ಲಸಿಕಾ ಅಭಿಯಾನ; ಕರ್ನಾಟಕದಲ್ಲಿ 31.75 ಲಕ್ಷ ಮಕ್ಕಳಿಗೆ ಲಸಿಕೆ

ಬೆಂಗಳೂರು, ಜನವರಿ 03; ದೇಶದಲ್ಲಿ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ಕೆ ಸೋಮವಾರ ಚಾಲನೆ ಸಿಗಲಿದೆ. ಕರ್ನಾಟಕದಲ್ಲಿ 31.75 ಲಕ್ಷ ಮಕ್ಕಳು ಲಸಿಕಾಕರಣಕ್ಕೆ ಒಳಪಡಲಿದ್ದಾರೆ.

ಸೋಮವಾರ ಬೆಳಗ್ಗೆ 9.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೂಡಲಪಾಳ್ಯದ ಭೈರವೇಶ್ವರ ನಗರದ ಬಿಬಿಎಂಪಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಸ್ನಾತಕೋತ್ತರ ಕಾಲೇಜಿನಲ್ಲಿ ಲಸಿಕಾ ಅಭಿಯಾನಕ್ಕೆ ಚಾಲನೆ ಕೊಡಲಿದ್ದಾರೆ.

ಆರೋಗ್ಯ ಇಲಾಖೆ ಲಸಿಕಾ ಅಭಿಯಾನದ ಬಗ್ಗೆ ಮಾಹಿತಿ ನೀಡಿದೆ. ರಾಜ್ಯದಲ್ಲಿ 31.75 ಲಕ್ಷ ಮಕ್ಕಳು ಲಸಿಕೆ ಪಡೆಯಲಿದ್ದಾರೆ. ಮೊದಲ ದಿನವೇ ನಾಲ್ಕು ಸಾವಿರಕ್ಕಿಂತ ಹೆಚ್ಚು ಕೇಂದ್ರಗಳಲ್ಲಿ 6 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಹೇಳಿದೆ.

In Karnataka 31.75 Lakh To Get Covaxin shots

ರಾಜ್ಯದಲ್ಲಿ 16 ಲಕ್ಷ ಡೋಸ್‌ ಕೋವ್ಯಾಕ್ಸಿನ್ ಲಸಿಕೆ ಸಂಗ್ರಹವಿದೆ. ಶಾಲೆ ಮತ್ತು ಕಾಲೇಜುಗಳ ಕ್ಯಾಂಪಸ್‌ನಲ್ಲಿಯೇ ಲಸಿಕೆ ನೀಡಲು ಸಿದ್ಧತೆ ನಡೆದಿದೆ. ಸಮೀಪದ ಆರೋಗ್ಯ ಕೇಂದ್ರಕ್ಕೆ ಸಹ ತೆರಳಿ ಲಸಿಕೆ ಪಡೆಯಲು ಅವಕಾಶ ನೀಡಲಾಗಿದೆ.

ಯಾರು ಲಸಿಕೆ ಪಡೆಯಬಹುದು?; 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಸದ್ಯ ಕೋವ್ಯಾಕ್ಸಿನ್ ಲಸಿಕೆ ಮಾತ್ರ ನೀಡಲಾಗುತ್ತದೆ. 2007 ಅಥವ ಅದಕ್ಕೂ ಮೊದಲು ಜನಿಸಿದ ಎಲ್ಲಾ ಮಕ್ಕಳು ಕೋವಿಡ್-19 ಲಸಿಕೆಯನ್ನು ಪಡೆಯಲು ಅರ್ಹರಾಗಿದ್ದು, ಈ ವಯಸ್ಸಿನ ಪ್ರೌಢ ಶಾಲೆ ಹಾಗೂ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅಥವಾ ವಿಧ್ಯಾಭ್ಯಾಸದಿಂದ ಹೊರಗುಳಿದಿರುವ ಮಕ್ಕಳು ಲಸಿಕೆ ಪಡೆಯಬೇಕು.

ಮಕ್ಕಳ ಪರವಾಗಿ ಪೋಷಕರು, ಶಾಲೆಯ ಶಿಕ್ಷಕರು ಅಥವ ಮುಖ್ಯ ಶಿಕ್ಷಕರ ಮೊಬೈಲ್ ನಂಬರ್ ಮೂಲಕ ಲಸಿಕೆ ಪಡೆಯಲು ನೋಂದಣಿ ಮಾಡಿಸಬೇಕು. ಆನ್‌ಲೈನ್ ತರಗತಿಗಳನ್ನು ನಡೆಸುತ್ತಿರುವ ಶಾಲೆಗಳು ನಿರ್ದಿಷ್ಟ ದಿನವನ್ನು ನಿಗದಿ ಮಾಡಿ ಲಸಿಕೆ ನೀಡಲು ವ್ಯವಸ್ಥೆ ಮಾಡಬೇಕು.

