Karnataka Bandh Today: ಇಂದು ಕರ್ನಾಟಕ ಬಂದ್‌ ಇರುತ್ತಾ? ಇಲ್ವಾ? ಬೆಂಗಳೂರಲ್ಲಿ ಪೊಲೀಸರಿಂದ ಹೈ ಅಲರ್ಟ್​​

ಬೆಂಗಳೂರು: ಕಾವೇರಿ ಜಲ ವಿವಾದದ ಹಿನ್ನೆಲೆಯಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಆದರೆ ಬಂದ್‌ಗೆ ಸೀಮಿತ ಸಂಖ್ಯೆಯ ಕನ್ನಡಪರ ಸಂಘಟನೆಗಳು ಮಾತ್ರ ಬೆಂಬಲ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಂಪೂರ್ಣ ಬಂದ್‌ ನಡೆಯುವ ಸಾಧ್ಯತೆ ಕಡಿಮೆಯಾಗಿದೆ. ಬಹುತೇಕ ಸೇವೆಗಳು ಎಂದಿನಂತೆ ಮುಂದುವರಿಯುವ ನಿರೀಕ್ಷೆಯಿದೆ.

ಬೆಂಗಳೂರಿನ ಮಡಿವಾಳ, ಶಾಂತಿನಗರ ಸೇರಿದಂತೆ ವಿವಿಧ ಭಾಗಗಳಲ್ಲಿ ಬೆಳಗ್ಗಿನಿಂದಲೇ ಬಿಎಂಟಿಸಿ ಹಾಗೂ ಖಾಸಗಿ ಬಸ್‌ಗಳ ಸಂಚಾರ ಸಾಮಾನ್ಯವಾಗಿತ್ತು. ಅಂಗಡಿ-ಮುಂಗಟ್ಟುಗಳು ಹಾಗೂ ಸಾರ್ವಜನಿಕ ಸೇವೆಗಳು ಕೂಡ ಬಹುತೇಕ ಎಂದಿನಂತೆ ಕಾರ್ಯನಿರ್ವಹಿಸುವ ಸಾಧ್ಯತೆಯಿದೆ.

Karnataka Bandh Today Partial Shutdown Likely Over Cauvery Water Row Bengaluru on High Alert

ಬಂದ್‌ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ನಗರದ ಕೇಂದ್ರ, ಪಶ್ಚಿಮ, ವಾಯವ್ಯ ವಿಭಾಗಗಳು ಹಾಗೂ ಎಲೆಕ್ಟ್ರಾನಿಕ್‌ ಸಿಟಿ ವ್ಯಾಪ್ತಿಯಲ್ಲಿ ಹೆಚ್ಚುವರಿ ಪೊಲೀಸ್‌ ಬಂದೋಬಸ್ತ್‌ ನಿಯೋಜಿಸಲಾಗಿದೆ. ತಮಿಳು ಭಾಷಿಕರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲೂ ಹೆಚ್ಚಿನ ನಿಗಾ ವಹಿಸುವಂತೆ ಬೆಂಗಳೂರು ಪೊಲೀಸ್‌ ಕಮಿಷನರ್‌ ಸೀಮಂತ್‌ ಕುಮಾರ್‌ ಅವರು ಡಿಸಿಪಿಗಳಿಗೆ ಸೂಚನೆ ನೀಡಿದ್ದಾರೆ.

ಬಂದ್‌ ಹೆಸರಿನಲ್ಲಿ ಸರ್ಕಾರಿ ಬಸ್‌ಗಳು ಸೇರಿದಂತೆ ಯಾವುದೇ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸದಂತೆ ಹಾಗೂ ಸಾರ್ವಜನಿಕರಿಗೆ ತೊಂದರೆ ನೀಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಒತ್ತಾಯಪೂರ್ವಕವಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿಸುವುದು ಅಥವಾ ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವಂತಹ ಘಟನೆಗಳು ನಡೆದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಅವಕಾಶ ನೀಡಲಾಗಿದೆ. ಆದರೆ ಅನುಮತಿ ಇಲ್ಲದೆ ರಸ್ತೆಯಲ್ಲಿ ಧರಣಿ, ರ್ಯಾಲಿ ಅಥವಾ ಮೆರವಣಿಗೆ ನಡೆಸಿದರೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವಂತೆ ಪೊಲೀಸ್‌ ಸಿಬ್ಬಂದಿಗೆ ಸೂಚಿಸಲಾಗಿದೆ.

