ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ನೇಮಕ
ಬೆಂಗಳೂರು, ಜುಲೈ 19: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ವಿಭು ಬಖ್ರು ಅವರು ಇಂದು (ಜುಲೈ 19) ನೇಮಕಗೊಂಡರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರು ಪ್ರಮಾಣ ವಚನ ಬೋಧಿಸಿದರು. ಹಾಗಾದ್ರೆ ನೂತನ ಮುಖ್ಯ ನ್ಯಾಯಮೂರ್ತಿಗಳ ಹಿನ್ನೆಲೆ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಪಾಲ್ಗೊಂಡು, ನೂತನ ಮುಖ್ಯ ನ್ಯಾಯಮೂರ್ತಿಗಳಿಗೆ ಶುಭ ಕೋರಿದರು. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಭಾಪತಿಗಳಾದ ಬಸವರಾಜ ಹೊರಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿ ಆಗಿ ನ್ಯಾ.ವಿಭು ಬಖ್ರು ಅವರನ್ನು ಕೇಂದ್ರ ಸರ್ಕಾರ ಇತ್ತೀಚೆಗೆ ನೇಮಿಸಿ ಆದೇಶ ಹೊರಡಿಸಿತ್ತು. ಸಿಜೆ ಆಗಿದ್ದ ನ್ಯಾ.ಎನ್.ವಿ.ಅಂಜಾರಿಯಾ ಅವರಿಗೆ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ಬಡ್ತಿ ನೀಡಿದ ಹಿನ್ನೆಲೆ ಖಾಲಿ ಇದ್ದ ಸಿಜೆ ಹುದ್ದೆಗೆ ವಿಭು ಬಖ್ರು ಅವರನ್ನು ನೇಮಕ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ನಿರ್ಧರಿಸಿ, ಈ ಸಂಬಂಧ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಿತ್ತು.
ಅದರಂತೆಯೇ ಕಾನೂನು ಮತ್ತು ನ್ಯಾಯ ಇಲಾಖೆ ಹೊಸ ಸಿಜೆಯನ್ನು ನೇಮಕ ಮಾಡಿ ಜುಲೈ 14 ರಂದು ಮಂಗಳವಾರ ಆದೇಶ ಹೊರಡಿಸಿತ್ತು. ಇದೀಗ ಇಂದು ಅವರು ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ನ್ಯಾ.ವಿಭು ಬಖ್ರು ಅವರು 1966ರಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿ ಜನಿಸಿದರು. ದೆಹಲಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದು, 1987ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದಿದ್ದಾರೆ. 1989ರಲ್ಲಿ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಆಗಿಯೂ ಅರ್ಹತೆ ಪಡೆದಿದ್ದರು. ನಂತರ 1990ರಲ್ಲಿಕಾನೂನು ಪದವಿ ಪಡೆದು, ಅದೇ ವರ್ಷ ದೆಹಲಿ ವಕೀಲರ ಪರಿಷತ್‌ನಲ್ಲಿ ವಕೀಲರಾಗಿ ನೋಂದಣಿ ಮಾಡಿಸಿದ್ದರು.
ನ್ಯಾ.ಭಕ್ರು ಅವರು ವಕೀಲರಾಗಿದ್ದ ಸಮಯದಲ್ಲಿ ಸುಪ್ರೀಂ ಕೋರ್ಟ್, ದೆಹಲಿ ಹೈಕೋರ್ಟ್, ಕಂಪನಿ ಕಾನೂನು ಮಂಡಳಿ ಮತ್ತು ಇತರೆ ನ್ಯಾಯ ಮಂಡಳಿಗಳಲ್ಲಿ ವಕೀಲಿಕೆ ಮಾಡಿದ್ದಾರೆ. 2011ರಲ್ಲಿ ಹಿರಿಯ ವಕೀಲರಾಗಿ ಅವರು ಪದೋನ್ನತಿ ಪಡೆದಿದ್ದರು. 2013ರ ಏಪ್ರಿಲ್ 17ರಂದು ದೆಹಲಿ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡ ಅವರು 2015ರ ಮಾರ್ಚ್ 18ರಂದು ನ್ಯಾಯಮೂರ್ತಿ ಆಗಿ ನೇಮಕಗೊಂಡರರು.
ದಿಲ್ಲಿ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸುತ್ತಿದ್ದ ವಿಭು ಬಖ್ರು ಅವರನ್ನು 2024ರ ಡಿಸೆಂಬರ್ 5ರಿಂದ 2025ರ ಜನವರಿ 21ರ ವರೆಗೆ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು. ಬಳಿಕ ಅವರನ್ನು ಕರ್ನಾಟಕ ಹೈಕೋರ್ಟ್‌ಗೆ ವರ್ಗಾಹಿಸಲಾಗಿತ್ತು.












Click it and Unblock the Notifications