ರೋಹಿಣಿ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಡಿ.ರೂಪಾ!
ಬೆಂಗಳೂರು, ಜೂನ್ 06: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಸಮರಕ್ಕೆ ಹೊಸ ತಿರುವು ಸಿಕ್ಕಿದೆ. ರೋಹಿಣಿ ಸಿಂಧೂರಿ ತಮ್ಮ ವಿರುದ್ಧ ಹೂಡಿರುವ ಕ್ರಿಮಿನಲ್ ಮಾನನಷ್ಟ ಖಾಸಗಿ ದೂರನ್ನು ರದ್ದುಪಡಿಸುವಂತೆ ಕೋರಿ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಡಿ. ರೂಪಾ ಸಲ್ಲಿಸಿರುವ ಕ್ರಿಮಿನಲ್ ಅರ್ಜಿ ವಿಚಾರಣೆಯು ಸೋಮವಾರ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಆದರೆ ರೂಪಾ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯಿಂದ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಹಿಂದೆ ಸರಿದಿದ್ದಾರೆ.

ವಿಚಾರಣೆ ವೇಳೆ ಪ್ರಕರಣದ ಬಗ್ಗೆ ಮಾಹಿತಿ ಪಡೆದ ನ್ಯಾಯಮೂರ್ತಿಗಳು, ಈ ಹಿಂದೆ ತಾವು ವಕೀಲರಾಗಿದ್ದ ಸಂದರ್ಭದಲ್ಲಿ ಬೇರೊಂದು ಪ್ರಕರಣ ಸಂಬಂಧ ರೋಹಿಣಿ ಸಿಂಧೂರಿ ಅವರನ್ನು ಪ್ರತಿನಿಧಿಸಿದ್ದೆವು. ಹಾಗಾಗಿ, ತಾವು ಈ ಅರ್ಜಿ ವಿಚಾರಣೆ ನಡೆಸುವುದಿಲ್ಲ ಎಂದರು.
ಅಲ್ಲದೆ, ಡಿ. ರೂಪಾ ಅರ್ಜಿಯನ್ನು ಬೇರೊಂದು ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಪಡಿಸಲು ಸೂಕ್ತ ಆದೇಶ ಪ್ರಕಟಿಸುವುದಕ್ಕಾಗಿ ಪ್ರಕರಣದ ಕಡತವನ್ನು ಸಿಜೆ ಮುಂದೆ ಮುಂಡಿಸಬೇಕು ಎಂದು ರಿಜಿಸ್ಟ್ರಾರ್‌ಗೆ ನಿರ್ದೇಶಿಸಿದರು.
ಏನಿದು ಪ್ರಕರಣ?: ಡಿ. ರೂಪಾ ಮೌದ್ಗಿಲ್ ಅವರು 2023ರ ಫೆ.18 ಮತ್ತು 19ರಂದು ತಮ್ಮ ಫೇಸ್ಬುಕ್ ಖಾತೆಯಲ್ಲಿ ನನ್ನ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. ವಿದ್ಯುನ್ಮಾನ ಮಾಧ್ಯಮದಲ್ಲೂ ಹೇಳಿಕೆ ನೀಡಿದ್ದಾರೆ. ಆ ಆರೋಪಗಳು ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿವೆ. ನನ್ನ ತೇಜೋವಧೆ ಮಾಡುವ ದುರುದ್ದೇಶದಿಂದಲೇ ರೂಪ ಈ ಕೃತ್ಯ ಎಸಗಿದ್ದಾರೆ ಎಂದು ಅರ್ಜಿ ಸಲ್ಲಿಕೆಯಾಗಿದೆ.

ಅದು ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿ, ಮಾನಸಿಕ ಯಾತನೆ ಉಂಟು ಮಾಡಿವೆ ಎಂದು ಆರೋಪಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮಾ.3ರಂದು ಅಧೀನ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ಅಲ್ಲದೇ, ಮಾನಹಾನಿ ಮಾಡಿ ಮಾನಸಿಕ ಯಾತೆ ಉಂಟು ಮಾಡಿರುವುದಕ್ಕಾಗಿ ಡಿ. ರೂಪಾ ಅವರಿಂದ 1 ಕೋಟಿ ರೂಪಾಯಿಯನ್ನು ಪರಿಹಾರವಾಗಿ ಕೊಡಿಸಿಕೊಡಬೇಕು. ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದರು.
ಅದನ್ನು ಪರಿಗಣಿಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಡಿ. ರೂಪಾ ಅವರ ವಿರುದ್ಧ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಲು ಆದೇಶಿಸಿತ್ತು. ಈ ಪ್ರಕರಣ ರದ್ದುಪಡಿಸುವಂತೆ ಕೋರಿ ಈಗ ಡಿ. ರೂಪಾ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ವರ್ಗಾವಣೆ ಮಾಡಲಾಗಿತ್ತು; ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಕರ್ನಾಟಕ ಸರ್ಕಾರ 2023ರ ಫೆಬ್ರವರಿಯಲ್ಲಿ ಯಾವುದೇ ಹುದ್ದೆಯನ್ನು ಸೂಚಿಸಿದೇ ವರ್ಗಾವಣೆ ಮಾಡಿತ್ತು. ಡಿ. ರೂಪಾ ಅವರ ಪತಿ ಐಎಎಸ್ ಅಧಿಕಾರಿ ಮೌನೀಶ್ ಮೌದ್ಗಿಲ್ ಅವರನ್ನು ಸಹ ವರ್ಗಾವಣೆ ಮಾಡಲಾಗಿತ್ತು.
ಇಬ್ಬರು ಅಧಿಕಾರಿಗಳ ಜಟಾಪಟಿ ಆಗಿನ ಬಿಜೆಪಿ ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿತ್ತು. ಆಗ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಈ ಕುರಿತು ವಿಚಾರಣೆ ನಡೆಸುವಂತೆ ಸೂಚನೆ ನೀಡಿದ್ದರು.
ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಮುಗಿದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈಗ ಆಡಳಿತ ಯಂತ್ರದಲ್ಲಿ ಹಲವು ಬದಲಾವಣೆಗಳು ಆಗುತ್ತಿವೆ. ಆದರೆ ಈ ಇಬ್ಬರೂ ಅಧಿಕಾರಿಗಳಿಗೆ ಸರ್ಕಾರ ಇನ್ನೂ ಸಹ ಹುದ್ದೆಗಳನ್ನು ನಿಯುಕ್ತಿ ಮಾಡಿಲ್ಲ.












Click it and Unblock the Notifications