ಧ್ಯಾನ ಮಾಡುವುದು ಗಿಮಿಕ್ ಹೇಗೆ ಆಗುತ್ತದೆ: ಸಿದ್ದರಾಮಯ್ಯಗೆ ಬಿ.ಸಿ.ನಾಗೇಶ್ ಪ್ರಶ್ನೆ
ಬೆಂಗಳೂರು, ನವೆಂಬರ್ 5: ಧ್ಯಾನ, ಯೋಗ ಮಾಡಿದರೆ ಮಕ್ಕಳು ಕುಗ್ಗಿ ಹೋಗುತ್ತಾರೆ ಎನ್ನುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಸಿದ್ದರಾಮಯ್ಯಯವರಿಗೆ ಟ್ವೀಟ್ ಮೂಲಕ ಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿರುಗೇಟು ನೀಡಿದ್ದಾರೆ.
ಶಾಲಾ-ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ 10 ನಿಮಿಷ ಧ್ಯಾನ ಕಡ್ಡಾಯ ಆದೇಶದ ವಿರುದ್ಧ ಕಿಡಿಕಾರಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, 'ಯೋಗ ಮತ್ತು ಧ್ಯಾನದ ಅಗತ್ಯ ಎಲ್ಲರಿಗಿಂತ ಹೆಚ್ಚಾಗಿ ಶಿಕ್ಷಣ ಸಚಿವರಿಗಿದೆ' ಎಂದು ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯನವರ ಈ ಹೇಳಿಕೆಗೆ ಶನಿವಾರ ಸರಣಿ ಟ್ವೀಟ್ ಮೂಲಕ ಸಚಿವ ಬಿ ಸಿ ನಾಗೇಶ್ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯನವರೇ ಮಾನಸಿಕ, ದೈಹಿಕ ಆರೋಗ್ಯ, ಏಕಾಗ್ರತೆ, ವ್ಯಕ್ತಿತ್ವ ವಿಕಸನಕ್ಕಾಗಿ ಶಾಲಾ ಮಕ್ಕಳು 10 ನಿಮಿಷ ಧ್ಯಾನ ಮಾಡುವ ಉತ್ತಮ ಆಲೋಚನೆಯಲ್ಲೂ ನಿಮ್ಮಂತವರು ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವುದು ದುರಾದೃಷ್ಟಕರ. ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗೆ ಆಗುತ್ತದೆ ಎಂಬುದನ್ನು ಜನತೆಗೆ ಸ್ವಲ್ಪ ವಿವರಿಸುವಿರಾ?' ಎಂದು ಪ್ರಶ್ನಿಸಿದ್ದಾರೆ.

ಶಿಕ್ಷಣ ಕ್ಷೇತ್ರದ ಸುಧಾರಣೆ, ಬದಲಾವಣೆ, ಏಳಿಗೆ ಮತ್ತು ಅಭಿವೃದ್ಧಿಯೇ ನಮ್ಮ ಸರ್ಕಾರದ ಆದ್ಯತೆಯಾಗಿದೆ. ಮಕ್ಕಳ ಶೈಕ್ಷಣಿಕ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಬಿಜೆಪಿ ಸರ್ಕಾರ ಕೋವಿಡ್-19 ಸಂದರ್ಭದಲ್ಲಿ ಇಡೀ ದೇಶದಲ್ಲೇ ಮೊದಲು ನಮ್ಮ ರಾಜ್ಯದಲ್ಲಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಭೌತಿಕ ತರಗತಿಗಳನ್ನು ಆರಂಭಿಸಿತು. ಕೋವಿಡ್-19 ಕಾರಣ 2 ವರ್ಷಗಳ ಕಾಲ ಭೌತಿಕ ತರಗತಿಗಳಿಲ್ಲದೆ ಮಕ್ಕಳ ಕಲಿಕೆಯಲ್ಲಿ ಉಂಟಾದ ಹಿನ್ನಡೆ ಸರಿದೂಗಿಸಲು ದೇಶದಲ್ಲೇ ಮೊದಲು 'ಕಲಿಕಾ ಚೇತರಿಕೆ' ಕಾರ್ಯಕ್ರಮವನ್ನು ಇಡೀ ದೇಶಕ್ಕೆ ಮಾದರಿಯಾಗಿ ಅನುಷ್ಠಾನಗೊಳಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ದಾಖಲೆಯ 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಟ್ವೀಟ್ ಮಾಡಿದ್ದಾರೆ.
