ಬೊಮ್ಮಾಯಿ ಬಜೆಟ್; ರೈತರ ಮೇಲೆ ಹೆಚ್ಚಿನ ಗಮನ?
ಬೆಂಗಳೂರು, ಮಾರ್ಚ್ 02; ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4ರಂದು ಚೊಚ್ಚಲ ಬಜೆಟ್ ಮಂಡನೆ ಮಾಡಲಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಜೆಟ್‌ನಲ್ಲಿ ಹೊಸ ಯೋಜನೆಗಳ ಘೋಷಣೆಯಾಗುವ ನಿರೀಕ್ಷೆ ಇದೆ.
ರೈತರ ಕಲ್ಯಾಣ ಮತ್ತು ಈಗ ನಡೆಯುತ್ತಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಮುಖ್ಯಮಂತ್ರಿಗಳು ಆದ್ಯತೆ ನೀಡುವ ನಿರೀಕ್ಷೆ ಇದೆ. ಈಗಾಗಲೇ ಮುಖ್ಯಮಂತ್ರಿಗಳು ಕೃಷಿ, ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಅವರ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ.
ಕೃಷಿ ಮತ್ತು ಅದಕ್ಕೆ ಹೊಂದಿಕೊಂಡಿರುವ ವಲಯಗಳಿಗೆ ಕಳೆದ ಮೂರು ವರ್ಷಗಳಿಂದ ಬಜೆಟ್‌ನಲ್ಲಿ ನಿರೀಕ್ಷಿತ ಅನುದಾನ ಹಂಚಿಕೆಯಾಗಿಲ್ಲ. 2021-22ನೇ ಸಾಲಿನ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 30,028 ಕೋಟಿ ಅನುದಾನ ನೀಡಲಾಗಿತ್ತು.

ಹಿಂದಿನ ವರ್ಷದ ಬಜೆಟ್‌ಗೆ ಹೋಲಿಕೆ ಮಾಡಿದರೆ ಈ ಅನುದಾನ ಸುಮಾರು 2 ಸಾವಿರ ಕೋಟಿ ಕಡಿಮೆ. ಆದರೆ ಈ ವರ್ಷ ಕೃಷಿಗೆ ಹೆಚ್ಚಿನ ಆದ್ಯತೆ ನೀಡಲು ಮುಖ್ಯಮಂತ್ರಿಗಳು ತೀರ್ಮಾನಿಸಿದ್ದಾರೆ. ಅಲ್ಲದೇ ಈಗಾಗಲೇ ನಡೆಯುತ್ತಿರುವ ನೀರಾವರಿ ಯೋಜನೆ ಪೂರ್ಣಗೊಳಿಸುವುದು ಸಹ ಪ್ರಮುಖ ಗುರಿಯಾಗಿದೆ.
ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷದ ಸರ್ಕಾರವಿದೆ. ಆದರೆ ಕೃಷಿ, ನೀರಾವರಿ ವಲಯವನ್ನು ಕಡೆಗಣಿಸಲಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿವೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳು ಕೃಷಿ ವಲಯಕ್ಕೆ ಆದ್ಯತೆ ನೀಡಬೇಕಾದ ಒತ್ತಡದಲ್ಲಿದ್ದಾರೆ.
ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್ ಈಗಾಗಲೇ ಪಾದಯಾತ್ರೆ ನಡೆಸುತ್ತಿದೆ. ಇದೇ ಮಾದರಿಯಲ್ಲಿ ಬೆಳಗಾವಿ ಮತ್ತು ವಿಜಯಪುರದಲ್ಲಿಯೂ ನೀರಾವರಿ ಯೋಜನೆಗಳನ್ನು ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸಲು ಪ್ರತಿಪಕ್ಷ ಕಾಂಗ್ರೆಸ್ ಸಿದ್ಧತೆ ನಡೆಸಿದೆ.
