ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಕಾಂಗ್ರೆಸ್‌ನಿಂದ ಅಮಾನತು
ಬೆಂಗಳೂರು, ಜನವರಿ 21 : ಕಂಪ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಜೆ.ಎನ್.ಗಣೇಶ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪವನ್ನು ಜೆ.ಎನ್.ಗಣೇಶ್ ಎದುರಿಸುತ್ತಿದ್ದಾರೆ.
ಸೋಮವಾರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಜೆ.ಎನ್.ಗಣೇಶ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಶಾಸಕ ಆನಂದ್ ಸಿಂಗ್ ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶನಿವಾರ ರಾತ್ರಿ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಮತ್ತು ಆನಂದ್ ಸಿಂಗ್ ನಡುವೆ ಈಗಲ್ಟನ್ ರೆಸಾರ್ಟ್‌ನಲ್ಲಿ ಹೊಡೆದಾಟ ನಡೆದಿತ್ತು. ಭಾನುವಾರ ಬೆಳಗ್ಗೆ ಆನಂದ್ ಸಿಂಗ್ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶಾಸಕರ ನಡುವಿನ ಗಲಾಟೆಯನ್ನು ಕಾಂಗ್ರೆಸ್ ಪಕ್ಷ ಗಂಭೀರವಾಗಿ ಪರಿಗಣಿಸಿತ್ತು. ಪ್ರತಿಪಕ್ಷ ಬಿಜೆಪಿ ಸಹ ಈ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕರು ವಿರುದ್ಧ ಟೀಕೆಗಳನ್ನು ಮಾಡಿದ್ದರು. ಈಗ ಕಾಂಗ್ರೆಸ್ ಶಾಸಕರನ್ನು ಅಮಾನತು ಮಾಡಿದೆ.

ಅಮಾನತಿಗೆ ಕಾರಣಗಳು
19/1/2019ರಂದು ಈಗಲ್ಟನ್ ರೆಸಾರ್ಟ್‌ನಲ್ಲಿ ನಡೆದಿರುವ ಅಹಿತಕರ ಘಟನೆ ಬಗ್ಗೆ ಕಾಂಗ್ರೆಸ್ ಪಕ್ಷದ ವರಿಷ್ಠರು ಪ್ರಾಥಮಿಕ ವಿಚಾರಣೆಯನ್ನು ನಡೆಸಿ ಕೂಲಂಕುಷವಾಗಿ ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ಈ ಬಗ್ಗೆ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಅವರ ಜೊತೆ ಮಾತನಾಡಿ ಘಟನೆಯ ವಿವರವನ್ನು ಪಡೆದುಕೊಳ್ಳಲಾಗಿದೆ.

ತಕ್ಷಣದಿಂದಲೇ ಅಮಾನತು
ಘಟನೆ ಬಗ್ಗೆ ಅತ್ಯಂತ ಗಂಭೀರ ಆರೋಪಗಳನ್ನು ಮಾಡಿರುವ ಕಾರಣ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಆದೇಶದ ಮೇರೆಗೆ ಜೆ.ಎನ್.ಗಣೇಶ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ.

ಪಕ್ಷದಿಂದ ಸಮಿತಿ ರಚನೆ
ಪ್ರಕರಣದ ಬಗ್ಗೆ ತನಿಖೆ ನಡೆಸಲು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣ ಬೈರೇಗೌಡ ಅವರು ಸಮಿತಿಯಲ್ಲಿದ್ದಾರೆ. ಈ ಸಮಿತಿಯೂ ಶೀಘ್ರವಾಗಿ ವಿಚಾರಣೆ ನಡೆಸಿ ವರದಿಯನ್ನು ಕೆಪಿಸಿಸಿಗೆ ಸಲ್ಲಿಸಲಿದೆ.

ಕಂಪ್ಲಿ ಶಾಸಕ ಜೆ.ಎನ್.ಗಣೇಶ್
ಜೆ.ಎನ್.ಗಣೇಶ್ ಅವರು 2018ರ ವಿಧಾನಸಭೆ ಚುನಾವಣೆಯಲ್ಲಿ 80592 ಮತಗಳನ್ನು ಪಡೆದು ಕಂಪ್ಲಿ ಕ್ಷೇತ್ರದಲ್ಲಿ ಜಯಗಳಿಸಿದ್ದರು. ಆಪರೇಷನ್ ಕಮಲಕ್ಕೆ ಒಳಗಾಗಲಿದ್ದಾರೆ ಎಂಬ ಸುದ್ದಿಯೂ ಹಬ್ಬಿತ್ತು. ಎರಡು ದಿನ ಕಾಂಗ್ರೆಸ್ ನಾಯಕರ ಸಂಪರ್ಕಕ್ಕೆ ಸಿಗದ ಅವರು ಬಳಿಕ ದಿಢೀರ್ ಆಗಿ ಪ್ರತ್ಯಕ್ಷರಾಗಿದ್ದರು.

ಆನಂದ್ ಸಿಂಗ್ ಹೇಗಿದ್ದಾರೆ?
ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕಣ್ಣು ಮತ್ತು ಮುಖ ಊದಿಕೊಂಡಿದೆ. ಹಲ್ಲೆಯಿಂದಾಗಿ ಕಣ್ಣಿಗೆ ಭಾರಿ ಪೆಟ್ಟಾಗಿರುವ ಸಾಧ್ಯತೆ ಇದೆ.












Click it and Unblock the Notifications