ರಾಹುಲ್ ಗಾಂಧಿ ಇರುವವರೆಗೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಜಗದೀಶ್ ಶೆಟ್ಟರ್
ಕಲಬುರಗಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ತೀವ್ರ ವಾಗ್ದಾಳಿ ನಡೆಸಿದ್ದು, ರಾಹುಲ್ ಗಾಂಧಿ ಇರುವವರೆಗೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಟೀಕಿಸಿದ್ದಾರೆ. ಇವಿಎಂ, ಮತಗಳ್ಳತನ ಮತ್ತು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿಚಾರದಲ್ಲಿ ಕಾಂಗ್ರೆಸ್ ಮಾಡುತ್ತಿರುವ ಆರೋಪಗಳಿಗೆ ಆಧಾರಗಳಿಲ್ಲ ಎಂದು ಅವರು ದೂರಿದ್ದಾರೆ.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಚುನಾವಣಾ ವ್ಯವಸ್ಥೆಯ ವಿರುದ್ಧ ನಿರಂತರವಾಗಿ ಆರೋಪ ಮಾಡುತ್ತಿದ್ದಾರೆ. ಆದರೆ, ತಮ್ಮ ಆರೋಪಗಳನ್ನು ಸಾಬೀತುಪಡಿಸಲು ಅಗತ್ಯ ದಾಖಲೆಗಳನ್ನು ನೀಡುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇವಿಎಂ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ಶೆಟ್ಟರ್ ಪ್ರಶ್ನೆ
ಇವಿಎಂ ಬಳಕೆ 1982ರಲ್ಲೇ ಆರಂಭವಾಗಿದ್ದು, ಈ ವ್ಯವಸ್ಥೆಗೆ ಸಂಬಂಧಿಸಿದ ಕಾನೂನು ರೂಪಿಸುವಲ್ಲಿ ಕಾಂಗ್ರೆಸ್ ಪಾತ್ರವಿದೆ ಎಂದು ಶೆಟ್ಟರ್ ಹೇಳಿದರು. 2004ರ ಲೋಕಸಭೆ ಚುನಾವಣೆಯಲ್ಲಿ ಇವಿಎಂ ಮೂಲಕವೇ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ನಂತರವೂ ಹಲವು ಚುನಾವಣೆಗಳಲ್ಲಿ ಕಾಂಗ್ರೆಸ್ ಜಯಗಳಿಸಿದೆ. ಆದರೆ, 2014ರ ಬಳಿಕ ಎನ್‌ಡಿಎ ಗೆಲುವು ಸಾಧಿಸುತ್ತಿರುವುದರಿಂದ ಇವಿಎಂ ವಿರುದ್ಧ ಆರೋಪ ಮಾಡಲಾಗುತ್ತಿದೆ ಎಂದು ಟೀಕಿಸಿದರು.
ವಿವಿಪ್ಯಾಟ್ ವ್ಯವಸ್ಥೆಯ ಬಗ್ಗೆಯೂ ಸುಪ್ರೀಂ ಕೋರ್ಟ್‌ನಲ್ಲಿ ಪರಿಶೀಲನೆ ನಡೆದಿದೆ. ಇವಿಎಂಗಳಲ್ಲಿ ದೋಷಗಳಿದ್ದರೆ ಅವುಗಳನ್ನು ಸಾಬೀತುಪಡಿಸಲಿ ಎಂದು ಸವಾಲು ಹಾಕಿದರೂ ರಾಹುಲ್ ಗಾಂಧಿ ಮುಂದೆ ಬಂದಿಲ್ಲ ಎಂದು ಜಗದೀಶ್ ಶೆಟ್ಟರ್ ಆರೋಪಿಸಿದರು.
ಕರ್ನಾಟಕದಲ್ಲಿಯೂ ಇವಿಎಂ ಮೂಲಕ ನಡೆದ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ತಮಿಳುನಾಡಿನಲ್ಲಿ ಟಿವಿಕೆ ಗೆಲುವು ಸಾಧಿಸಿದೆ. ಕೇರಳದಲ್ಲಿ ಎಸ್‌ಐಆರ್‌ನಿಂದಲೇ ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದು ಅಲ್ಲಿನ ಕಾಂಗ್ರೆಸ್ ನಾಯಕರೇ ಹೇಳುತ್ತಿದ್ದಾರೆ ಎಂದು ಶೆಟ್ಟರ್ ತಿಳಿಸಿದರು.