ಇನ್ನು ಬಂದ್‌ಗೆ ಕರೆ ನೀಡಿರುವ ವಾಟಾಳ್‌ ನಾಗರಾಜ್‌ ಅವರು ಬೆಳಗ್ಗೆ 10 ಗಂಟೆಗೆ ಮೆಜೆಸ್ಟಿಕ್‌ಗೆ ಆಗಮಿಸಲಿದ್ದಾರೆ. ಅಲ್ಲಿಂದ ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ ನಿಲ್ದಾಣಗಳಿಗೆ ತೆರಳಿ ಸಿಬ್ಬಂದಿ ಬಂದ್‌ಗೆ ಬೆಂಬಲ ನೀಡುವಂತೆ ಮನವಿ ಮಾಡುವ ಸಾಧ್ಯತೆಯಿದೆ. ಬಳಿಕ ಟೌನ್‌ಹಾಲ್‌ ಬಳಿ ತೆರಳಿ ಫ್ರೀಡಂಪಾರ್ಕ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಲಾಗಿದೆ. ತೆರೆದ ವಾಹನದಲ್ಲಿ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ನಡೆಯಲಿರುವ ಮೆರವಣಿಗೆಯು ಟೌನ್‌ಹಾಲ್‌, ಹಲಸೂರು ಗೇಟ್‌ ಪೊಲೀಸ್‌ ಠಾಣೆ, ಮೈಸೂರು ಬ್ಯಾಂಕ್‌ ಸರ್ಕಲ್‌ ಹಾಗೂ ಓಣಿ ಆಂಜನೇಯಸ್ವಾಮಿ ದೇವಸ್ಥಾನದ ಮಾರ್ಗವಾಗಿ ಫ್ರೀಡಂಪಾರ್ಕ್‌ ತಲುಪಲಿದೆ.

ಕರವೇ ಪ್ರವೀಣ್‌ ಶೆಟ್ಟಿ ಬಣದಿಂದ ಬಂದ್‌ ಹಿಂಪಡೆತ

ಇದೇ ವೇಳೆ, ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಪ್ರವೀಣ್‌ ಶೆಟ್ಟಿ ಬಣ ಕರೆ ನೀಡಿದ್ದ ಕರ್ನಾಟಕ ಬಂದ್‌ ಅನ್ನು ಹಿಂಪಡೆದಿದೆ. ರಾಜ್ಯ ಹಾಗೂ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಇತ್ತೀಚೆಗೆ ಉತ್ತಮ ಮಳೆಯಾಗಿದ್ದು, ಜಲಾಶಯಗಳಿಗೆ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಇದರಿಂದ ಸದ್ಯದ ಮಟ್ಟಿಗೆ ನೀರಿನ ಅಭಾವದ ತೀವ್ರತೆ ಕಡಿಮೆಯಾಗಿದೆ ಎಂದು ಸಂಘಟನೆ ತಿಳಿಸಿದೆ.

ಜತೆಗೆ, ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗುವ ರೀತಿಯಲ್ಲಿ ತರಾತುರಿಯಲ್ಲಿ ನೀರು ಬಿಡುವುದಿಲ್ಲ ಎಂದು ಸರ್ಕಾರ ಕನ್ನಡಪರ ಸಂಘಟನೆಗಳಿಗೆ ಭರವಸೆ ನೀಡಿದೆ. ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸಲು ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ಬಂದ್‌ ಹಿಂಪಡೆಯುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕರವೇ ಪ್ರವೀಣ್‌ ಶೆಟ್ಟಿ ಬಣ ಹೇಳಿದೆ.

