ಕರ್ನಾಟಕಕ್ಕೆ 5 ಕೋಟಿ ರೂ. ನೀಡಲು ತಮಿಳುನಾಡು ಸರ್ಕಾರಕ್ಕೆ ಆದೇಶ
ಬೆಂಗಳೂರು, ಜನವರಿ 22: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಅವರಿಂದ ಜಪ್ತಿ ಮಾಡಲಾದ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ವಸ್ತುಗಳಿಗೆ ಕೊನೆಗೂ ಮುಕ್ತಿ ಸಿಗುವ ಕಾಲ ಸನ್ನಿಹಿತವಾಗಿದೆ.
ಹತ್ತಾರು ವಷರ್ಷಗಳಿಂದ ಖಜಾನೆಯಲ್ಲಿ ಕೊಳೆಯುತ್ತಿರುವ ಆ ವಸ್ತುಗಳನ್ನು ಹರಾಜು ಹಾಕುವ ಬದಲು ತಮಿಳುನಾಡು ಸರ್ಕಾರದ ಸುಪರ್ದಿಗೆ ನೀಡಲು ಪ್ರಕರಣದ ವಿಚಾರಣೆ ನಡೆಸಿದ್ದ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಆರ್‌ಟಿಐ ಕಾರ್ಯಕರ್ತ ಟಿ. ನರಸಿಂಹ ಮೂರ್ತಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಾಲಯ, ಜಯಲಲಿತಾ ಅವರ ಒಡೆವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಬೇಕು ಎಂದು ಕರ್ನಾಟಕದ ಗೃಹ ಇಲಾಖೆ ಕಾರ್ಯದರ್ಶಿ ಮತ್ತು ಪೊಲೀಸ್ ಇಲಾಖೆಗೆ ನಿರ್ದೇಶಿಸಿದೆ.
ಅಲ್ಲದೆ, ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಗಾಗಿ ವೆಚ್ಚವಾಗಿರುವ 5 ಕೋಟಿ ಹಣವನ್ನು ಡಿಡಿ ರೂಪದಲ್ಲಿ ಕರ್ನಾಟಕ ಸರ್ಕಾರಕ್ಕೆ ಪಾವತಿಸುವಂತೆ ತಮಿಳುನಾಡು ಸರ್ಕಾರಕ್ಕೆ ಸೂಚಿಸಿದೆ. ಹಾಗಾಗಿ ತಮಿಳುನಾಡು ಕರ್ನಾಟಕ ಸರ್ಕಾರಕ್ಕೆ 5 ಕೋಟಿ ರೂ.ಗಳನ್ನು ನೀಡಬೇಕಿದೆ.
ಇದಕ್ಕೂ ಮುನ್ನ ಪ್ರಕರಣದಲ್ಲಿ ರಾಜ್ಯ ಸರ್ಕಾರಿ ವಿಶೇಷ ಅಭಿಯೋಜಕರು, ಜಪ್ತಿಯಾದ ಜಯಲಲಿತಾ ಅವರ ಆಸ್ತಿ-ವಸ್ತುಗಳ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಅದನ್ನು ಪರಿಗಣಿಸಿದ ನ್ಯಾಯಾಲಯ ಈ ಆದೇಶ ಮಾಡಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಬೆಂಗಳೂರಿನ ವಿಶೇಷ ನ್ಯಾಯಾಲಯವು ಜಯಲಲಿತಾಗೆ 4 ವರ್ಷ ಜೈಲು ಮತ್ತು 100 ಕೋಟಿ ರೂ. ದಂಡ ವಿಧಿಸಿ 2014ರ ಸೆ.27ರಂದು ಆದೇಶಿಸಿತ್ತು. ಜತೆಗೆ, ಜಪ್ತಿ ಮಾಡಲಾದ ಜಯಲಲಿತಾ ಅವರ ಬೆಲೆಬಾಳುವ ವಸ್ತುಗಳನ್ನು ಆರ್‌ಬಿಐ, ಎಸ್‌ಬಿಐಗೆ ಅಥವಾ ಸಾರ್ವಜನಿಕ ಹರಾಜು ಮೂಲಕ ಮಾರಾಟ ಮಾಡಬೇಕು. ಅದರಿಂದ ಬಂದ ಹಣವನ್ನು ದಂಡ ಮೊತ್ತಕ್ಕೆ ಹೊಂದಾಣಿಕೆ ಮಾಡಬೇಕು ಎಂದು ನಿರ್ದೇಶಿಸಿತ್ತು.
ಹಾಗಾಗಿ ಆರ್‌ಟಿಐ ಕಾರ್ಯಕರ್ತ ನರಸಿಂಹ ಮೂರ್ತಿ ಅವರು ಜಯಲಲಿತಾ ಅವರ ವಸ್ತುಗಳ ವಿಲೇವಾರಿಗೆ ಕೈಗೊಂಡಿರುವ ಕ್ರಮದ ಮಾಹಿತಿ ನೀಡುವ ಸಂಬಂಧ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು.
ಯಾವ್ಯಾವ ವಸ್ತುಗಳು: 7040 ಗ್ರಾಂ ತೂಕದ 468 ಬಗೆಯ ಚಿನ್ನ ಹಾಗೂ ವಜ್ರಖಚಿತ ಆಭರಣಗಳು, 700 ಕೆಜಿ ತೂಕದ ಬೆಳ್ಳಿ ಆಭರಣಗಳು, 740 ದುಬಾರಿ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜೆರೇಟರ್, 10 ಟಿವಿ ಸೆಟ್ , 8 ವಿಸಿಆರ್, 1 ವಿಡಿಯೋ ಕ್ಯಾಮೆರಾ, 4 ಸಿಡಿ ಪ್ಲೇಯರ್, 2 ಆಡಿಯೋ ಡೆಕ್, 24 ಟೂ-ಇನ್ ಒನ್ ಟೇಪ್ ರೇಕಾರ್ಡರ್, 1040 ವಿಡಿಯೋ ಕ್ಯಾಸೆಟ್, 3 ಐರನ್ ಲಾಕರ್, 1,93,202 ರೂ. ನಗದು ಸೇರಿದಂತೆ ಹಲವು ವಸ್ತುಗಳು ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿತ್ತು












Click it and Unblock the Notifications