ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದವರನ್ನು ಭೇಟಿಯಾದ ಜನಾರ್ದನ ರೆಡ್ಡಿ!
ಬೆಂಗಳೂರು, ಏಪ್ರಿಲ್ 09; ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಿದೆ. 42 ಕ್ಷೇತ್ರದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಬಳಿಕ ಪಕ್ಷದಲ್ಲಿ ಅಸಮಾಧಾನ ಉಂಟಾಗಿದೆ. ರಾಜ್ಯದಲ್ಲಿ ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಘೋಷಣೆಯಾಗಲಿದೆ.
ಕಾಂಗ್ರೆಸ್ 2ನೇ ಪಟ್ಟಿಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಣೆ ಮಾಡಿದಂತೆ ಇಕ್ಬಾಲ್ ಅನ್ಸಾರಿಗೆ ಗಂಗಾವತಿ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಕ್ಷೇತ್ರದ ಟಿಕೆಟ್‌ಗಾಗಿ ಎಚ್. ಆರ್. ಶ್ರೀನಾಥ್ ಸಹ ಆಕಾಂಕ್ಷಿಯಾಗಿದ್ದರು. ಟಿಕೆಟ್ ಕೈ ತಪ್ಪುತ್ತಿದ್ದಂತೆಯೇ ಅವರು ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ.

ಗಂಗಾವತಿ ಕ್ಷೇತ್ರದ ಹಾಲಿ ಶಾಸಕರು ಬಿಜೆಪಿಯ ಪರಣ್ಣ ಮುನವಳ್ಳಿ. ಆದರೆ ಈ ಬಾರಿ ಕ್ಷೇತ್ರ ಗಮನ ಸೆಳೆದಿರುವುದು ಮಾಜಿ ಸಚಿವ, ಕಲ್ಯಾಣ ರಾಜ್ಯ ಪಗ್ರತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಸ್ಪರ್ಧೆಯ ಕಾರಣಕ್ಕೆ. ಜನಾರ್ದನ ರೆಡ್ಡಿ ಗಂಗಾವತಿ ಕ್ಷೇತ್ರದಿಂದ ಕಣಕ್ಕಿಳಿದಿದ್ದು, ಈಗಾಗಲೇ ಕ್ಷೇತ್ರದಲ್ಲಿ ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ.
ವಿವಿಧ ನಾಯಕರ ಭೇಟಿ; ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಎಚ್. ಆರ್. ಶ್ರೀನಾಥ್ ಮನೆಗೆ ಬಿಜೆಪಿ ಶಾಸಕರಾದ ಪರಣ್ಣ ಮುನವಳ್ಳಿ ಹಾಗೂ ಬಸವರಾಜ ದಢೇಸೂಗೂರು ಭೇಟಿ ನೀಡಿ ಮಾತುಕತೆ ನಡೆಸಿದ್ದರು. ಈಗ ಮಾಜಿ ಸಚಿವ ಜನಾರ್ದನ ರೆಡ್ಡಿ ಸಹ ಭೇಟಿ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಟಿಕೆಟ್ ವಂಚಿತರಾದ ಎಚ್. ಆರ್. ಶ್ರೀನಾಥ್ ಸೆಳೆಯಲು ಹಲವಾರು ನಾಯಕರು ಪ್ರಯತ್ನ ನಡೆಸಿದ್ದಾರೆ.

