ಜೂ. 20, 21ರಂದು 7 ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್
ಬೆಂಗಳೂರು, ಜೂನ್ 20; ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದೆ. ಭಾನುವಾರ ಮತ್ತು ಸೋಮವಾರ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈಋತ್ಯ ಮುಂಗಾರು ವಿವಿಧ ಜಿಲ್ಲೆಗಳಲ್ಲಿ ಚುರುಕುಗೊಂಡಿದ್ದು, ಉತ್ತಮ ಮಳೆಯಾಗುತ್ತಿದೆ. ಇದರಿಂದಾಗಿ ರಾಜ್ಯದ ವಿವಿಧ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದೆ. ಕೆಲವು ನದಿಗಳು ಅಪಾಯಮಟ್ಟದಲ್ಲಿ ಹರಿಯುತ್ತಿವೆ.
ಜೂನ್ 20ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿ ಭಾಗದ ಜಿಲ್ಲೆಗಳಲ್ಲಿ ಸೋಮವಾರದ ತನಕವೂ ಮಳೆ ಮುಂದುವರೆಯಲಿದೆ. ಬೆಳಗಾವಿ, ಧಾರವಾಡ ಮತ್ತು ಹಾವೇರಿಯಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯಲ್ಲಿ ಗಂಟೆಗೆ 50 ಕಿ. ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. 3.9 ಮೀಟರ್‌ನಷ್ಟು ಎತ್ತರದ ಅಲೆಗಳು ಏಳುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಮಹಾರಾಷ್ಟ್ರ ಮತ್ತು ಚಿಕ್ಕೋಡಿ ಭಾಗದಲ್ಲಿ ಮಳೆ ಹೆಚ್ಚಿದ್ದು, ಶನಿವಾರ ಕೃಷ್ಣಾ ನದಿಗೆ 1.15 ಲಕ್ಷ ಕ್ಯುಸೆಕ್ ನೀರು ಹರಿದುಬಂದಿದೆ. ಘಟಪ್ರಭಾ ಜಲಾಶಯದಲ್ಲಿ ನೀರಿನ ಮಟ್ಟ 10 ಅಡಿ ಏರಿಕೆಯಾಗಿದೆ.
ದೂದ್‌ಗಂಗಾ ನದಿಯಿಂದ 27,280 ಕ್ಯುಸೆಕ್, ರಾಜಾಪುರ ಬ್ಯಾರೇಜ್‌ನಿಂದ 88,500 ಕ್ಯುಸೆಕ್ ನೀರು ಕೃಷ್ಣಾ ನದಿಗೆ ಸೇರಿದೆ. ಸವದತ್ತಿ ತಾಲೂಕಿನ ಯಕ್ಕುಂಡಿಯಲ್ಲಿ ಮೀನುಗಾರಿಕೆಗೆ ಹೋಗಿದ್ದಾಗ ತೆಪ್ಪ ಮಗುಚಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ 15, ಭಾಗಮಂಡಲ 11, ಬೆಳ್ತಂಗಡಿ 6, ಕಾರವಾರ ಮತ್ತು ಮಂಗಳೂರಿನಲ್ಲಿ 5, ಸುಳ್ಯ, ಉಡುಪಿ, ಸಾಗರ, ತೀರ್ಥಹಳ್ಳಿಯಲ್ಲಿ 4 ಸೆಂ. ಮೀ. ಮಳೆಯಾಗಿದೆ.












Click it and Unblock the Notifications