21ನೇ ಶತಮಾನದ ಅಗತ್ಯಗಳಿಗೆ ಪೂರಕವಾಗಿರುವ 'ರಾಷ್ಟ್ರೀಯ ಶಿಕ್ಷಣ ನೀತಿ-2020' ಅನುಷ್ಠಾನಗೊಳಿಸಲಾಗುತ್ತಿದೆ. ಶಾಲೆಗಳಲ್ಲಿ ಮೂಲಸೌಕರ್ಯ ಕೊರತೆ ನೀಗಿಸಲು 8,100 ಕೊಠಡಿ ನಿರ್ಮಿಸಲಾಗುತ್ತಿದೆ. ಅಲ್ಲದೇ ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ/ಬಾಳೆಹಣ್ಣು/ಚಿಕ್ಕಿ ನೀಡಲಾಗುತ್ತಿದೆ. ಶಿಕ್ಷಣದ ಗುಣಮಟ್ಟ ಕಾಪಾಡಿಕೊಳ್ಳಲು ಶೈಕ್ಷಣಿಕ ವರ್ಷದ ಆರಂಭದಲ್ಲೇ 30 ಸಾವಿರಕ್ಕೂ ಹೆಚ್ಚು ಅತಿಥಿ ಶಿಕ್ಷಕರು/ಉಪನ್ಯಾಸಕರ ಸೇವೆ ಪಡೆಯಲಾಗಿದೆ. ದೈಹಿಕ ಶಿಕ್ಷಕರು ಸೇರಿದಂತೆ 2,500 ಪ್ರೌಢಶಾಲಾ ಶಿಕ್ಷಕರು ಮತ್ತು 778 ಪಿಯು ಕಾಲೇಜು ಉಪನ್ಯಾಸಕರ ನೇಮಕ ಪ್ರಕ್ರಿಯೆಯನ್ನು ಮುಂಬರುವ ದಿನಗಳಲ್ಲಿ ಆರಂಭಿಸಲಾಗುತ್ತಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಅರ್ಜಿ ಹಾಕದವರು, ಪರೀಕ್ಷೆ ಬರೆಯದವರನ್ನು ಶಿಕ್ಷಕರಾಗಿ ನೇಮಿಸಿ ಶೈಕ್ಷಣಿಕ ವ್ಯವಸ್ಥೆಗೆ ಧಕ್ಕೆ ತರಲು ಯತ್ನಿಸಿದ ಅಪ'ಕೀರ್ತಿ' ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲಬೇಕಲ್ಲವೇ! ಭ್ರಷ್ಟಾಚಾರ, ಸಾಲು, ಸಾಲು ಹಗರಣಗಳಲ್ಲಿ ಮಿಂದೆದ್ದಿರುವುದು ಯಾರೆಂದು ರಾಜ್ಯದ ಜನತೆಗೆ ತಿಳಿದಿದೆ. ನಿಮ್ಮ ಅವಧಿಯಲ್ಲಿ ಶಿಕ್ಷಣ ಇಲಾಖೆಯಲ್ಲಿ ಸುಧಾರಣೆ, ಅಭಿವೃದ್ಧಿ ಕಾರ್ಯಗಳನ್ನು ನೀವು ಮಾಡಿದ್ದರೇ ಶಿಕ್ಷಕರು ಮತ್ತು ಮೂಲಸೌಕರ್ಯಗಳ ಕೊರತೆ ಈ ಪ್ರಮಾಣದಲ್ಲಿ ಇರುತ್ತಿತ್ತೇ? ಎಂದು ಪ್ರಶ್ನಿಸಿದ್ದಾರೆ.
ನೀವು ಅಧಿಕಾರದಲ್ಲಿದ್ದಾಗ ಬಾರದ ಶೈಕ್ಷಣಿಕ ಅಭಿವೃದ್ಧಿಯ ಆಲೋಚನೆಗಳು ಈಗ ನಿಮಗೆ ಬರುತ್ತಿರುವುದು ಸಂತೋಷ. ಸಂಶೋಧಕರು, ವೈದ್ಯರು, ವಿಜ್ಞಾನಿಗಳ ಪ್ರಕಾರ, ಯೋಗ ಮತ್ತು ಧ್ಯಾನ ಮಾಡುವುದು ದೈಹಿಕ, ಮಾನಸಿಕ ಆರೋಗ್ಯಕ್ಕೆ ಅತ್ಯಂತ ಉಪಯುಕ್ತ ಎಂದಿದ್ದಾರೆ.
ಮಾನ್ಯ @siddaramaiah ನವರೇ,
— B.C Nagesh (@BCNagesh_bjp) November 5, 2022
ಮಾನಸಿಕ, ದೈಹಿಕ ಆರೋಗ್ಯ, ಏಕಾಗ್ರತೆ, ವ್ಯಕ್ತಿತ್ವ ವಿಕಸನಕ್ಕಾಗಿ ಶಾಲಾ ಮಕ್ಕಳು 10 ನಿಮಿಷ ಧ್ಯಾನ ಮಾಡುವ ಉತ್ತಮ ಆಲೋಚನೆಯಲ್ಲೂ ನಿಮ್ಮಂತವರು ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವುದು ದುರಾದೃಷ್ಟಕರ.
ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗೆ ಆಗುತ್ತದೆ ಎಂಬುದನ್ನು ಜನತೆಗೆ ಸ್ವಲ್ಪ ವಿವರಿಸುವಿರಾ? (1/8)












Click it and Unblock the Notifications