Kalyana Karnataka: ಯಾವುದೇ ಕಾರಣಕ್ಕೂ ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ
ಯಾವುದೇ ಕಾರಣಕ್ಕೂ ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯವಾಗುವುದಕ್ಕೆ ಬಿಡುವುದಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಕಟಿಬದ್ಧವಾಗಿದೆ. ಈ ಭಾಗಕ್ಕೆ ಸಂವಿಧಾನಬದ್ಧವಾಗಿ ದೊರೆತಿರುವ 371ಜೆ ಮೀಸಲಾತಿ ಹಾಗೂ ವಿಶೇಷ ಸೌಲಭ್ಯಗಳ ಸಮರ್ಪಕ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಯಾವುದೇ ಕಾರಣಕ್ಕೂ ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.

ಕಲಬುರಗಿಯ ಶರಣಬಸವ ವಿಶ್ವವಿದ್ಯಾಲಯದ ಪೂಜ್ಯ ದೊಡ್ಡಪ್ಪ ಅಪ್ಪ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಆಯೋಜಿಸಿದ್ದ 371ಜೆ ಕಾಯ್ದೆ ಅನುಷ್ಠಾನ ಕುರಿತ ಸರಣಿ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದ್ದಾರೆ.
2009ರಲ್ಲಿ ಇದೇ ಎನ್.ವಿ. ಮೈದಾನದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ನಮ್ಮ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು, ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಮೀಸಲಾತಿ ಕಲ್ಪಿಸುವುದಾಗಿ ಘೋಷಿಸಿದ್ದರು. ಅದರಂತೆ, ಡಾ. ಮಲ್ಲಿಕಾರ್ಜುನ ಖರ್ಗೆ ಅವರ ರಾಜಕೀಯ ಇಚ್ಛಾಶಕ್ತಿ ಮತ್ತು ನಿರಂತರ ಪ್ರಯತ್ನಗಳ ಫಲವಾಗಿ, ಸರ್ವಪಕ್ಷಗಳ ನಾಯಕರ ಮನವೊಲಿಸಿ, ಯಾವುದೇ ವಿರೋಧವಿಲ್ಲದೆ 371ಜೆ ಕಾಯ್ದೆಯನ್ನು ಸಂವಿಧಾನಬದ್ಧವಾಗಿ ಜಾರಿಗೆ ತರಲಾಯಿತು. ಕೊಟ್ಟ ಮಾತಿನಂತೆ ನಮ್ಮ ಪಕ್ಷ ನಡೆದುಕೊಂಡಿದೆ; ಮುಂದೆಯೂ ಇದೇ ಬದ್ಧತೆಯಿಂದ ನಡೆಯಲಿದೆ.
ಸುಮಾರು 1.20 ಲಕ್ಷ ಕುಟುಂಬಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ, ಜೊತೆಗೆ ಕಲ್ಯಾಣ ಕರ್ನಾಟಕದ ಮೂಲಸೌಕರ್ಯ ಅಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿ ಅನುದಾನಕ್ಕೆ ದಾರಿ ಮಾಡಿಕೊಟ್ಟಿರುವ 371ಜೆ ಕಾಯ್ದೆಯ ಜಾರಿಗೆ ಡಾ. ಮಲ್ಲಿಕಾರ್ಜುನ ಖರ್ಗೆ ಸಾಹೇಬರ ಕೊಡುಗೆ ಐತಿಹಾಸಿಕವಾದುದು. ಪಂಚ ಗ್ಯಾರಂಟಿಗಳಿಗೂ ಮುನ್ನವೇ ಕಲ್ಯಾಣ ಕರ್ನಾಟಕದ ಜನರಿಗೆ ಶಿಕ್ಷಣ ಮತ್ತು ಉದ್ಯೋಗದ ಅವಕಾಶಗಳ ಗ್ಯಾರಂಟಿಯನ್ನು ಕಲ್ಪಿಸುವಲ್ಲಿ ಅವರ ಪಾತ್ರವನ್ನು ಯಾರೂ ಮರೆಯಬಾರದು.
