Karnataka Rain: ಮೇ 17ರವರೆಗೆ ಮಳೆ ಅಬ್ಬರ; ಈ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ
ಭಾರಿ ಬಿಸಿಲು, ಶಾಖದ ಅಲೆಯಿಂದ ಕಂಗಾಲಾಗಿದ್ದ ಕರುನಾಡಿಗೆ ಮಳೆಯ ಆಶೀರ್ವಾದ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ಮೇ 17 ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.
ಗುರುವಾರ ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಬಳ್ಳಾರಿ, ತುಮಕೂರು, ಚಿತ್ರದುರ್ಗ, ಬೆಂಗಳೂರು, ಕೋಲಾರ, ಚಾಮರಾಜನಗರ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬೆಳಗಾವಿ, ವಿಜಯಪುರ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ವರದಿಯಾಗಿದೆ.

ಬೀದರ್ ನಿಂದ ಚಾಮರಾಜನಗರದವರೆಗೆ ಭಾರಿ ಮಳೆಯಾಗುವ ಲಕ್ಷಣವಿದ್ದು, ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.
ಮೇ 10 ರಂದು ಬೀದರ್, ಬೆಳಗಾವಿ, ವಿಜಯನಗರ, ಧಾರವಾಡ, ಶಿವಮೊಗ್ಗ, ರಾಯಚೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು, ಮೈಸೂರು, ತುಮಕೂರು, ಕೋಲಾರ, ದಾವಣಗೆರೆ ಜಿಲ್ಲೆಗಳಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮೇ 13 ರಿಂದ ಮೇ 15ರವರೆಗೆ ಉತ್ತರ ಒಳನಾಡಿನ ಜಿಲ್ಲೆಗಳು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬೀದರ್, ಬೆಳಗಾವಿ, ಕಲಬುರ್ಗಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ದಾವಣಗೆರೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ ನೀಡಲಾಗಿದೆ.
ಮೇ 17ರಂದು ಹಳದಿ ಎಚ್ಚರಿಕೆ
ಮೇ 17ರಂದು ಮಳೆ ಮತ್ತಷ್ಟು ತೀವ್ರತೆ ಪಡೆಯಲಿದ್ದು ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಕೋಲಾರ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.












Click it and Unblock the Notifications