5 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಿಸಿದ ಜನಾರ್ದನ ರೆಡ್ಡಿ
ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ, ಮಾಜಿ ಸಚಿವ ಜನಾರ್ದನ ರೆಡ್ಡಿ ಪಕ್ಷದ ಐವರು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು.
ಬೆಂಗಳೂರು, ಫೆಬ್ರವರಿ 16; ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ, ಮಾಜಿ ಸಚಿವ ಜನಾರ್ದನ ರೆಡ್ಡಿ ಈ ಬಾರಿಯ ಚುನಾವಣೆಗೆ ಪಕ್ಷದ ಐವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದರು. ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಿಂದ ಅವರು ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ.
ಗುರುವಾರ ಕೊಪ್ಪಳದಲ್ಲಿ ಜನಾರ್ದನ ರೆಡ್ಡಿ ಸಿರಗುಪ್ಪ, ಕನಕಗಿರಿ, ನಾಗಠಾಣ, ಸಿಂಧನೂರು, ಹಿರಿಯೂರು ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದರು.
ನಂತರ ಮಾತನಾಡಿದ ಅವರು, "ಅವರು ಗೆಲ್ಲುತ್ತಾರೆ ಎಂಬ ನಂಬಿಕೆಯೊಂದಿಗೆ ಅಭ್ಯರ್ಥಿ ಘೋಷಣೆ ಮಾಡಿದ್ದೇವೆ. ಸಮೀಕ್ಷೆ ಮಾಡಿಸಿ, ಗೆಲ್ಲುವ ಅಭ್ಯರ್ಥಿಗಳನ್ನು ಘೋಷಿಸುತ್ತಿದ್ದೇವೆ. ನಾನು ಒಂದೇ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ" ಎಂದರು.

ಘೋಷಣೆಯಾದ ಅಭ್ಯರ್ಥಿಗಳು
* ಸಿರಗುಪ್ಪ- ಧರೆಪ್ಪ ನಾಯಕ
* ಕನಕಗಿರಿ- ಡಾ. ಚಾರುಲ್ ದಾಸರಿ
* ನಾಗಠಾಣಾ- ಶ್ರೀಕಾಂತ್
* ಸಿಂಧನೂರು- ನೆಕ್ಕಂಟಿ ಮಲ್ಲಿಕಾರ್ಜುನ
* ಚಿತ್ರದುರ್ಗ- ಮಹೇಶ್
ಜನಾರ್ದನ ರೆಡ್ಡಿ ಮಂಗಳವಾರ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಬೃಹತ್ ಪಾದಯಾತ್ರೆ ನಡೆಸಿದ್ದರು. 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ್ದರು.
ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಪ್ರಣಾಳಿಕೆಯಲ್ಲಿ ರೈತರಿಗೆ, ಕೃಷಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ. ರೈತರ ಖಾತೆಗೆ ಪ್ರತಿ ವರ್ಷ 15 ಸಾವಿರ ರೂ. ಜಮೆ ಮಾಡುವ ಭರವಸೆಯನ್ನು ನೀಡಲಾಗಿದೆ. ನೀರಾವರಿ ಯೋಜನೆಗಳ ಜಾರಿಗೆ ಸಹ ಒತ್ತು ನೀಡಲಾಗಿದೆ.
ಜನಾರ್ದನ ರೆಡ್ಡಿ ಡಿಸೆಂಬರ್ 25ರಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದರು. ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದ್ದರು. ಈಗಾಗಲೇ ಅವರು ಚುನಾವಣಾ ಪ್ರಚಾರವನ್ನು ನಡೆಸುತ್ತಿದ್ದಾರೆ.
ಉತ್ತರ ಕರ್ನಾಟಕ ಭಾಗದಲ್ಲಿ ಜನಾರ್ದನ ರೆಡ್ಡಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಆ ಭಾಗದಲ್ಲಿಯೇ ಹೆಚ್ಚಿನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಿರೀಕ್ಷೆ ಇದೆ.












Click it and Unblock the Notifications