ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆಗೆ ಜೆಡಿಎಸ್ ನಾಯಕರ ಒತ್ತಾಯ: ದಳಪತಿಗಳ ಲೆಕ್ಕಾಚಾರವೇನು?
ಮಂಡ್ಯ, ಮಾರ್ಚ್ 07: 2019 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿದ್ದ ಸಮಲತಾ ಹಾಗೂ ನಿಖಿಲ್ ಕುಮಾರಸ್ವಾಮಿ ನಡುವೆ ಸ್ಪರ್ಧೆ ಏರ್ಪಟ್ಟು, ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಗೆಲುವು ಸಾಧಿಸಿದ್ರು. ಆದರೆ, ಇದೀಗ ಮಂಡ್ಯ ಟಿಕೆಟ್ ಗಾಗಿ ಸುಮಲತಾ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ವಿಧಾನಸಭಾ ಚುಣಾವಣೆಯಲ್ಲಿ ಸೋಲು ಕಂಡ ಬಿಜೆಪಿ ಹಾಗೂ ಜೆಡಿಎಸ್ ಲೋಕಸಭಾ ಚುನಾವಣೆಯಲ್ಲಿ 28 ಲೋಕಸಭಾ ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಕಮಲ-ದಳ ನಾಯಕರು ಮೈತ್ರಿಯಾಗಿದ್ದು, 28 ಲೋಕಸಭಾ ಕ್ಷೇತ್ರಗಳ ಪೈಕಿ ಈಗಾಗಲೇ ದೆಹಲಿ ಹೈಕಮಾಂಡ್ ನಾಯಕರು ಹಾಗೂ ಜೆಡಿಎಸ್ ನಾಯಕರು ಚರ್ಚೆ ನಡೆದಿದ್ದು, ಜೆಡಿಎಸ್ ನಾಯಕರಿಗೆ 3 ಕ್ಷೇತ್ರಗಳು ನೀಡುವ ನಿಟ್ಟಿನಲ್ಲಿ ಬಿಜೆಪಿ ನಾಯಕರು ತಿರ್ಮಾನಿಸಿದ್ದು, ಮಂಡ್ಯ ಕ್ಷೇತ್ರ ದಳಪತಿಗಳ ಕೈ ಸೇರಲಿದೆ.

ಈಗಾಗಲೇ ಮಂಡ್ಯ ಕ್ಷೇತ್ರದ ಟಿಕೆಟ್ ಜೆಡಿಎಸ್ಗೆ ಫಿಕ್ಸ್ ಎಂದು ಹೇಳಲಾಗುತ್ತಿದ್ದರೂ ಹಾಲಿ ಸಂಸದೆ ಸುಮಲತಾ ಅವರು ಬಿಜೆಪಿ ಟಿಕೆಟ್ಗಾಗಿ ಪೈಪೋಟಿ ನಡೆಸುತ್ತಿದ್ದಾರೆ. ಈ ನಡುವೆ, ಮಂಡ್ಯದಿಂದ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡುವಂತೆ ಜೆಡಿಎಸ್ ನಾಯಕರ ಒತ್ತಾಯಗಳು ಕೇಳಿ ಬರುತ್ತಿವೆ.
ಬುಧವಾರ ರಾತ್ರಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ನಿವಾಸದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಶಾಸಕರು ಹಾಗೂ ಮುಖಂಡರು ಸಭೆ ನಡೆಸಿದ್ದು, ಈ ಸಭೆಯಲ್ಲೂ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್ ಡಿ ಕುಮಾರಸ್ವಾಮಿ ಅವರೇ ಈ ಬಾರಿ ಮಂಡ್ಯದಿಂದ ಕಣಕ್ಕಿಳಿಯುವಂತೆ ಜೆಡಿಎಸ್ ನಾಯಕರು ಒತ್ತಾಯಿಸಿದ್ದಾರೆ. ಕುಮಾರಸ್ವಾಮಿ ಅವರು ಸ್ಪರ್ಧೆಗೆ ಒಪ್ಪಲಿಲ್ಲ ಎಂದರೇ ನಿಖಿಲ್ ಕುಮಾರಸ್ವಾಮಿ ಅವರನ್ನ ಕಣಕ್ಕಿಳಿಸುವಂತೆ ಸಭೆಯಲ್ಲಿ ಮಾತುಗಳು ಕೇಳಿ ಬಂದಿವೆ.
ಇನ್ನೂ ಸ್ಪರ್ಧೆಗೆ ಒಪ್ಪದ ಕುಮಾರಸ್ವಾಮಿ ಸಭೆಯಲ್ಲಿ ನಾಯಕರಿಗೆ ಕಿವಿ ಮಾತು ಹೇಳಿದ್ದಾರೆ. ಅಭ್ಯರ್ಥಿ ಆಯ್ಕೆ ಸಂಬಂಧ ಎಲ್ಲಾ ತೊಡಕುಗಳನ್ನ ನಿವಾರಿಸುವ ಹಾಗೂ ಪಕ್ಷದ ನಾಯಕರ ನಡುವಿನ ಸಣ್ಣಪುಟ್ಟ ಭಿನ್ನಮತ ನಿವಾರಿಸುವ ಬಗ್ಗೆ ಚರ್ಚೆ ನಡೆಸಿದರು. ಎಲ್ಲಾ ನಾಯಕರ ಅಭಿಪ್ರಾಯ ಪಡೆದ ಕುಮಾರಸ್ವಾಮಿ, ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಒಗ್ಗಟ್ಟಾಗಿ ಕೆಲಸ ಮಾಡುವಂತೆ ಸೂಚನೆ ನೀಡಿದರು.
ಇನ್ನೂ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಕುರಿತು ಬಿಜೆಪಿ ನಾಯಕರ ಜೊತೆಗೆ ಚರ್ಚೆ ನಡೆಸಿ ತಿರ್ಮಾನ ತೆಗೆದುಕೊಳ್ಳುವ ನಿಟ್ಟಿನಲ್ಲಿ ಕುಮಾರಸ್ವಾಮಿ ಮುಂದಾಗಿದ್ದಾರೆ. ಬಿಜೆಪಿ ನಾಯಕರ ಜೊತೆಗಿನ ಮಾತುಕತೆ ಬಳಿಕ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಕುಮಾರಸ್ವಾಮಿ ಸಭೆಯಲ್ಲಿ ಹೇಳಿದ್ದಾರೆ. ಇನ್ನೂ ಪ್ರತಿ ಬಾರಿಯೂ ದೇವೇಗೌಡ್ರ ಕುಟುಂಬದವರಿಗೆ ಮಣೆ ಹಾಕುತ್ತಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಹೀಗಾಗಿ ಕಾರ್ಯಕರ್ತರನ್ನ ಹಾಗೂ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಮಂಡ್ಯ ಕ್ಷೇತ್ರದ ಅಭ್ಯರ್ಥಿ ಪಟ್ಟಿಯಲ್ಲಿ ಮಾಜಿ ಸಚಿವ ಪುಟ್ಟರಾಜು ಹೆಸರು ಮುಂಚೂಣಿಯಲ್ಲಿದೆ. ಮಂಡ್ಯದಿಂದ ಪಕ್ಷ ಮುಖಂಡನಿಗೆ ಟಿಕೆಟ್ ಕೊಟ್ಟಂತಾಗುತ್ತದೆ ಎನ್ನುವ ಲೆಕ್ಕಾಚಾರವನ್ನ ದಳಪತಿಗಳು ಹಾಕಿಕೊಂಡಿದ್ದಾರೆ ಎನ್ನಲಾಗಿದೆ.












Click it and Unblock the Notifications