ಗಂಗಾವತಿ ಕ್ಷೇತ್ರದಲ್ಲಿ ಗೆಲ್ಲಲೇಬೇಕು ಎಂದು ಜನಾರ್ದನ ರೆಡ್ಡಿ ತಂತ್ರಗಳನ್ನು ರೂಪಿಸುತ್ತಿದ್ದಾರೆ. ಇದರ ಭಾಗವಾಗಿಯೇ ಕಾಂಗ್ರೆಸ್ ಟಿಕೆಟ್ ವಂಚಿತರಾದ ಎಚ್. ಆರ್. ಶ್ರೀನಾಥ್ ಭೇಟಿ ಮಾಡಿದ್ದಾರೆ. ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ, ಕಾಂಗ್ರೆಸ್ ಮತ್ತು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಡುವೆ ನೇರ ಪೈಪೋಟಿ ನಿರೀಕ್ಷೆ ಮಾಡಲಾಗಿದೆ.
ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಬಳಿಕ ಮಾತನಾಡಿದ್ದ ಎಚ್. ಆರ್. ಶ್ರೀನಾಥ್ ಜಿಲ್ಲೆಯ ಯಾವುದೇ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುವುದಿಲ್ಲ ಎಂದು ಹೇಳಿದ್ದರು. ಅಕ್ಕಪಕ್ಕದ ಜಿಲ್ಲೆಗಳಲ್ಲಿ ಬೇಕಾದರೆ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುವೆ. ಆದರೆ ಗಂಗಾವತಿ ಸೇರಿದಂತೆ ಕೊಪ್ಪಳದಲ್ಲಿ ಯಾರ ಪರವಾಗಿಯೂ ಪ್ರಚಾರ ಮಾಡುವುದಿಲ್ಲ ಎಂದು ಹೇಳಿದ್ದರು. ಈಗ ಅವರನ್ನು ಸೆಳೆಯಲು ಮಾಜಿ ಸಚಿವ ಜನಾರ್ದನ ರೆಡ್ಡಿ ಮುಂದಾಗಿದ್ದಾರೆ.
2022ರ ಡಿಸೆಂಬರ್ 25ರಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಘೋಷಣೆ ಮಾಡಿದ ಮಾಜಿ ಸಚಿವ ಜನಾರ್ದನ ರೆಡ್ಡಿ ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತದಿಂದ ಕಣಕ್ಕಿಳಿಯುತ್ತೇನೆ ಎಂದು ಘೋಷಣೆ ಮಾಡಿದ್ದರು. ಈಗಾಗಲೇ ಚುನಾವಣಾ ಆಯೋಗದಿಂದ ಪುಟ್‌ಬಾಲ್ ಚಿನ್ಹೆ ಪಡೆದಿರುವ ಅವರು ಗಂಗಾವತಿಯಲ್ಲಿ ಬಿರುಸಿನಿಂದ ಪ್ರಚಾರವನ್ನು ನಡೆಸುತ್ತಿದ್ದಾರೆ.
ಗಂಗಾವತಿಯಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ಇಕ್ಬಾಲ್ ಅನ್ಸಾರಿ, ಎಚ್. ಆರ್. ಶ್ರೀನಾಥ್, ಮಲ್ಲಿಕಾರ್ಜುನ ನಾಗಪ್ಪ ನಡುವೆ ಪೈಪೋಟಿ ಇತ್ತು. ಅಂತಿಮವಾಗಿ ಸಿದ್ದರಾಮಯ್ಯ ಆಪ್ತರಾದ ಇಕ್ಬಾಲ್ ಅನ್ಸಾರಿ ಟಿಕೆಟ್ ಪಡೆಯುವಲ್ಲಿ ಸಫಲರಾಗಿದ್ದಾರೆ. ಅನ್ಸಾರಿಗೆ ಟಿಕೆಟ್ ನೀಡಿದರೆ ಪಕ್ಷ ಸೋಲುತ್ತದೆ ಎಂಬುದು ಆಂತರಿಕ ಸಮೀಕ್ಷೆಯಲ್ಲಿ ತಿಳಿದಿದೆ. ಇದನ್ನು ಪಕ್ಷದ ವರಿಷ್ಠರ ಗಮನಕ್ಕೂ ತಂದಿದ್ದೆ. ಆದರೆ ನಮ್ಮ ಪಕ್ಷದ ನಾಯಕರೇ ನನಗೆ ಟಿಕೆಟ್ ತಪ್ಪಿಸಿದ್ದಾರೆ ಎಂದು ಎಚ್. ಆರ್. ಶ್ರೀನಾಥ್ ಪಕ್ಷದ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಈ ಟಿಕೆಟ್ ಕೈ ತಪ್ಪಿದ ಅಸಮಾಧಾನ ಜನಾರ್ದನ ರೆಡ್ಡಿಗೆ ಚುನಾವಣೆಯಲ್ಲಿ ಸಹಾಯಕವಾಗುವ ನಿರೀಕ್ಷೆ ಇದೆ.












Click it and Unblock the Notifications