ಮತದಾರರ ಪಟ್ಟಿಯಲ್ಲಿ ಆಕ್ಷೇಪಗಳಿದ್ದರೆ ಫಾರಂ ನಂಬರ್ 7 ಮೂಲಕ ದೂರು ಸಲ್ಲಿಸಲು ಅವಕಾಶವಿದೆ. ಆದರೆ, ಆಕ್ಷೇಪ ಸಲ್ಲಿಸಿದ ಮಾತ್ರಕ್ಕೆ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗುವುದಿಲ್ಲ. ಪಾರದರ್ಶಕ ಚುನಾವಣಾ ವ್ಯವಸ್ಥೆ ಇದ್ದರೂ ಕಾಂಗ್ರೆಸ್ ಅದನ್ನು ಒಪ್ಪಿಕೊಳ್ಳಲು ಸಿದ್ಧವಿಲ್ಲ ಎಂದು ಅವರು ಆರೋಪಿಸಿದರು.
ರಾಹುಲ್ ಗಾಂಧಿ ಅಪಕ್ವ ನಾಯಕ
ರಾಹುಲ್ ಗಾಂಧಿ ಅವರನ್ನು ಅಪಕ್ವ ನಾಯಕ ಎಂದು ಕರೆದ ಶೆಟ್ಟರ್, ಅವರ ರಾಜಕೀಯ ನಡೆ ಮುಂದುವರಿದರೆ ಸಮಸ್ಯೆ ಅವರಿಗೇ ಎದುರಾಗಲಿದೆ ಎಂದರು. ರಾಹುಲ್ ಗಾಂಧಿ ಶೇ.99ರಷ್ಟು ಸೋಲು ಕಂಡಿದ್ದಾರೆ. ಅವರು ಇರುವವರೆಗೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಶೆಟ್ಟರ್ ವಾಗ್ದಾಳಿ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಡಳಿತ ವಿರೋಧಿ ಅಲೆ ಇಲ್ಲ ಎಂದು ಪ್ರತಿಪಾದಿಸಿದ ಅವರು, ಪ್ರಜಾಪ್ರಭುತ್ವದ ಮೂಲಕ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬರಲು ಸಾಧ್ಯವಾಗದ ಕಾರಣ ಹಿಂಬಾಗಿಲಿನಿಂದ ಅಧಿಕಾರ ಹಿಡಿಯುವ ಪ್ರಯತ್ನ ನಡೆಯುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಆರೋಪಿಸಿದರು.
ಚರ್ಚೆಗೆ ಸಿದ್ಧರಿಲ್ಲದವರು ಮತ್ತು ನ್ಯಾಯಾಲಯದಲ್ಲಿ ತಮ್ಮ ಆರೋಪಗಳನ್ನು ಸಾಬೀತುಪಡಿಸಲು ಸಾಧ್ಯವಾಗದವರು ಚುನಾವಣಾ ವ್ಯವಸ್ಥೆಯ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು. ದೇಶದಲ್ಲಿ ಅರಾಜಕತೆ ಸೃಷ್ಟಿಸಿ ಅಧಿಕಾರಕ್ಕೆ ಬರುವ ಪ್ರಯತ್ನ ನಡೆಯುತ್ತಿದೆಯೇ ಎಂಬ ಅನುಮಾನವಿದೆ ಎಂದ ಅವರು, ವಿದೇಶಿ ಶಕ್ತಿಗಳ ಕೈವಾಡದ ಸಾಧ್ಯತೆಯ ಬಗ್ಗೆಯೂ ಪರಿಶೀಲನೆ ನಡೆಯಬೇಕು. ಎಲಾನ್ ಮಸ್ಕ್ ಭಾರತಕ್ಕೆ ಬರಲು ರಾಹುಲ್ ಗಾಂಧಿ ಬೆಂಬಲಿಸುತ್ತಿದ್ದಾರೆ ಎಂದು ಆರೋಪಿಸಿದ ಶೆಟ್ಟರ್, ದೇಶದ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.
