HD Kumaraswamy: ಸ್ಪೀಕರ್ ಕಚೇರಿಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಹೆಚ್ ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಶಾಸಕರು
ಬೆಂಗಳೂರು, ಮೇ 24: ಕಳೆದ ಎರಡು ದಿನಗಳಿಂದ ನೂತನವಾಗಿ ಆಯ್ಕೆಯಾದ ಶಾಸಕರು ವಿಧಾನಸಭೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ್ದು, ಬುಧವಾರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಹಂಗಾಮಿ ಸ್ಪೀಕರ್ ಆರ್ ವಿ ದೇಶಪಾಂಡೆ ಅವರಿಂದ ವಿಧಾನ ಸಭೆಯ ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಸ್ವೀಕರ್ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ನ ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು. ಕಳೆದ 2 ದಿನಗಳಿಂದ ಅಧಿವೇಶನಕ್ಕೆ ಗೈರಾಗಿದ್ದ ಜೆಡಿಎಸ್ ನಾಯಕರು ಶುಭ ದಿನ, ಶುಭ ಗಳಿಗೆ ನೋಡಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಹೀಗಾಗಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಕುಮಾರಸ್ವಾಮಿ, ಹೆಚ್ಡಿ ರೇವಣ್ಣ, ಸ್ವರೂಪ್, ಶಾರದಾ ನಾಯಕ್, ಸಿ.ಬಿ.ಸುರೇಶ್ ಬಾಬು ಪ್ರಮಾಣವಚನ ಸ್ವೀಕರಿಸಿದರು.
ಇನ್ನೂ ಮಂಗಳವಾರ ಅಶುಭ ಎಂದು ಪರಿಗಣಿಸಿದ ಒಂಬತ್ತು ಶಾಸಕರು ಮಂಗಳವಾರ ಪ್ರಮಾಣ ವಚನ ಸ್ವೀಕಾರದ ಕಲಾಪಕ್ಕೆ ಗೈರಾಗಿದ್ದು, ಬುಧವಾರ ಜೆಡಿಎಸ್ ನ ಶಾಸಕರು ಸ್ವೀಕರ್ ಕಚೇರಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಅಲ್ಲದೇ ಬುಧವಾರ ನಡೆಯಲಿರುವ ಸ್ಪೀಕರ್ ಚುನಾವಣೆಯಲ್ಲಿ ಪ್ರಮಾಣ ವಚನ ಸ್ವೀಕರಿಸದ ಶಾಸಕರಿಗೆ ಮತದಾನ ಮಾಡಲು ಅವಕಾಶವಿಲ್ಲ. ಹೀಗಾಗಿ ಬುಧವಾರ ಹಲವು ಜನ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಹೆಚ್ ಡಿ ಕುಮಾರಸ್ವಾಮಿ ಅವಿರೋಧ ಆಯ್ಕೆ
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭೆಯಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲ 19 ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಭಾಗಿಯಾಗಿದ್ದರು.
ಕಳೆದ ವಿಧಾನಸಭೆ ಅವಧಿಯಲ್ಲೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರೇ ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕರಾಗಿ ಸದನದಲ್ಲಿ ಪಕ್ಷವನ್ನು ಮುನ್ನಡೆಸಿದ್ದರು. ವಿಧಾನಮಂಡಲದಲ್ಲಿ ಜನಪರವಾಗಿ, ವಿಷಯಾಧಾರಿತವಾಗಿ ಹೋರಾಟ ಮಾಡುವ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಪಕ್ಷವು ಚುನಾವಣೆಯಲ್ಲಿ ಸೋತಿದೆ. ಸೋತಿದೆ ಎಂದಾಕ್ಷಣ ಎದೆಗುಂದುವ ಅಗತ್ಯ ಇಲ್ಲ. ಇನ್ನೂ ಕೆಚ್ಚೆದೆಯಿಂದ ಪಕ್ಷವನ್ನು ಕಟ್ಟಬೇಕಿದೆ. ತಳಮಟ್ಟದಲ್ಲಿ ಸಂಘಟನೆಯನ್ನು ಬಲಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ಚುನಾಯಿತ ಶಾಸಕರು, ಸ್ಪರ್ಧೆ ಮಾಡಿದ್ದ ಎಲ್ಲಾ ಅಭ್ಯರ್ಥಿಗಳು ಕೆಲಸ ಮಾಡಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೇಳಿದರು.











Click it and Unblock the Notifications