371ಜೆ ಕಾಯ್ದೆಯ ಆಶಯ ಮತ್ತು ಅದರ ಸೌಲಭ್ಯಗಳು ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ತಲುಪಬೇಕು. ಈ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಆಯೋಜಿಸಿರುವ ವಿಚಾರ ಸಂಕಿರಣಗಳ ಸರಣಿಯನ್ನು ಪ್ರದೇಶದ ಇತರೆ ಜಿಲ್ಲೆಗಳಿಗೂ ವಿಸ್ತರಿಸಿ, ಜನರಲ್ಲಿ ಮತ್ತಷ್ಟು ಅರಿವು ಮೂಡಿಸಬೇಕು. ಕಲ್ಯಾಣ ಕರ್ನಾಟಕ ಭಾಗವು ತ್ವರಿತಗತಿಯಲ್ಲಿ ಆರ್ಥಿಕ ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಎಕನಾಮಿಕ್ ಮಿಷನ್ ರೂಪಿಸಲಾಗುತ್ತಿದೆ. LEAP ಯೋಜನೆಯಡಿ ಕಲಬುರಗಿಯಲ್ಲಿಯೇ Growth Lab ಸ್ಥಾಪಿಸಲಾಗುತ್ತಿದೆ. ಇದರ ಜೊತೆಗೆ ಗ್ಲೋಬಲ್ ಕ್ಯಾಪಬಿಲಿಟಿ ಸೆಂಟರ್‌ಗಳು ಹಾಗೂ ಐಟಿ ಪಾರ್ಕ್‌ಗಳ ಮೂಲಕ ಉದ್ಯೋಗ, ಹೂಡಿಕೆ ಮತ್ತು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಹೊಸ ಅವಕಾಶಗಳನ್ನು ಸೃಷ್ಟಿಸಲಾಗುತ್ತಿದೆ.
ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ, ಯುವಜನರಿಗೆ ಅವಕಾಶ, ಉದ್ಯೋಗ ಸೃಷ್ಟಿ ಹಾಗೂ ಈ ಭಾಗದ ಜನರ ಬದುಕಿನಲ್ಲಿ ಗುಣಾತ್ಮಕ ಬದಲಾವಣೆ ತರುವುದು ನಮ್ಮ ಗ್ಯಾರಂಟಿ ಸರ್ಕಾರದ ಆದ್ಯತೆಯಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.
'79ನೇ ಕಲ್ಯಾಣ ಕರ್ನಾಟಕ ಉತ್ಸವ'
ಕಲ್ಯಾಣ ಕರ್ನಾಟಕದ ಸಮಸ್ತ ಜನತೆಗೆ '79ನೇ ಕಲ್ಯಾಣ ಕರ್ನಾಟಕ ಉತ್ಸವ'ದ ಹಾರ್ದಿಕ ಶುಭಾಶಯಗಳು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಶುಭಕೋರಿದ್ದಾರೆ. ಹೈದರಾಬಾದ್ ನಿಜಾಮರ ಆಳ್ವಿಕೆಯಿಂದ ವಿಮೋಚನೆ ಪಡೆದು, ಭಾರತದ ಒಕ್ಕೂಟದೊಂದಿಗೆ ಸೇರುವಲ್ಲಿ ಮಹತ್ವದ ಪಾತ್ರ ವಹಿಸಿದ ಹಾಗೂ ಇದಕ್ಕಾಗಿ ಶ್ರಮಿಸಿದ ಎಲ್ಲಾ ಮಹನೀಯರಿಗೆ ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ.
ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದ ಇತಿಹಾಸವನ್ನು ಸ್ಮರಿಸುವುದರ ಜೊತೆಗೆ, ಕಲ್ಯಾಣ ಕರ್ನಾಟಕದ ಉಜ್ವಲ ಭವಿಷ್ಯವನ್ನು ನಿರ್ಮಿಸುವ ಸಂಕಲ್ಪವನ್ನು ಮತ್ತಷ್ಟು ಗಟ್ಟಿಗೊಳಿಸುವ ದಿನವಿದು. ಈ ಭಾಗದ ಜನರ ಆಶಯಗಳು, ಕನಸುಗಳು ಮತ್ತು ಅಗತ್ಯಗಳಿಗೆ ಸ್ಪಂದಿಸುವ ಮೂಲಕ ಸಮಗ್ರ ಅಭಿವೃದ್ಧಿಗೆ ವೇಗ ನೀಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಕಲ್ಯಾಣ ಕರ್ನಾಟಕದ ಜನರ ಶ್ರೇಯೋಭಿವೃದ್ಧಿ ಹಾಗೂ ಈ ಭಾಗದ ಸಮಗ್ರ ಅಭಿವೃದ್ಧಿಗಾಗಿ ನಾವೆಲ್ಲರೂ ಒಗ್ಗಟ್ಟಾಗಿ ಕಾರ್ಯನಿರ್ವಹಿಸೋಣ. ನಮ್ಮ ಕಲ್ಯಾಣ ಕರ್ನಾಟಕವನ್ನು ಅಭಿವೃದ್ಧಿ ಮತ್ತು ಪ್ರಗತಿಯ ಪಥದಲ್ಲಿ ಮತ್ತಷ್ಟು ಮುನ್ನಡೆಸೋಣ ಎಂದಿದ್ದಾರೆ.


Click it and Unblock the Notifications