ಸ್ಟಿಂಗ್ ಆಪರೇಷನ್ ಹಿಂದೆ ಡಿಕೆಶಿ
ರಾಜ್ಯದಲ್ಲಿ ನಡೆಯುತ್ತಿರುವ ಸ್ಟಿಂಗ್ ಆಪರೇಷನ್ ವಿವಾದದ ಬಗ್ಗೆಯೂ ಮಾತನಾಡಿದ ಶೆಟ್ಟರ್, ಇದರ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇದ್ದಾರೆ ಎಂದು ಆರೋಪಿಸಿದರು. ಸ್ಟಿಂಗ್ ಆಪರೇಷನ್ ನಡೆದಿರುವ ಬಗ್ಗೆ ಡಿ.ಕೆ. ಶಿವಕುಮಾರ್ ಅವರೇ ಹೇಳಿಕೆ ನೀಡಿದ್ದಾರೆ. ಹಾಗಿದ್ದರೆ ತನಿಖೆ ನಡೆಸಲು ಅವರಿಗೆ ಏನು ಸಮಸ್ಯೆ? ಧೈರ್ಯವಿದ್ದರೆ ಪ್ರಕರಣವನ್ನು ಸಿಬಿಐಗೆ ವಹಿಸಲಿ ಎಂದು ಸವಾಲು ಹಾಕಿದರು.
ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ಜನರ ಗಮನ ಬೇರೆಡೆ ಸೆಳೆಯಲು ಸ್ಟಿಂಗ್ ಆಪರೇಷನ್ ವಿಚಾರ ಮುನ್ನೆಲೆಗೆ ತರಲಾಗಿದೆ ಎಂದು ಆರೋಪಿಸಿದರು. ಇಂತಹ ಬೆಳವಣಿಗೆಗಳು ಒಳ್ಳೆಯದಲ್ಲ. ವೈಯಕ್ತಿಕ ವಿಚಾರಗಳಿಗಿಂತ ಜನರ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಜಗದೀಶ್ ಶೆಟ್ಟರ್ ಹೇಳಿದರು.
Jagadish Shettar: ರಾಜ್ಯ ಸರ್ಕಾರದ ವಿರುದ್ಧವೂ ವಾಗ್ದಾಳಿ
ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆಯನ್ನೂ ಶೆಟ್ಟರ್ ಪ್ರಶ್ನಿಸಿದರು. ಮುಖ್ಯಮಂತ್ರಿಗಳು ಯಾವುದೇ ಹಣ ಬಿಡುಗಡೆ ಮಾಡುತ್ತಿಲ್ಲ. ಸರ್ಕಾರಿ ವಾಹನಗಳಿಗೆ ಡೀಸೆಲ್ ಹಾಕಿಸಲೂ ಹಣವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರ ಯಾವ ಸಂದರ್ಭದಲ್ಲಿ ಬೇಕಾದರೂ ಪತನವಾಗಬಹುದು ಎಂದು ಭವಿಷ್ಯ ನುಡಿದರು.
ಬರ ಪರಿಹಾರದ ವಿಚಾರದಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ವರದಿ ಸಲ್ಲಿಸುವಲ್ಲಿ ವಿಳಂಬ ಮಾಡಿದೆ ಎಂದು ದೂರಿದರು. ರಾಜ್ಯ ಸರ್ಕಾರ ಮೊದಲು ತನ್ನ ನಿಧಿಯಿಂದ ಬರ ಪರಿಹಾರ ಕಾರ್ಯಗಳಿಗೆ ಖರ್ಚು ಮಾಡಿ, ನಂತರ ಕೇಂದ್ರದಿಂದ ಹಣ ಪಡೆಯಲು ಅವಕಾಶವಿದೆ ಎಂದು ತಿಳಿಸಿದರು.
ಕಬ್ಬು ಬೆಳೆಗಾರರ ಹೋರಾಟದ ಬಗ್ಗೆಯೂ ಪ್ರಸ್ತಾಪಿಸಿದ ಅವರು, ಕನಿಷ್ಠ ಬೆಂಬಲ ಬೆಲೆ ಹಾಗೂ ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ರೈತರು ಹೋರಾಟ ನಡೆಸುತ್ತಿದ್ದಾರೆ. ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಬ್ಬಿನ ಬೆಲೆ ಹೆಚ್ಚಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿದೆ ಎಂದು ಹೇಳಿದ್ದೆ. ಈಗಲೂ ರಾಜ್ಯ ಸರ್ಕಾರ ಬೆಲೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬಹುದು ಎಂದು ಅಭಿಪ್ರಾಯಪಟ್ಟರು.


Click it and Unblock the Notifications
