ಯುವ ಬರಹಗಾರರ ಚೊಚ್ಚಲ ಕೃತಿಗೆ ಪ್ರೋತ್ಸಾಹ ಧನ
ಬೆಂಗಳೂರು, ಜೂ. 10 : ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2014ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಿ ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿದಾರರು ಕನಿಷ್ಟ 18ರಿಂದ 35 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮ ದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು.

ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ. ಮಾಡಿಸಿದಾಗ 1/8 ಡಮ್ಮಿ ಅಳತೆಯಲ್ಲಿ ಕನಿಷ್ಟ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ದಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು.
ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ ಕೋಮು, ವೃತ್ತಿ, ಸಮುದಾಯ, ಭಾಷೆ ಆಚರಣೆ, ಪದ್ದತಿ, ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು. ಅಲ್ಲದೆ ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವಂತಹ ವಿಷಯ/ಸಂಗತಿಗಳು ಪ್ರಸ್ತಾಪವಾಗಿರಬಾರದು.
ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಆದಕಾರಣ ಹಸ್ತ ಪ್ರತಿಯ/ಡಿಟಿಪಿ ಪ್ರತಿಯ ಎರಡನೇ ಪ್ರತಿಯನ್ನು ಸಲ್ಲಿಸಲು ತಿಳಿಸಿದೆ.
ಅರ್ಜಿಗಳನ್ನು ದಿನಾಂಕ 09-07-2015ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು 560 002 ಅವರಿಗೆ ಕಳುಹಿಸಿಕೊಡಬೇಕು.












Click it and Unblock the Notifications