Channapatna BY-Election: ಚನ್ನಪಟ್ಟಣ ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ
ಬೆಂಗಳೂರು,ಅಕ್ಟೋಬರ್25: ರಾಜ್ಯದಲ್ಲಿ ಬೈ ಎಲೆಕ್ಷನ್ ಕಾವು ಜೋರಾಗಿದೆ. ಚನ್ನಪಟ್ಟಣ ಚುನಾವಣಾ ಅಖಾಡ ರಂಗೇರಿದ್ದು, ನಿಖಿಲ್ ಕುಮಾರಸ್ವಾಮಿ ವರ್ಸಸ್ ಸಿಪಿ ಯೋಗೇಶ್ವರ್ ಮಧ್ಯೆ ಬಿರುಸಿನ ಕದನ ನಡೆಯುತ್ತಿದೆ. ಗುರುವಾರ ಸಿ ಪಿ ಯೋಗೇಶ್ವರ್ ಕಾಂಗ್ರೆಸ್ನಿಂದ ನಾಮಪತ್ರ ಸಲ್ಲಿಕೆ ಮಾಡಿದ್ದರೆ ಇವತ್ತು ನಿಖಿಲ್ ಕುಮಾರಸ್ವಾಮಿ ನಾಮಿನೇಷನ್ ಫೈಲ್ ಮಾಡಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಜೆಡಿಎಸ್-ಬಿಜೆಪಿ ನಾಯಕರ ಸಮ್ಮುಖದಲ್ಲಿ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಇಂದು(ಶುಕ್ರವಾರ) ಚನ್ನಪಟ್ಟಣದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರ ಜೊತೆಗೆ ಬಳಿಕ ನಿಖಿಲ್ ಕುಮಾರಸ್ವಾಮಿ ಭರ್ಜರಿ ರೋಡ್ ಶೋ ನಡೆಸಿದ್ದು, ಬಳಿಕ ಚನ್ನಪಟ್ಟಣದ ಎನ್ ಡಿಎ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ ಪತ್ರ ಸಲ್ಲಿಕೆ ವೇಳೆ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್. ಅಶೋಕ್, ಡಿ.ವಿ.ಸದಾನಂದ ಗೌಡ ಸೇರಿದಂತೆ ಹಲವು ಬಿಜೆಪಿ-ಜೆಡಿಎಸ್ ನಾಯಕರು ಭಾಗಿಯಾಗಿದ್ದರು.

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯ NDA ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಬೆಂಗಳೂರಿನ ಜೆಪಿ ನಗರದಲ್ಲಿರೋ ಲಕ್ಷ್ಮೀ ವೆಂಕಟೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ. ಚನ್ನಪಟ್ಟಣ ಕೆಂಗಲ್ ಆಂಜನೇಯ ದೇವಸ್ಥಾನಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ ಮಾಡಿಸಿದ್ದಾರೆ. ಇನ್ನು ಮೊಮ್ಮಗನಿಗೆ ಒಳ್ಳೆಯದಾಗಲಿ ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಪ್ರಾರ್ಥನೆ ಸಲ್ಲಿಸಿದ್ದಾರೆ.
ಸಂಡೂರು ಅಭ್ಯರ್ಥಿ ನಾಮಪತ್ರ
ಸಂಡೂರಿನ ವಿಧಾನಸಭೆ ಉಪ ಚುನಾವಣೆಗೆ ಸಂಬಂಧಿಸಿ ರಾಜ್ಯ ಎಸ್‍ಟಿ ಮೋರ್ಚಾ ಅಧ್ಯಕ್ಷ ಮತ್ತು ಯುವ ಮುಖಂಡ ಬಂಗಾರು ಹನುಮಂತು ಅವರು ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ಉಪಸ್ಥಿತಿಯಲ್ಲಿ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮೊದಲು ಬೃಹತ್ ಮೆರವಣಿಗೆ ನಡೆಸಲಾಯಿತು. ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ, ಮಾಜಿ ಸಚಿವ ಜನಾರ್ದನ ರೆಡ್ಡಿ, ಹಿರಿಯ ಮುಖಂಡ ಸೋಮಶೇಖರ ರೆಡ್ಡಿ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಅಭ್ಯರ್ಥಿ ಬಂಗಾರು ಹನುಮಂತು, ಪಕ್ಷದ ರಾಜ್ಯ- ಜಿಲ್ಲಾ ಪ್ರಮುಖರು ಇದ್ದರು.
