ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಕರ್ನಾಟಕವೇ ನಂ.1
ಬೆಂಗಳೂರು, ಜನವರಿ 31: ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ದೊಡ್ಡ ರಾಜ್ಯಗಳಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿ ಗುರುತಿಸಿಕೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಶೇ.100ರಷ್ಟು ಫಲಾನುಭವಿಗಳಿಗೆ ಮೊದಲ ಡೋಸ್ ಮತ್ತು ಶೇ.87ರಷ್ಟು ಜನರಿಗೆ ಎರಡೂ ಡೋಸ್ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನ ಕೆ.ಆರ್.ಪುರ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಶಿಲಾನ್ಯಾಸ ನೆರವೇರಿಸಿದರು. ತದನಂತರ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ರಾಜ್ಯದಲ್ಲಿ ಆಸ್ಪತ್ರೆಗಳ ನಿರ್ಮಾಣ ಮತ್ತು ಇಡೀ ಆರೋಗ್ಯ ಕ್ಷೇತ್ರದಲ್ಲಿ ದಾಖಲೆಯ ಅಭಿವೃದ್ಧಿಯಾಗುತ್ತಿದೆ ಎಂದರು.
ತಾಯಿ ಮತ್ತು ಮಕ್ಕಳ ಆಸ್ಪತ್ರೆಯು ಬಿಜೆಪಿ ಸರ್ಕಾರದ ಅತ್ಯುತ್ತಮ ಕೊಡುಗೆಯಾಗಿದೆ. ಕೋಲಾರ ಮತ್ತು ಬೆಂಗಳೂರು ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಮೊದಲ ತಾಯಿ ಮತ್ತು ಮಗುವಿನ ಆಸ್ಪತ್ರೆ ಇದಾಗಲಿದೆ. 80 ಕಿ.ಮೀ ಅಂತರದಲ್ಲಿ ತಾಯಿ ಮತ್ತು ಮಗುವಿನ ಆಸ್ಪತ್ರೆ ಇಲ್ಲ. ಇದನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿಗಳಿಗೆ ಆಸ್ಪತ್ರೆ ನಿರ್ಮಿಸುವಂತೆ ಮನವಿ ಮಾಡಿಕೊಳ್ಳಲಾಗಿತ್ತು ಎಂದು ತಿಳಿಸಿದರು.

ತಾಯಿ-ಮಗುವಿನ ಆಸ್ಪತ್ರೆ ನಿರ್ಮಾಣಕ್ಕೆ 30 ಕೋಟಿ:
ಸುಮಾರು 30 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಸಚಿವ ಬೈರತಿ ಬಸವರಾಜ 20 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವಂತೆ ಕೋರಿದ್ದರು. ಸಚಿವರ ಮನವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಥಳದಲ್ಲೇ ಒಪ್ಪಿಗೆ ಕೊಟ್ಟಿದ್ದಾರೆ. ಒಟ್ಟು 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಆಸ್ಪತ್ರೆಯಲ್ಲಿ ಒಟ್ಟು 100 ಹಾಸಿಗೆ ಇರಲಿದ್ದು, 50 ಸಾಮಾನ್ಯ ಹಾಸಿಗೆ ಮತ್ತು ಉಳಿದ 50 ಹಾಸಿಗೆಗಳು ಐಸಿಯು, ವೆಂಟಿಲೇಟರ್ ಸೇರಿದಂತೆ ಆಧುನಿಕ ಸೌಲಭ್ಯ ಒಳಗೊಂಡಿರಲಿದೆ ಎಂದು ಸಚಿವ ಡಾ. ಕೆ ಸುಧಾಕರ್ ಹೇಳಿದರು.
ಆರೋಗ್ಯ ಇಲಾಖೆಯಲ್ಲಿ ಅಭಿವೃದ್ಧಿ:
ರಾಜ್ಯದಲ್ಲಿ ಕಳೆದ 75 ವರ್ಷಗಳಿಂದ ಕಾಣದಷ್ಟು ಅಭಿವೃದ್ಧಿಗಳು ಈಗ ಆರೋಗ್ಯ ಇಲಾಖೆಯಲ್ಲಿ ನಡೆಯುತ್ತಿವೆ. ಈ ಹಿಂದೆ ಆಕ್ಸಿಜನ್ ಹಾಸಿಗೆಗಳು ಜಿಲ್ಲಾಸ್ಪತ್ರೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಮಾತ್ರ ಸೀಮಿತವಾಗಿದ್ದವು. ಆದರೆ ಇಂದು ಸಮುದಾಯ ಆರೋಗ್ಯ ಕೇಂದ್ರದಲ್ಲೂ ಈ ವ್ಯವಸ್ಥೆ ಇದೆ. ಶಿಶುಗಳ ಹಾಗೂ ತಾಯಂದಿರ ಸಾವಿನ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆ ನೀಡಿರುವ ಗುರಿಯತ್ತ ಕರ್ನಾಟಕ ಸಾಗುತ್ತಿದೆ. ಬೆಂಗಳೂರು ನಗರಕ್ಕೆ ಮಾತ್ರ ಆರೋಗ್ಯ ಸೇವೆಗಳು ಸೀಮಿತವಾಗಿಲ್ಲ. ರಾಜ್ಯದ ಎಲ್ಲಾ ಮೂಲೆ ಮೂಲೆಗಳ ಜನರಿಗೂ ಆರೋಗ್ಯ ಸೇವೆ ಸಿಗಬೇಕು ಅನ್ನುವುದು ಸರ್ಕಾರದ ಗುರಿ ಎಂದು ಹೇಳಿದರು.

ಭವಿಷ್ಯದಲ್ಲಿ ಬೆಂಗಳೂರಿನ ಪೂರ್ವಭಾಗದಲ್ಲಿ PPP ಮಾದರಿ ಮೂಲಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜು ನಿರ್ಮಿಸಲಾಗುತ್ತದೆ. ನೆಫ್ರೋ ಯುರಾಲಜಿ, ಹೃದಯ ಸಂಬಂಧಿ ಹಾಗೂ ಕ್ಯಾನ್ಸರ್ ಸಂಬಂಧಿ ಆಸ್ಪತ್ರೆ ನಿರ್ಮಾಣವಾಗಲಿದೆ ಎಂದು ಭರವಸೆ ನೀಡಿದರು.
Recommended Video
ಕಳೆದ 15 ವರ್ಷಗಳಿಂದಲೂ ಆರೋಗ್ಯ ಇಲಾಖೆಯನ್ನು ಬದಲಿಸಬೇಕೆಂಬ ಕನಸಿಗೆ ಈಗ ಅವಕಾಶ ಸಿಕ್ಕಿದೆ. ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟಕ್ಕೆ ಸಮನಾಗಿ ರಾಜ್ಯದ ಆರೋಗ್ಯ ವ್ಯವಸ್ಥೆ ಅಭಿವೃದ್ಧಿ ಆಗಲಿದೆ. ಅನೇಕ ಜನರು ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಸೇವೆ ಸಿಗದೆ ಪರದಾಡುತ್ತಿದ್ದಾರೆ. ಈ ಹಿನ್ನೆಲೆ ತುರ್ತು ಆಂಬುಲೆನ್ಸ್ ಸೇವೆ ಅನ್ನೂ ಆರಂಭಿಸಲಾಗಿದೆ ಎಂದು ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.












Click it and Unblock the Notifications