C.T Ravi: ಸಿ.ಟಿ ರವಿ ಅವಾಚ್ಯ ಪದ ಬಳಕೆ ಪ್ರಕರಣ ಸಿಐಡಿ ತನಿಖೆಗೆ : ಗೃಹ ಸಚಿವ ಜಿ.ಪರಮೇಶ್ವರ್
ಹುಬ್ಬಳ್ಳಿ, ಡಿಸೆಂಬರ್ 24: ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬೆಳಗಾವಿಯ ಸುವರ್ಣ ಸೌಧದಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವಂತೆ ಬಿಜೆಪಿ ಒತ್ತಾಯಿಸಿದ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಲು ಸಜ್ಜಾಗಿದೆ. ಈ ಬಗ್ಗೆ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್ ಮಾಹಿತಿ ನೀಡಿದ್ದಾರೆ.
ಮಾಜಿ ಸಚಿವ, ಎಂಎಲ್ಸಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಪ್ರಕರಣ ದೇಶದಾದ್ಯಂತ ಸದ್ದು ಮಾಡಿದೆ. ಸದ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ಹುಬ್ಬಳ್ಳಿ ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್, ಸಿ.ಟಿ ರವಿ ಅವರು ಅಶ್ಲೀಲ ಪದ ಬಳಸಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ, ಇನ್ನೂ ಕೆಲವರು ಸಿ.ಟಿ ರವಿ ಅವರು ಅಶ್ಲೀಲ ಪದ ಬಳಸಿಲ್ಲ ಅಂತ ಹೇಳಿದ್ದಾರೆ. ಹೀಗಾಗಿ, ಸತ್ಯಾಸತ್ಯತೆ ತಿಳಿಯಲು ಸಿಐಡಿ ತನಿಖೆಗೆ ಆದೇಶ ಮಾಡಿದ್ದೇನೆ. ಸಭಾಪತಿ ತಮ್ಮ ಕೆಲಸ ಮಾಡಿದ್ದಾರೆ. ಪೊಲೀಸರು ತನಿಖೆ ಮಾಡಬೇಕು ಎಂದರು.
ಹಳೇ ಹುಬ್ಬಳ್ಳಿ ಠಾಣೆ ಇನ್ಸ್ಪೆಕ್ಟರ್ ವಿರುದ್ಧ ಮಹಿಳಾ ಸಿಬ್ಬಂದಿ ಪತ್ರ ಬರೆದ ವಿಚಾರವಾಗಿ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳ ಬಳಿ ವರದಿ ತರಸಿಕೊಳ್ಳುತ್ತೇನೆ. ತಪ್ಪು ಮಾಡಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಇನ್ನು ಅಸಮರ್ಥ ಗೃಹ ಸಚಿವ ಎನ್ನುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೇಳಿಕೆಗೆ ತಿರುಗೇಟು ನೀಡಿದ ಡಾ.ಜಿ.ಪರಮೇಶ್ವರ್, ಪ್ರಹ್ಲಾದ್ ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ. ನಾನು ಜೋಶಿ ಅವರನ್ನು ಅಸಮರ್ಥ ಕೇಂದ್ರ ಸಚಿವ ಎಂದು ಹೇಳಬಹುದು. ಆದರೆ, ಅದು ಎಷ್ಟು ಸಮಂಜಸ ಹೇಳಿ? ಎಂದರು.
ಮಾತು ಮುಂದುವರಿಸಿದ ಅವರು, ಬೆಳಗಾವಿಯಲ್ಲಿ ಎಐಸಿಸಿ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಮಾಡುತ್ತಿದ್ದೇವೆ. ಗಾಂಧೀಜಿ ಮೊದಲ ಬಾರಿಗೆ ಎಐಸಿಸಿ ಅಧ್ಯಕ್ಷರಾಗಿ ನೂರು ವರ್ಷ ಕಳೆದಿದೆ. ಕಾರ್ಯಕ್ರಮದಲ್ಲಿ ಇಡೀ ಕಾಂಗ್ರೆಸ್ ಸಮುದಾಯ ಭಾಗಿಯಾಗುತ್ತದೆ. ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಭಾಗಿಯಾಗಲಿದ್ದಾರೆ. ಇದೊಂದು ಐತಿಹಾಸಿಕ ಕಾರ್ಯಕ್ರಮ ಎಂದು ಹೇಳಿದರು.












Click it and Unblock the Notifications