ಈ ವೇಳೆ ಬಿ ವೈ ವಿಜಯೇಂದ್ರ ಅವರು ಮಾತನಾಡಿ, ರಾಜ್ಯ ರಾಜಕೀಯದ ದಿಕ್ಸೂಚಿಯನ್ನು ಬದಲಿಸುವ ಶಕ್ತಿ ಈ 3 ಕ್ಷೇತ್ರಗಳ ಉಪ ಚುನಾವಣೆಗೆ ಇದೆ. ಶಿಗ್ಗಾವಿ, ಚನ್ನಪಟ್ಟಣ, ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಳು ರಾಜಕೀಯ ದಿಕ್ಕನ್ನು ಬದಲಿಸುವ ಶಕ್ತಿ ಹೊಂದಿವೆ. ರಾಜ್ಯದಲ್ಲಿ ರೈತರ ವಿರೋಧಿ ಸರಕಾರ ಇದೆ. ಬರಗಾಲ ಇದ್ದಾಗಲೂ ಈ ಸರಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸಿಲ್ಲ. ನೆರೆ ಇದ್ದರೂ ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಮೆಕ್ಕೆಜೋಳ, ಮೆಣಸಿನ ಕಾಯಿ, ಹತ್ತಿ ಬೆಳೆಗಾರರು ಕಂಗಾಲಾಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ರಾಜ್ಯ ಸರಕಾರ ಕೇಂದ್ರ ಸರಕಾರದ ಕಡೆ ಬೊಟ್ಟು ಮಾಡಿ ಕುಳಿತಿದೆಯೇ ವಿನಾ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಪ್ರಾಮಾಣಿಕತೆಯನ್ನು ತೋರಿಸುತ್ತಿಲ್ಲ. ಸಿದ್ದರಾಮಯ್ಯರದು ರೈತವಿರೋಧಿ, ಬಡವರ ವಿರೋಧಿ ಸರಕಾರ. ಮತ್ತೊಂದು ಕಡೆ ಎಸ್‍ಇಪಿ, ಟಿಎಸ್‍ಪಿ ಹಣವನ್ನು ಬೇರೆ ಬೇರೆ ಕಾರ್ಯಕ್ರಮಗಳಿಗೆ ವರ್ಗಾಯಿಸಿದ್ದಾರೆ. ಅಹಿಂದ ಹೆಸರು ಹೇಳಿ ಅಧಿಕಾರದ ಚುಕ್ಕಾಣಿ ಹಿಡಿದ ಸಿದ್ದರಾಮಯ್ಯನವರು ಪರಿಶಿಷ್ಟ ಜಾತಿ, ಪಂಗಡಗಳಿಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.
ಅಭಿವೃದ್ಧಿಯೇ ಆರಂಭವಾಗದ ಕಾರಣ ಶಾಸಕರು ತಲೆ ಎತ್ತಿಕೊಂಡು ಕ್ಷೇತ್ರದಲ್ಲಿ ಓಡಾಡಲು ಸಾಧ್ಯ ಆಗುತ್ತಿಲ್ಲ. ಈ ಸರಕಾರ ಬಂದ ಬಳಿಕ ಅನುದಾನ ಸಿಗುತ್ತಿಲ್ಲವೆಂದು ಸ್ವತಃ ಆರ್.ವಿ.ದೇಶಪಾಂಡೆ ಅವರಂಥ ಹಿರಿಯ ಶಾಸಕರು ಹೇಳಿಕೆ ಕೊಟ್ಟರು. ಕಾಂಗ್ರೆಸ್ ಪಕ್ಷದ ಶಾಸಕ ರಾಜು ಕಾಗೆಯವರು ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆಯ ಮಾತನಾಡಿದ್ದಾರೆ ಎಂದು ವಿವರಿಸಿದರು. ಸಿದ್ದರಾಮಯ್ಯನವರ ಸರಕಾರವು ಅಸ್ತಿತ್ವಕ್ಕೆ ಬಂದು ಒಂದೂಮುಕ್ಕಾಲು ವರ್ಷವಾಗಿದೆ. ಈಗಾಗಲೇ ಸಿದ್ದರಾಮಯ್ಯನವರ ಸರಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ದೊಡ್ಡ ಮಟ್ಟದಲ್ಲಿ ಸೃಷ್ಟಿಯಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬಂದ ಒಂದೂವರೆ ವರ್ಷದಲ್ಲಿ ಇದು ಪ್ರಮುಖ ಉಪ ಚುನಾವಣೆ. ಸರಕಾರ ಅಧಿಕಾರಕ್ಕೆ ಬಂದ 3 ವರ್ಷ, ನಾಲ್ಕು ವರ್ಷಗಳಾದಾಗ ಆಡಳಿತ ವಿರೋಧಿ ಅಲೆ ಕಾಣಿಸಿಕೊಳ್ಳುತ್ತದೆ; ಆದರೆ ರಾಜ್ಯದಲ್ಲಿ ಅತ್ಯಲ್ಪ ಅವಧಿಯಲ್ಲೇ ಅಂದರೆ ಒಂದೂವರೆ ವರ್ಷದಲ್ಲೇ ಆಡಳಿತ ವಿರೋಧಿ ಅಲೆ ಕಾಣಿಸಿಕೊಂಡಿದೆ ಎಂದು ತಿಳಿಸಿದರು.












Click it and Unblock the Notifications