Weather report; ಕರ್ನಾಟಕದಲ್ಲಿ ಮುಂಗಾರು ಚುರುಕು, ಎರಡು ದಿನ ಅಲರ್ಟ್
ಬೆಂಗಳೂರು, ಸೆಪ್ಟೆಂಬರ್ 03; ಮಳೆಗಾಲದಲ್ಲಿ ಬೇಸಿಗೆಯಷ್ಟು ಸೆಕೆ ಕರ್ನಾಟಕವನ್ನು ಕಾಡುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಗಾಗ ಮಳೆಯಾಗುತ್ತಿದೆ. ಜನರಿಗೆ ನೆಮ್ಮದಿ ನೀಡುವ ಸುದ್ದಿಯೊಂದಿದೆ. ನೈಋತ್ಯ ಮುಂಗಾರು ರಾಜ್ಯದಲ್ಲಿ ಚುರುಕಾಗಿದ್ದು, ಎರಡು ದಿನಗಳ ಕಾಲ ಹಲವಾರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಸೆಪ್ಟೆಂಬರ್ 3 ಮತ್ತು 4 ರಂದು ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಮಳೆ ಕೊರತೆಯಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ.

ಬೆಂಗಳೂರು ನಗರದಲ್ಲಿ ಶನಿವಾರ ಸಂಜೆ ಮೋಡ ಕವಿದ ವಾತಾವರಣವಿತ್ತು. ಕೆಲವು ಪ್ರದೇಶಗಳಲ್ಲಿ ರಾತ್ರಿ ತನಕ ತುಂತುರು ಮಳೆಯಾಗಿದೆ. ಆದರೆ ಗುರುವಾರ ರಾತ್ರಿ ನಗರದಲ್ಲಿ ಗುಡುಗು, ಮಿಂಚು ಸೇರಿದಂತೆ ಧಾರಕಾರ ಮಳೆಯಾಗಿತ್ತು.
ಎರಡು ದಿನ ಮಳೆ ಮುನ್ಸೂಚನೆ; ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಸೆಪ್ಟೆಂಬರ್ 3ರ ಭಾನುವಾರ ಉತ್ತರ ಒಳನಾಡಿನ ಕಲಬುರಗಿ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಚಾಮರಾಜನಗರ, ಕೋಲಾರ, ರಾಮನಗರ ಜಿಲ್ಲೆಯಲ್ಲಿಯೂ ಉತ್ತಮ ಮಳೆ ನಿರೀಕ್ಷೆ ಇದೆ.
ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಮಳವಳ್ಳಿಯಲ್ಲಿ 9, ಕೂಡಲಸಂಗಮ ಮತ್ತು ಮದ್ದೂರಿನಲ್ಲಿ 6, ಯಾದಗಿರಿಯ ಶಹಾಪುರದಲ್ಲಿ 12 ಸೆಂ. ಮೀ. ಮಳೆ ದಾಖಲಾಗಿದೆ.
ಬೆಂಗಳೂರು ನಗರದಲ್ಲಿ ಭಾನುವಾರ ಮತ್ತು ಸೋಮವಾರ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಸಂಜೆ ಅಥವ ರಾತ್ರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಭಾನುವಾರ ಬೆಳಗ್ಗೆಯೇ ನಗರದಲ್ಲಿ ಮೋಡ ಕವಿದ ವಾತಾವರಣ ಕಂಡು ಬಂದಿದ್ದು, ಬಿಸಿಲು ಭೂಮಿಗೆ ಸರಿಯಾಗಿ ತಾಕಿಲ್ಲ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಆಗಸ್ಟ್ 20ರ ಬಳಿಕ ಮಳೆ ಕಣ್ಮರೆಯಾಗಿತ್ತು. ಈಗ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ನದಿಗಳ ನೀರಿನ ಮಟ್ಟ ಇಳಿಕೆಯಾಗಿತ್ತು. ಈ ಬಾರಿ ಸೆಪ್ಟೆಂಬರ್‌ನಲ್ಲಿಯೂ ಮಳೆ ಬಾರದಿದ್ದರೆ ಮಲೆನಾಡು ಭಾಗದಲ್ಲಿಯೂ ಕುಡಿಯುವ ನೀರಿನ ಕೊರತೆ ಎದುರಾಗುವ ಭೀತಿ ಇದೆ.
ಸೆಪ್ಟೆಂಬರ್ ಮೊದಲ ವಾರದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆ ಮಳೆ ಆರಂಭವಾಗಿದ್ದು, ರೈತರು ಸಹ ಬೆಳೆ ಉಳಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದಾರೆ. ಬೆಂಗಳೂರು ನಗರದಲ್ಲಿ ಭಾನುವಾರ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆ ಇದೆ.
ಕರ್ನಾಟಕದಲ್ಲಿ ಮಳೆ ಕೊರತೆಯಾಗಿ ಕೆಆರ್‌ಎಸ್ ಜಲಾಶಯ ಭರ್ತಿಯಾಗಿಲ್ಲ. ಆದರೆ ರಾಜ್ಯ ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸುತ್ತಲೇ ಇದೆ. ಇದರ ಪರಿಣಾಮವಾಗಿ 5 ದಿನಗಳಲ್ಲಿ ಡ್ಯಾಂನಲ್ಲಿ 2 ಟಿಎಂಸಿ ಅಡಿ ನೀರು ಖಾಲಿಯಾಗಿದೆ. ಸದ್ಯ ಜಲಾಶಯದಲ್ಲಿ ಉಳಿದಿರುವುದು 22 ಟಿಎಂಸಿ ಅಡಿ ನೀರು ಮಾತ್ರ.
ಕೊಡಗು ಭಾಗದಲ್ಲಿಯೂ ಮಳೆಯ ಕೊರತೆ ಉಂಟಾಗಿದ್ದು, ಕಾವೇರಿ ನದಿ ನೀರಿನ ಮಟ್ಟದಲ್ಲಿಯೂ ಇಳಿಕೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ತಮಿಳುನಾಡು ಸಲ್ಲಿಕೆ ಮಾಡಿರುವ ಅರ್ಜಿಯ ವಿಚಾರಣೆ ಇನ್ನೂ ಸುಪ್ರೀಂಕೋರ್ಟ್‌ನಲ್ಲಿ ಬಾಕಿ ಇದೆ. ಇನ್ನೂ 10 ದಿನ ಕರ್ನಾಟಕ ನೀರು ಹರಿಸಿದರೆ 6 ಟಿಎಂಸಿ ನೀರು ಖಾಲಿಯಾಗಲಿದೆ ಎಂದು ಅಂದಾಜಿಸಲಾಗಿದೆ.












Click it and Unblock the Notifications