Government Employee: ಆರೋಗ್ಯ ಸಂಜೀವಿನಿ ಯೋಜನೆ, ಸರ್ಕಾರಿ ನೌಕರರಿಗೆ ಸಿಹಿಸುದ್ದಿ
ಬೆಂಗಳೂರು, ಅಕ್ಟೋಬರ್ 01: 7ನೇ ವೇತನ ಆಯೋಗದ ಶಿಫಾರಸು ಜಾರಿ ಬಳಿಕ ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನ. ಈ ನಿಟ್ಟಿನಲ್ಲಿ ಈಗ ಸರ್ಕಾರ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ಅನುಕೂಲ ಮಾಡಿಕೊಡುವ ಯೋಜನೆ ಇದಾಗಿದೆ. ಯೋಜನೆ ಅನುಷ್ಠಾನಗೊಳಿಸಲು ಸರ್ಕಾರ ವಿವಿಧ ಸಮಿತಿಗಳನ್ನು ರಚನೆ ಮಾಡಿದೆ.
ಈ ಕುರಿತು ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ. ನಾಗರತ್ನ ವಿ. ಪಾಟಿಲ್ ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವಾ ನಿಯಮಗಳು-2) ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನೂತನ ' ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ'ಯನ್ನು ಅನುಷ್ಠಾನಗೊಳಿಸಲು ವಿವಿಧ ಸಮಿತಿಗಳನ್ನು ರಚಿಸುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು 'ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ' ಎಂಬ ನೂತನ ಯೋಜನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮುಖಾಂತರ ಅನುಷ್ಠಾನಗೊಳಿಸಲು ಸರ್ಕಾರವು ನಿರ್ಧರಿಸಿ, ಸರ್ಕಾರದ ಆದೇಶಗಳಲ್ಲಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಕೆಲವು ಕಾರ್ಯನೀತಿ ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದೆ.
ಸರ್ಕಾರದ ಆದೇಶ ದಿನಾಂಕ 05.09.2022ರಲ್ಲಿ ಯೋಜನೆಯ ನಿರ್ವಹಣೆಗಾಗಿ ವಿವಿಧ ಸಮಿತಿಗಳ ರಚನೆ ಹಾಗೂ ಅವುಗಳ ಅಧಿಕಾರ ಮತ್ತು ನಿರ್ವಹಿಸಬೇಕಾದ ವಿಷಯಗಳ ಬಗ್ಗೆ ಪ್ರತ್ಯೇಕ ಆದೇಶ ಹೊರಡಿಸುವುದಾಗಿ ತಿಳಿಸಲಾಗಿದೆ. ಕಾರ್ಯಕಾರಿ ನಿರ್ದೇಶಕರು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಇವರು ಸರ್ಕಾರಕ್ಕೆ ಸಲ್ಲಿಸಿದ ಪ್ರಸ್ತಾವನೆಗಳಲ್ಲಿ ಕೆಎಎಸ್‌ಎಸ್ ಯೋಜನೆಯ ನಿರ್ವಹಣೆಗಾಗಿ ಕೆಲವು ಸಮಿತಿಗಳನ್ನು ರಚಿಸಿ ಆದೇಶ ಹೊರಡಿಸಲು ಕೋರಿರುತ್ತಾರೆ ಎಂದು ಹೇಳಿದೆ.
ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಸುಗುಮವಾಗಿ, ಪರಿಣಾಮಕಾರಿಯಾಗಿ ಹಾಗೂ ಸುವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲು ವಿವಿಧ ಸಮಿತಿಗಳನ್ನು ಅವುಗಳ ಸಂಯೋಜನೆ ಹಾಗೂ ಜವಾಬ್ದಾರಿಗಳನ್ನು ನಿಗದಿಪಡಿಸಿ ಆದೇಶಿಸಬೇಕಾಗಿರುವುದರಿಂದ ಕಾರ್ಯಕಾರಿ ನಿರ್ದೇಶಕರು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಇವರು ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಈ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.
ಯಾವ-ಯಾವ ಸಮಿತಿಗಳು: ಪ್ರಸ್ತಾವನೆಯಲ್ಲಿ ವಿವರಿಸಿದಂತೆ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಒದಗಿಸಲು ರೂಪಿಸಿರುವ 'ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ' ಪರಿಣಾಮಕಾರಿ ಹಾಗೂ ಸುವ್ಯವಸ್ಥಿತವಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಸರ್ಕಾರವು ಈ ಕೆಳಕಂಡ ವಿವಿಧ ಸಮಿತಿಗಳನ್ನು ರಚಿಸಿ ಆದೇಶಿಸಿದೆ ಎಂದು ಹೇಳಿದೆ.
* KASS ಉನ್ನತ ಮಟ್ಟದ ಕಾರ್ಯನೀತಿ ಸಮಿತಿ
* KASS ತಜ್ಞರ ಸಲಹಾ ಸಮಿತಿ
* ರಾಜ್ಯ ಮಟ್ಟದ KASS ನೋಂದಾವಣೆ, ಶಿಸ್ತು ಮತ್ತು ಕುಂದು ಕೊರತೆಗಳ ನಿವಾರಣಾ ಸಮಿತಿ
* ಜಿಲ್ಲಾ ಮಟ್ಟದ KASS ನೋಂದಾವಣೆ, ಶಿಸ್ತು ಮತ್ತು ಕುಂದು ಕೊರತೆಗಳ ನಿವಾರಣಾ ಸಮಿತಿ
ಈ ಸಮಿತಿಗಳ ಸಂಯೋಜನೆ, ಪ್ರಕಾರ್ಯಗಳು ಮತ್ತು ಜವಾಬ್ದಾರಿಗಳನ್ನು ಪ್ರತ್ಯೇಕವಾಗಿ ವಿವರಿಸಲಾಗಿದೆ. ಸಮಿತಿಯ ಪ್ರಕಾರ್ಯಗಳಿಗೆ ಒಳಪಡುವ ವಿಷಯಗಳಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಸಲ್ಲಿಸುವ ಪ್ರಸ್ತಾವನೆಗಳನ್ನು ಸದರಿ ಸಮಿತಿಗಳ ಮೂಲಕ ಪರಿಶೀಲನೆಗೊಳಪಡಿಸಿದ ನಂತರದಲ್ಲಿಯೇ ಸರ್ಕಾರಕ್ಕೆ ಸಲ್ಲಿಸುವಂತೆ ಕಾರ್ಯಕಾರಿ ನಿರ್ದೇಶಕರು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಬೆಂಗಳೂರು ಇವರಿಗೆ ಸೂಚನೆಗಳನ್ನು ನೀಡಿ ಆದೇಶಿಸಲಾಗಿದೆ.












Click it and Unblock the Notifications