ಬಜೆಟ್‌ನಲ್ಲಿ ರೂಪಾಯಿ ಚಿಹ್ನೆ ಕೈಬಿಟ್ಟ ತಮಿಳುನಾಡು: 'ಇದು ಕೇಂದ್ರ ಸರ್ಕಾರಕ್ಕೆ ಒಂದು ಎಚ್ಚರಿಕೆ'
ಬೆಂಗಳೂರು, ಮಾರ್ಚ್ 14: ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಬಂಧಪಟ್ಟಂತೆ ತಮಿಳುನಾಡು ಮತ್ತು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ನಡುವೆ ತಿಕ್ಕಾಟ ಜೋರಾಗಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕೇಂದ್ರ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಒಪ್ಪಲ್ಲ ಎಂದು ಸ್ಪಷ್ಟಪಡಿಸಿದೆ. ಇದೀಗ ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆ ಮಾಡಲು ಹೊಸ ವಿಧಾನ ಆರಿಸಿಕೊಂಡಿದ್ದಾರೆ. ತ್ರಿಭಾಷಾ ವಿವಾದದ ನಡುವೆ ತಮಿಳುನಾಡು ಸರ್ಕಾರ ಬಜೆಟ್‌ನಿಂದ ರೂಪಾಯಿ ಚಿಹ್ನೆಯನ್ನು ಕೈಬಿಟ್ಟಿದ್ದು, ತಮಿಳಿನ ಚಿಹ್ನೆಯನ್ನು ಅಳವಡಿಸಿಕೊಂಡಿದೆ.
ತ್ರಿಭಾಷಾ ವಿವಾದದ ನಡುವೆ ತಮಿಳುನಾಡು ಸರ್ಕಾರ ಬಜೆಟ್‌ನಿಂದ ದೇವನಾಗರಿ ಲಿಪಿಯ ರುಪಾಯಿ ಚಿಹ್ನೆಯನ್ನು ಕೈಬಿಟ್ಟಿದ್ದು, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸರ್ಕಾರವು ರಾಜ್ಯ ಬಜೆಟ್ ಲೋಗೋದಲ್ಲಿ ರೂಪಾಯಿ ಚಿಹ್ನೆಯನ್ನು 'ರು' ತಮಿಳು ಅಕ್ಷರಕ್ಕೆ ಬದಲಾವಣೆ ಮಾಡಿದೆ. ಭಾರತದ ಯಾವುದೇ ರಾಜ್ಯ ರಾಷ್ಟ್ರೀಯ ಕರೆನ್ಸಿ ಚಿಹ್ನೆಯನ್ನು ಕೈಬಿಟ್ಟಿರುವುದು ಇದೇ ಮೊದಲ ಬಾರಿ. ಎಂ.ಕೆ. ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರವು ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020 ಮತ್ತು ತ್ರಿಭಾಷಾ ನೀತಿಗೆ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಈ ನಿರ್ಧಾರ ತೆಗೆದುಕೊಂಡಿದೆ.

ಈ ಕುರಿತು ಕರ್ನಾಟಕದ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು ಇದು ಕೇಂದ್ರ ಸರ್ಕಾರಕ್ಕೆ ಒಂದು ಎಚ್ಚರಿಕೆ ಎಂದು ಹೇಳಿದ್ದಾರೆ. ಎಲ್ಲಾ ರಾಜ್ಯಗಳನ್ನು ಬೆಂಬಲಿಸುವುದು ಭಾರತ ಸರ್ಕಾರದ ಕರ್ತವ್ಯ. ಆದ್ದರಿಂದ ಅವರು ತಮ್ಮ ಕರ್ತವ್ಯಗಳನ್ನು ಸರಿಯಾಗಿ ನಿರ್ವಹಿಸುವಲ್ಲಿ ವಿಫಲವಾಗಿದ್ದಾರೆ. ಇದು ಕೇಂದ್ರ ಸರ್ಕಾರಕ್ಕೆ ಒಂದು ಎಚ್ಚರಿಕೆ. ಅವರು ಈ ಎಲ್ಲಾ ವಿಷಯಗಳ ಬಗ್ಗೆ ಯೋಚಿಸಬೇಕು ಎಂದು ತಿಳಿಸಿದ್ದಾರೆ.
ಆನೆ ದಾಳಿಗೆ ಮಹಿಳೆ ಸಾವು: ಈಶ್ವರ ಖಂಡ್ರೆ ಸಂತಾಪ
ಬೇಲೂರು ತಾಲೂಕಿನ ಕೋಗೋಡು ಗ್ರಾಮದಲ್ಲಿ 45 ವರ್ಷದ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಈ ದುಃಖದ ಸಂದರ್ಭದಲ್ಲಿ ಸರ್ಕಾರ ಅವರ ಕುಟುಂಬದ ಜೊತೆ ನಿಲ್ಲುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ಮೃತ ಮಹಿಳೆಯ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬಕ್ಕೆ ಈ ನೋವು ತಾಳಿಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿರುವ ಅವರು, ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಿಸಲು ಸರ್ವ ಪ್ರಯತ್ನ ಮಾಡುತ್ತಿದ್ದು, ಸರ್ಕಾರ ಸಂವೇದನಾತ್ಮಕವಾಗಿದೆ. ಜನರು ಮಳೆಗಾಲ ಆರಂಭವಾಗುವವರೆಗೆ ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.
ಎಪಿಸಿಸಿಎಫ್ ದರ್ಜೆಯ ಅಧಿಕಾರಿ ನೇತೃತ್ವದ ತಂಡವನ್ನು ಹಾಸನ ಜಿಲ್ಲೆಗೆ ಕಳುಹಿಸಿ, ಅಧ್ಯಯನ ಮಾಡಿ ಮಾನವ-ಆನೆ ಸಂಘರ್ಷಕ್ಕೆ ಶಾಶ್ವತ ಪರಿಹಾರ ಹುಡುಕಲು ಸೂಚಿಸುವುದಾಗಿ ಅವರು ಹೇಳಿದ್ದಾರೆ. ಇತ್ತೀಚೆಗೆ ಬೇಲೂರು ತಾಲೂಕಿನಲ್ಲಿ ಆನೆ ದಾಳಿಯಿಂದ ಮೃತಪಟ್ಟ ಯುವಕನ ಮನೆಗೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದ ತರುವಾಯ, ಬೇಲೂರು ಪಟ್ಟಣದಲ್ಲಿ ಸಭೆ ನಡೆಸಿ, ಜನರ ಅಹವಾಲು ಆಲಿಸಿದ್ದೇನೆ. ಸಾರ್ವಜನಿಕರ ಆನೆ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಲು ಭದ್ರಾ ಅಭಯಾರಣ್ಯದಲ್ಲಿ ಆನೆ ಧಾಮ ನಿರ್ಮಿಸುವ ಘೋಷಣೆಯನ್ನು ಬಜೆಟ್ ನಲ್ಲಿಯೇ ಮಾಡಲಾಗಿದೆ. ಆದಷ್ಟು ಶೀಘ್ರ ಆನೆ ಧಾಮ (ಸಾಫ್ಟ್ ರಿಲೀಸ್ ಸೆಂಟರ್) ನಿರ್ಮಿಸಿ ಮಾನವ-ಆನೆ ಸಂಘರ್ಷ ನಿಯಂತ್ರಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.












Click it and Unblock the Notifications