ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ: ಸಿದ್ದರಾಮಾನಂದಪುರಿ ಮಹಾಸ್ವಾಮಿ ಇನ್ನಿಲ್ಲ
ರಾಯಚೂರು: ಇಲ್ಲಿನ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ತಿಂಥಣಿ ಬ್ರಿಜ್ ಶಾಖಾ ಮಠದ ಪೀಠಾಧಿಪತಿಗಳಾಗಿದ್ದ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು (53) ಗುರುವಾರ ಹೃದಾಯಘಾತದಿಂದ ದೈವಧೀನರಾಗಿದ್ದಾರೆ. ಸ್ವಾಮೀಜಿಯವರು ಶಾಲಾ ಮಕ್ಕಳಿಗೆ ಉಚಿತ ದಾಸೋಹದ ವ್ಯವಸ್ಥೆ, ಕನಕಗುರು ಪೀಠದಲ್ಲಿ ಸಾಮೂಹಿಕ ವಿವಾಹ, ಆರೋಗ್ಯ ಶಿಬಿರ ಹಾಗೂ ರಕ್ತದಾನ ಶಿಬಿರ ಆಯೋಜನೆ ಸೇರಿದಂತೆ ಸದಾ ಜನಪರ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಅವರಿಗೆ ಅಪಾರ ಭಕ್ತರಿದ್ದಾರೆ.
ಕರ್ನಾಟಕದ ಗಣ್ಯರು, ಮಠಾಧೀಶರು ಸೇರಿದಂತೆ ಹಲವರು ಮಹಾಸ್ವಾಮಿಗಳ ದೈವ ಸಂಕಲ್ಪಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ. ಗುರುವಾರ ಸಂಜೆ 5 ಗಂಟೆಗೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್ ಮಠದ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಲಿವೆ. ಹಾಲುಮತ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಲಿದೆ ಎಂದು ಹೇಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾ ಮಠ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ದೈವಾಧೀನರಾದ ಸುದ್ದಿ ನೋವುಂಟುಮಾಡಿದೆ. ಧಾರ್ಮಿಕ ಕಾರ್ಯಗಳ ಜೊತೆಗೆ ಸಮಾಜದ ಏಳಿಗೆಯ ಬಗ್ಗೆ ಅಪಾರ ಕಾಳಜಿ, ಶ್ರದ್ಧೆ ಹೊಂದಿದ್ದ ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ. ಶ್ರೀಗಳ ದಿವ್ಯಾತ್ಮಕ್ಕೆ ಚಿರಶಾಂತಿ ದೊರಕಲಿ, ಶ್ರೀ ಮಠದ ಭಕ್ತಾದಿಗಳು ಹಾಗೂ ಅಪಾರ ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದ ಶಾಖಾ ಮಠ, ತಿಂಥಿಣಿ ಬ್ರಿಜ್-ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ದೈವಾಧೀನರಾದ ಸುದ್ದಿ ದುಃಖ ಉಂಟು ಮಾಡಿದೆ. ಧಾರ್ಮಿಕ, ಆಧ್ಯಾತ್ಮಿಕ ಮಾರ್ಗದರ್ಶನದ ಜೊತೆಗೆ ಅನೇಕ ಸಮಾಜಮುಖಿ ಸೇವಾಕಾರ್ಯಗಳಿಗೆ ಅಪಾರ ಕೊಡುಗೆ ನೀಡಿದ ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ. ಅವರ ದಿವ್ಯಾತ್ಮಕ್ಕೆ ಚಿರಶಾಂತಿ ಲಭಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಅಗಲಿದ ಕಾಗಿನೆಲೆ ಕನಕ ಪೀಠದ ಸ್ವಾಮೀಜಿಗೆ ನಮನ. ದೇವದುರ್ಗ ತಿಂಥಣಿಯ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಅವರು ವಿಧಿವಶರಾಗಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ. ಸ್ವಾಮೀಜಿಯವರು ಶಾಲಾ ಮಕ್ಕಳಿಗೆ ಉಚಿತ ದಾಸೋಹದ ವ್ಯವಸ್ಥೆ, ಕನಕಗುರು ಪೀಠದಲ್ಲಿ ಸಾಮೂಹಿಕ ವಿವಾಹ, ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಆಯೋಜನೆ ಸೇರಿದಂತೆ ಸದಾ ಜನಪರ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
ಇದೀಗ ಸ್ವಾಮೀಜಿಯವರು ಅಪಾರ ಸಂಖ್ಯೆಯ ಭಕ್ತರನ್ನು ಅಗಲಿದ್ದಾರೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಭಕ್ತರಿಗೆ ಈ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.












Click it and Unblock the Notifications