ಸದನದಲ್ಲಿ ತೊಗಾಡಿಯಾ, ಮೀಟರ್ ಗದ್ದಲ!
ಬೆಂಗಳೂರು, ಫೆ.4 : ಪ್ರವೀಣ್ ತೊಗಾಡಿಯಾಗೆ ನಿಷೇಧ, ವಿದ್ಯುತ್ ಮೀಟರ್ ಖರೀದಿ ವಿಚಾರದ ಬಗ್ಗೆ ಇಂದು ವಿಧಾನಸಭೆ, ವಿಧಾನಪರಿಷತ್ತಿನಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಬಿಸಿ-ಬಿಸಿ ಚರ್ಚೆ ನಡೆಯಿತು. ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಲು ಆರಂಭಿಸಿದಾಗ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಸದನವನ್ನು ಗುರುವಾರಕ್ಕೆ ಮುಂದೂಡಿದರು.
ಬುಧವಾರದ ಕಲಾಪ ಆರಂಭವಾಗುತ್ತಿದ್ದಂತೆ ವಿಧಾನಸಭೆಯಲ್ಲಿ ವಿಶ್ವ ಹಿಂದೂ ಪರಿಷತ್ ನಾಯಕ ಪ್ರವೀಣ್ ತೊಗಾಡಿಯಾ ಅವರು ಬೆಂಗಳೂರು ಪ್ರವೇಶಿಸುವುದನ್ನು ನಿಷೇಧಿಸಿರುವ ವಿಷಯವನ್ನು ಬಿಜೆಪಿ ಸದಸ್ಯರು ಪ್ರಸ್ತಾಪಿಸಿದರು. ನಿಷೇಧ ವಾಪಸ್ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. [ತೊಗಾಡಿಯಾಗೆ ನಿಷೇಧ, ಮಂಗಳೂರಲ್ಲಿ ಪ್ರತಿಭಟನೆ]

ಈ ಕುರಿತು ನಿಲುವಳಿ ಸೂಚನೆ ಮಂಡಿಸಲು ಅವಕಾಶ ನೀಡಬೇಕು ಎಂದು ಬಿಜೆಪಿ ಸದಸ್ಯರು ಪಟ್ಟು ಹಿಡಿದು ಗದ್ದಲ ಆರಂಭಿಸಿದರು. ಸದನದ ಬಾವಿಗಿಳಿದು ಸದಸ್ಯರು ಧರಣಿ ನಡೆಸಿದ್ದರಿಂದ ಕಲಾಪವನ್ನು ಮೂರು ಬಾರಿ ಮುಂದೂಡಲಾಯಿತು. ಮಧ್ಯಾಹ್ನವೂ ಧರಣಿ ನಡೆಸಿದ್ದರಿಂದ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಯಿತು. [ವಿಧಾನಸಭೆ ಅಧಿವೇಶನ : ಮಂಗಳವಾರದ ಹೈಲೈಟ್ಸ್]
ಅಭಿವೃದ್ಧಿಗೆ ಹಣದ ಕೊರತೆ ಇಲ್ಲ : ರಾಜ್ಯದಲ್ಲಿ ಪ್ರವಾಸೋದ್ಯಮ ಕ್ಷೇತ್ರಗಳ ಅಭಿವೃದ್ಧಿಗೆ ಹಣದ ಕೊರತೆ ಇಲ್ಲ ಎಂದು ಪ್ರವಾಸೋದ್ಯಮ ಸಚಿವ ಆರ್.ವಿ. ದೇಶಪಾಂಡೆ ಅವರು ವಿಧಾನಸಭೆಯಲ್ಲಿ ಹೇಳಿದ್ದಾರೆ. ಕಾಂಗ್ರೆಸ್‌ನ ಶಿವಾನಂದ ಎಸ್. ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜಾಪುರದ ಬಸವನ ಬಾಗೇವಾಡಿ ಕ್ಷೇತ್ರದಲ್ಲಿ ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ : ರಾಜ್ಯದಲ್ಲಿ ಹಂತ ಹಂತವಾಗಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ವಿಧಾನಸಭೆಯಲ್ಲಿ ಹೇಳಿದ್ದಾರೆ. ಕಾಂಗ್ರೆಸ್‌ನ ಎನ್.ಎ. ಹ್ಯಾರೀಸ್ ಪ್ರಶ್ನೆಗೆ ಉತ್ತರಿಸಿದ ಅವರು, 2009ರಲ್ಲಿ ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದೆ. ರಾಜ್ಯದಲ್ಲಿ ಇದನ್ನು ಹಂತ-ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ಪರಿಷತ್ತಿನಲ್ಲಿ ಸೊಳ್ಳೆ, ಇಲಿ ಕಾಟ : ವಿಧಾನಪರಿಷತ್ತಿನಲ್ಲಿ ಸೊಳ್ಳೆ ಮತ್ತು ಇಲಿಗಳ ಕಾಟ ಹೆಚ್ಚಾಗಿದೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಸವರಾಜ ಹೊರಟ್ಟಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರಿಗೆ ಮನವಿ ಮಾಡಿದರು. ಈ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಶಂಕರಮೂರ್ತಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರಿಷತ್ತಿನಲ್ಲಿ ಮೀಟರ್ ಗದ್ದಲ : ವಿಧಾನಪರಿಷತ್ತಿನಲ್ಲಿ ಟೆಂಡರ್ ಕರೆಯದೆ ವಿದ್ಯುತ್ ಇಲಾಖೆಯಲ್ಲಿ 180 ಕೋಟಿ ರೂ. ವೆಚ್ಚದಲ್ಲಿ 20 ಲಕ್ಷ ಮೀಟರ್ ಖರೀದಿ ಮಾಡಿರುವ ಪ್ರಕರಣವನ್ನು ಲೋಕಾಯುಕ್ತ ಅಥವಾ ಸದನ ಸಮಿತಿಯಿಂದ ತನಿಖೆ ನಡೆಸಬೇಕು ಎಂದು ಕೆ.ಎಸ್.ಈಶ್ವರಪ್ಪ ಬುಧವಾರವೂ ಸರ್ಕಾರವನ್ನು ಒತ್ತಾಯಿಸಿದರು.
1,298 ಉಪನ್ಯಾಸಕರ ನೇಮಕ : ರಾಜ್ಯದ ಸರ್ಕಾರಿ ಕಾಲೇಜುಗಳಿಗೆ 1,298 ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಆರಂಭವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ವಿಧಾನಸಭೆಯಲ್ಲಿ ತಿಳಿಸಿದರು. ಎಂ. ಕೃಷ್ಣಾರೆಡ್ಡಿಯವರ ಪ್ರಶ್ನೆಗೆ ಉತ್ತರಿಸಿದ ಅವರು, ಖಾಲಿ ಇರುವ ಉಪನ್ಯಾಸಕರ ಹುದ್ದೆ ಭರ್ತಿಗೆ ಸರ್ಕಾರ ಗಮನ ಹರಿಸಿದ್ದು, ನೇಮಕಾತಿ ಪ್ರಕ್ರಿಯೆ ನಡೆದಿದೆ. ಹೊಸದಾಗಿ 864 ಉಪನ್ಯಾಸಕರ ನೇಮಕ ಮಾಡಿಕೊಳ್ಳುವ ಪ್ರಸ್ತಾವನೆಯನ್ನು ಸಚಿವ ಸಂಪುಟದ ತೀರ್ಮಾನಕ್ಕೆ ಕಳುಹಿಸಲಾಗುತ್ತಿದೆ ಎಂದರು.












Click it and Unblock the Notifications