ಅಕ್ರಮ ಗಣಿಗಾರಿಕೆ ಪ್ರಕರಣ : 4 ಅರ್ಜಿ ವಾಪಸ್ ಪಡೆದ ಜನಾರ್ದನ ರೆಡ್ಡಿ
ಬೆಂಗಳೂರು, ಫೆಬ್ರವರಿ 27 : ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ಗೆ ಸಲ್ಲಿಸಿದ್ದ ನಾಲ್ಕು ಅರ್ಜಿಗಳನ್ನು ಮಾಜಿ ಸಚಿವ ಜನಾರ್ದನ ರೆಡ್ಡಿ ವಾಪಸ್ ಪಡೆದಿದ್ದಾರೆ. ಪ್ರಕರಣದಲ್ಲಿ ಜೈಲು ಸೇರಿದ್ದ ಜನಾರ್ದನ ರೆಡ್ಡಿ ಜಾಮೀನಿನ ಮೇಲೆ ಹೊರ ಬಂದಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಿ ಅದಿರು ಸಾಗಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಜನಾರ್ದನ ರೆಡ್ಡಿ ಅವರ ವಿರುದ್ಧ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ. ಇದನ್ನು ರದ್ದುಪಡಿಸಬೇಕು ಎಂದು ಹೈಕೋರ್ಟ್‌ಗೆ ನಾಲ್ಕು ಅರ್ಜಿಗಳನ್ನು ಸಲ್ಲಿಸಲಾಗಿತ್ತು.

ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹ ಅವರಿದ್ದ ಏಕಸದಸ್ಯ ಪೀಠ ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿತು. ಈ ಸಂದರ್ಭದಲ್ಲಿ ಜನಾರ್ದನ ರೆಡ್ಡಿ ಪರ ವಕೀಲರು ಅರ್ಜಿಯನ್ನು ವಾಪಸ ಪಡೆಯುತ್ತೇವೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಸಿಬಿಐ ಪರ ವಕೀಲರು ಸಹ ಇದಕ್ಕೆ ಸಮ್ಮತಿ ಸೂಚಿಸಿದರು.
ಲೋಕಾಯುಕ್ತರಾಗಿದ್ದ ಸಂತೋಷ್ ಹೆಗ್ಡೆ ಮತ್ತು ಸೆಂಟ್ರಲ್ ಎಂಪವರ್ ಕಮಿಟಿ ವರಧಿ ಆಧರಿಸಿ ಅಕ್ರಮ ಗಣಿಗಾರಿಕೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಸಿಬಿಐ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಕೆ ಮಾಡಿದೆ. ಈ ದೋಷಾರೋಪ ಪಟ್ಟಿಯನ್ನು ರದ್ದುಗೊಳಿಸುವಂತೆ ಕರ್ನಾಟಕ ಹೈಕೋರ್ಟ್‌ಗೆ ಜನಾರ್ದನ ರೆಡ್ಡಿ ಅರ್ಜಿಗಳನ್ನು ಸಲ್ಲಿಸಿದ್ದರು. ಆದರೆ, ಈಗ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.












Click it and Unblock the Notifications