ಭದ್ರಾ ಮೇಲ್ದಂಡೆ, ಕೃಷ್ಣಾ ಮೇಲ್ದಂಡೆ ಯೋಜನೆ 3 ಮತ್ತು ಕಳಸಾ-ಬಂಡೂರಿ ನಾಲಾ ಯೋಜನೆಗಳಿಗೆ ಅನುದಾನ ಒದಗಿಸುವ ಮಹತ್ವದ ಹೊಣೆ ಸರ್ಕಾರದ ಮುಂದಿದೆ. ಈ ಮೂರು ಪ್ರಮುಖ ನೀರಾವರಿ ಯೋಜನೆಗಳ ಗಾತ್ರ 1 ಲಕ್ಷ ಕೋಟಿಗೂ ಅಧಿಕವಾಗಿದೆ.
ಕೃಷ್ಣಾ ಮೇಲ್ದಂಡೆ ಯೋಜನೆ 3 ಪೂರ್ಣಗೊಳಿಸಲು ಯೋಜನೆಗಾಗಿ ಭೂಮಿ ಕಳೆದುಕೊಳ್ಳುವ 20 ಗ್ರಾಮಗಳ ಜನರಿಗೆ ಪರಿಹಾರವನ್ನು ನೀಡಬೇಕಿದೆ. ಪರಿಹಾರ ನೀಡಿದರೆ ಯೋಜನೆ ಬೇಗ ಕಾರ್ಯಗತಗೊಳಿಸಲು ಸಹಕಾರಿಯಾಗುತ್ತದೆ.
ಯೋಜನೆಗೆ ತೊಡಗಿಸುವ ಅನುದಾನವನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ ಕೃಷ್ಣಾ ಮೇಲ್ದಂಡೆ ಯೋಜನೆ 3, ಭದ್ರಾ ಮೇಲ್ದಂಡೆ ಯೋಜನೆಗಳಿಗೆ ರಾಷ್ಟ್ರೀಯ ಮಾನ್ಯತೆ ಪಡೆಯಲು ಪ್ರಯತ್ನ ನಡೆಸುತ್ತಿದೆ. ಆದರೆ ಇನ್ನೂ ಆ ಪ್ರಕ್ರಿಯೆಗಳು ಪೂರ್ಣಗೊಂಡಿಲ್ಲ.
ಒಂದು ವೇಳೆ ಯೋಜನೆಗಳಿಗೆ ರಾಷ್ಟ್ರೀಯ ಮಾನ್ಯತೆ ಸಿಕ್ಕಿದರೆ ಶೇ 60ರಷ್ಟು ಅನುದಾನವನ್ನು ಕೇಂದ್ರ ಸರ್ಕಾರ ನೀಡಲಿದೆ. ಕೇಂದ್ರ ಜಲಶಕ್ತಿ ಆಯೋಗ ರಾಜ್ಯ ಕಳಿಸಿದ್ದ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ. 21,474 ಕೋಟಿ ರೂ.ಗಳ ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಯೋಜನೆ ಸ್ಥಾನಮಾನ ಸಿಗಲು ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಬಾಕಿ ಇದೆ.
ಕೃಷಿ ಕಾಯ್ದೆಗಳ ವಿರುದ್ಧ ಕರ್ನಾಟಕದಲ್ಲಿಯೂ ಬೃಹತ್ ಹೋರಾಟ ನಡೆದಿತ್ತು. ಸಕ್ಕರೆ ಕಾರ್ಖನೆಗಳ ಬಾಕಿ ಪಾವತಿ, ಬೆಂಬಲ ಬೆಲೆ ಯೋಜನೆ ಘೋಷಣೆ ಸೇರಿದಂತೆ ಹಲವು ರೈತಪರ ಸವಾಲುಗಳಿವೆ. ಮುಂದಿನ ಚುನಾವಣೆಯಲ್ಲಿ ರೈತರ ಬೆಂಬಲವನ್ನು ಪಡೆಯಲು ಕೃಷಿ ವಯಲಕ್ಕೆ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಆದ್ಯತೆ ನೀಡುವ ನಿರೀಕ್ಷೆ ಇದೆ.
ಮಾರ್ಚ್ 4ರ ಶುಕ್ರವಾರ ವಿಧಾನಸಭೆಯ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಧ್ಯಾಹ್ನ 12.30ಕ್ಕೆ 2022-23ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಮಾರ್ಚ್ 30ರ ತನಕ ಬಜೆಟ್ ಅಧಿವೇಶನ ನಡೆಯುತ್ತಿದೆ.












Click it and Unblock the Notifications