Karnataka Bandh: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ವಿರೋಧಿಸಿ ಕರವೇಯಿಂದ ಕರ್ನಾಟಕ ಬಂದ್!
Karnataka Bandh: ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಘರ್ಷವು ದಿನದಿನಕ್ಕೆ ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ಈ ಬಾರಿ ಮಾನ್ಸೂನ್ ಮುಂಗಾರಿನಲ್ಲಿ ಮಳೆ ಕೊರತೆಯಿಂದಾಗಿ ಭಾರೀ ಸಂಕಷ್ಟ ಎದುರಾಗಿದೆ.
ಮಳೆ ಕೊರತೆಯಿಂದಾಗಿ ಕರ್ನಾಟಕದ ಪ್ರಮುಖ ಜಲಾಶಯಗಳು ಹಾಗೂ ಕೆಆರ್‌ಎಸ್‌ನಲ್ಲಿ ನೀರಿನ ಕೊರತೆ ಎದುರಾಗಿದೆ. ಈ ನಡುವೆ ಮುಂದಿನ 15 ದಿನಗಳ ವರೆಗೆ ಪ್ರತಿ ದಿನ 3,500 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ನಿರ್ದೇಶನವು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ಇದರ ಸಂಪೂರ್ಣ ವಿವರ ಇಲ್ಲಿದೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸಿದರೆ, ಕರ್ನಾಟಕ ಬಂದ್ ಮಾಡುವುದಾಗಿ ಕನ್ನಡಪರ ಸಂಘಟನೆಗಳು ಎಚ್ಚರಿಕೆ ನೀಡಿವೆ. ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ಕನ್ನಡಿಗರು ಆಗ್ರಹಿಸಿದ್ದಾರೆ. ಕಾವೇರಿ ನದಿ ಭಾಗದಲ್ಲಿರುವ ಜನರು ಹಾಗೂ ರೈತರಿಗೆ ತೀವ್ರ ನೀರಿನ ಕೊರತೆ ಎದುರಾಗಿದೆ.
ಪರಿಸ್ಥಿತಿ ಈ ರೀತಿ ಇರುವಾಗ ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ಮಾಡುವುದು ಎಷ್ಟು ಸರಿ ಎಂದು ಕನ್ನಡಿಗರು ಪ್ರಶ್ನೆ ಮಾಡಿದ್ದಾರೆ. ಕಾವೇರಿ ನದಿ ನೀರು ಹಂಚಿಕೆಯನ್ನು ವಿರೋಧಿಸಿ ಪ್ರತಿಭಟನೆಗಳು ನಡೆದಿವೆ. ಇದೀಗ ಕರ್ನಾಟಕ ಬಂದ್ ಮಾಡುವುದಾಗಿ ಕರ್ನಾಟಕ ರಕ್ಷಣಾ ವೇದಿಕೆಯ (ಪ್ರವೀಣ್ ಶೆಟ್ಟಿ ಬಣ) ಎಚ್ಚರಿಕೆ ನೀಡಿದೆ.
ತಮಿಳುನಾಡಿಗೆ 4.50 ಟಿಎಂಸಿ ನೀರನ್ನು ಬಿಟ್ಟರೆ ನಾವು ಸುಮ್ಮನೆ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಕಾವೇರಿ ನಿರ್ವಹಣಾ ಸಮಿತಿಗೆ ಎಚ್ಚರಿಕೆ ನೀಡುತ್ತಿದ್ದೇವೆ. ಕರ್ನಾಟಕದಲ್ಲಿ ಶೇ 20 ಭಾಗ ಮಳೆಯಾಗಿಲ್ಲ. ಕರ್ನಾಟಕದಲ್ಲಿ ಜಲಾಯಗಳಲ್ಲಿ ನೀರಿಲ್ಲ, ಕರ್ನಾಟಕದಲ್ಲಿ ಬೆಂಗಳೂರಿನ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಈ ರೀತಿಯ ಪರಿಸ್ಥಿತಿಯಲ್ಲಿ ಕಾವೇರಿ ನಿರ್ವಹಣಾ ಸಮಿತಿ ತಮಿಳುನಾಡಿಗೆ ಪ್ರತಿನಿತ್ಯ ನೀರು ಬಿಡಿ ಎಂದು ನಿರ್ದೇಶನ ನೀಡಿರುವುದು ಅಕ್ಷಮ್ಯವಾಗಿದೆ. ಅಲ್ಲದೆ ಈ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ದೃಢ ನಿರ್ಧಾರವನ್ನು ತೆಗೆದುಕೊಳ್ಳಬೇಕು ಎಂದು ಪ್ರವೀಣ್ ಶೆಟ್ಟಿ ಅವರು ಆಗ್ರಹಿಸಿದ್ದಾರೆ.
ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದ್ದೇನು
ಇನ್ನು ಈ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಮಾತನಾಡಿದ್ದಾರೆ. ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನಿರ್ವಹಣಾ ಸಮಿತಿ ಮಾಡಿರುವ ಶಿಫಾರಸು ಅವೈಜ್ಞಾನಿಕ ಮತ್ತು ಈ ತೀರ್ಪು ನಮ್ಮ ನಾಡಿನ ಜನತೆಗೆ ಮಾರಕವಾಗಿದೆ. ರಾಜ್ಯದಲ್ಲಿ ಮಳೆ, ಬೆಳೆ ಇಲ್ಲದೇ ಬರಗಾಲಕ್ಕೆ ತುತ್ತಾಗಿರುವ ಇಂತಹ ಸನ್ನಿವೇಶದಲ್ಲಿ ನಾವೆಲ್ಲರೂ ಧ್ವನಿ ಎತ್ತಿ ಕರ್ನಾಟಕದ ಪರವಾಗಿ ಒಗ್ಗಟ್ಟಿನಿಂದ ಹೋರಾಡಬೇಕಿದೆ ಎಂದು ಅವರು ಹೇಳಿದ್ದಾರೆ.


Click it and Unblock the Notifications
