿ ಸೋಮಶೇಖರ್ ಮುಂತಾದವರು ಪಾಲ್ಗೊಳ್ಳಲಿದ್ದಾರೆ.

ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿಯೇ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿದ್ದವು. ಆದರೆ ಕಾವೇರಿ ಕೊಳ್ಳದಲ್ಲಿ ಭಾರೀ ಮಳೆ ಸುರಿಯದ ಕಾರಣ, ತಮಿಳುನಾಡಿಗೆ ನಿತ್ಯವೂ 10 ಸಾವಿರ ಕ್ಯುಸೆಕ್ ನೀರು ಹರಿಸಿದ ಕಾರಣ ಕೆಆರ್‌ಎಸ್ ಜಲಾಶಯ ನಿಧಾನವಾಗಿ ಭರ್ತಿಯಾಗಿದೆ.

ಕೆಆರ್‌ಎಸ್ ಜಲಾಶಯ ಜುಲೈ ಅಥವ ಆಗಸ್ಟ್‌ನಲ್ಲಿ ಭರ್ತಿಯಾಗುತ್ತಿತ್ತು. ಸೆಪ್ಟೆಂಬರ್‌ನಲ್ಲಿಯೂ ತುಂಬಿದ ದಾಖಲೆ ಇದೆ. 2009ರಲ್ಲಿ ಅಕ್ಟೋಬರ್ 28ರಂದು ಜಲಾಶಯ ಭರ್ತಿಯಾಗಿತ್ತು. ಬಳಿಕ ಇದೇ ಮೊದಲ ಬಾರಿಗೆ ಅಕ್ಟೋಬರ್ ಅಂತ್ಯದಲ್ಲಿ ಜಲಾಶಯ ಭರ್ತಿಯಾಗಿದೆ. ಇದರಿಂದಾಗಿ ಮಂಡ್ಯದ ಜನರಲ್ಲಿ ಸಂತಸ ಮೂಡಿದೆ.

ವಿವಿಧ ರಾಜ್ಯಗಳಲ್ಲಿ ಮಳೆ; ಕೇರಳ ಮತ್ತು ತಮಿಳುನಾಡು ರಾಜ್ಯದ ವಿವಿಧ ಪ್ರದೇಶಗಳಲ್ಲಿ ಸಹ ಮಳೆಯಾಗುತ್ತಿದೆ. ಕೇರಳದ 5 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ತಿರುವನಂತಪುರಂ, ಕೊಟ್ಟಾಯಂ, ಇಡುಕ್ಕಿ, ಕೊಲ್ಲಂ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ತ್ರಿಶೂರ್, ಪಾಲಕ್ಕಾಡ್, ಮಲ್ಲಪುರಂ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+