ಶಾಲಾ-ಕಾಲೇಜಿನಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಲಸಿಕೆ ನೀಡುವುದು ಸವಾಲಿನ ಕೆಲಸವಾಗಿದೆ. ಕಾರ್ಮಿಕ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಮಕ್ಕಳನ್ನು ಗುರುತಿಸಿ ಲಸಿಕೆ ನೀಡಲು ಸರ್ಕಾರ ಯೋಜನೆ ರೂಪಿಸಿದೆ.

ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್ ಲಸಿಕಾ ಅಭಿಯಾನದ ಬಗ್ಗೆ ಮಾತನಾಡಿದ್ದಾರೆ, "ಮೊದಲ ಡೋಸ್ ಪಡೆದ 28 ದಿನಗಳ ನಂತರ 2ನೇ ಡೋಸ್ ನೀಡಲಾಗುತ್ತದೆ. ಲಸಿಕೆ ಬಗ್ಗೆ ಯಾರಿಗೂ ಭಯ, ಆತಂಕ ಅನಗತ್ಯ. ಸಾಕಷ್ಟು ಅಧ್ಯಯನ ನಡೆಸಿ, ಸುರಕ್ಷಿತ ಎನ್ನುವುದುದ ಸಾಬೀತಾದ ಬಳಿಕವೇ ಲಸಿಕೆ ನೀಡಲಾಗುತ್ತಿದೆ" ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್ 25ರಂದು ದೇಶವನ್ನು ಉದ್ದೇಶಿಸಿ ಮಾತನಾಡಿದ್ದರು. ಜನವರಿ 3ರ ಸೋಮವಾರ ಲಸಿಕಾ ಅಭಿಯಾನ ಆರಂಭವಾಗಲಿದೆ ಎಂದು ಹೇಳಿದ್ದರು. ಇದರಿಂದಾಗಿ ಶಾಲೆಗಳಿಗೆ ಮತ್ತು ಕಾಲೇಜುಗಳಿಗೆ ಹೋಗುವ ಮಕ್ಕಳ ಆತಂಕವನ್ನು ಮತ್ತು ಅವರ ಪೋಷಕರ ಆತಂಕ ಕಡಿಮೆ ಆಗಲಿದೆ ಎಂದು ತಿಳಿಸಿದ್ದರು.

ದೇಶದಲ್ಲಿ ಈ ಲಸಿಕಾ ಅಭಿಯಾನದಡಿ ಸುಮಾರು 3 ಕೋಟಿ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ. ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಲು ವಿವಿಧ ರಾಜ್ಯಗಳಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಕರ್ನಾಟಕದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಯ ವ್ಯಾಪ್ತಿಯಲ್ಲಿ, ಶಾಸಕರು ತಮ್ಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗಾಗಲೇ ಪತ್ರವನ್ನು ಬರೆದಿದ್ದಾರೆ.

ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಇಂತಹ ಸಮಯದಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯ ಆರಂಭವಾಗುತ್ತಿದೆ. ಭಾನುವಾರ ರಾಜ್ಯದಲ್ಲಿ 1,187 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಕೋವಿಡ್ ಪರಿಸ್ಥಿತಿ ಬಗ್ಗೆ ಜನವರಿ 7ರಂದು ತಜ್ಞರ ಜೊತೆ ಸಭೆಯನ್ನು ನಡೆಸಲಿದ್ದಾರೆ. ಸಭೆಯ ಬಳಿಕ ರಾಜ್ಯದಲ್ಲಿ ಮತ್ತಷ್ಟು ಕಠಿಣ ನಿಯಮಗಳು ಜಾರಿಗೆ ಬರಲಿವೆಯೇ? ಎಂದು ಕಾದು ನೋಡಬೇಕಿದೆ.

ಡಿಸೆಂಬರ್ 28ರಿಂದಲೇ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಯಲ್ಲಿದೆ. ಜನವರಿ 7ರ ತನಕ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯ ತನಕ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಮಹಾರಾಷ್ಟ್ರ, ಕೇರಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಗಡಿಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಡಳಿತಗಳಿಗೆ ಸೂಚನೆ ಕೊಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+