ಬಂದ್‌ನಿಂದ ದಿನಗೂಲಿ ನೌಕರರು, ಸಣ್ಣ ವ್ಯಾಪಾರಿಗಳು, ರೈತರು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುವ ಸಾಧ್ಯತೆಯನ್ನೂ ಪರಿಗಣಿಸಲಾಗಿದೆ. ಹೀಗಾಗಿ ಬಂದ್‌ ಬದಲಿಗೆ ಧರಣಿ, ಪ್ರತಿಭಟನೆ ಹಾಗೂ ಜಾಗೃತಿ ಜಾಥಾಗಳ ಮೂಲಕ ಸರ್ಕಾರದ ಮೇಲೆ ಒತ್ತಡ ಮುಂದುವರಿಸಲು ಸಂಘಟನೆ ನಿರ್ಧರಿಸಿದೆ.

ಬೆಂಗಳೂರು ನಗರ ಪೋಲಿಸ್‌ ಎಚ್ಚರಿಕೆ

ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಇತ್ತೀಚೆಗೆ ಕಾವೇರಿ ನೀರನ್ನು ತಮಿಳುನಾಡಿಗೆ ಹಂಚಿಕೆ ಮಾಡುವ ಸಂಬಂಧ ನೀಡಿರುವ ಆದೇಶದ ಹಿನ್ನೆಲೆಯಲ್ಲಿ, ಕೆಲವು ಸಂಘಟನೆಗಳು ದಿನಾಂಕ:13/08/2026 ರಂದು ಕರ್ನಾಟಕ ಬಂದ್‌ ಕರೆ ನೀಡಿವೆ. ಇದೇ ವೇಳೆ, ಹಲವಾರು ಸಂಘಟನೆಗಳು ತಾವು ಈ ಬಂದ್‌ ಗೆ ಬೆಂಬಲ ನೀಡುತ್ತಿಲ್ಲ ಎಂದು ಬೆಂಗಳೂರು ನಗರ ಪೊಲೀಸರಿಗೆ ತಿಳಿಸಿವೆ.

ಪ್ರತಿಯೊಬ್ಬ ನಾಗರಿಕನಿಗೂ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುವ ಹಾಗೂ ಕಾನೂನಿನ ಚೌಕಟ್ಟಿನೊಳಗೆ ಶಾಂತಿಯುತವಾಗಿ ಪ್ರತಿಭಟಿಸುವ ಪ್ರಜಾಸತ್ತಾತ್ಮಕ ಮತ್ತು ಮೂಲಭೂತ ಹಕ್ಕು ಇದೆ ಎಂಬುದನ್ನು ಬೆಂಗಳೂರು ನಗರ ಪೊಲೀಸ್ ಸಂಪೂರ್ಣವಾಗಿ ಗೌರವಿಸುತ್ತದೆ. ಅದೇ ರೀತಿ. ಇತರೆ ನಾಗರಿಕರ ದೈನಂದಿನ ಜೀವನ ಹಾಗೂ ಚಟುವಟಿಕೆಗಳನ್ನು ಯಾವುದೇ ಅಡ್ಡಿ-ಆತಂಕವಿಲ್ಲದೆ ನಡೆಸುವ ಹಕ್ಕು ಮತ್ತು ಸ್ವಾತಂತ್ರ್ಯವನ್ನೂ ಗೌರವಿಸುವುದು ಅಷ್ಟೇ ಮುಖ್ಯವಾಗಿದೆ.

ಆದ್ದರಿಂದ, ನಗರದಲ್ಲಿ ಶಾಂತಿ, ಸಾರ್ವಜನಿಕ ಸುವ್ಯವಸ್ಥೆ ಮತ್ತು ಸಹಜ ಸ್ಥಿತಿಯನ್ನು ಕಾಪಾಡಲು ಎಲ್ಲಾ ಸಂಘಟನೆಗಳು ಹಾಗೂ ಸಾರ್ವಜನಿಕರು ಬೆಂಗಳೂರು ನಗರ ಪೊಲೀಸರೊಂದಿಗೆ ಸಹಕರಿಸುವಂತೆ ಮನವಿ ಮಾಡಲಾಗುತ್ತದೆ. ಯಾವುದೇ ವ್ಯಕ್ತಿ ಅಥವಾ ಸಂಘಟನೆಯು ಯಾರನ್ನೂ ಬಂದ್‌ನಲ್ಲಿ ಭಾಗವಹಿಸುವಂತೆ ಮತ್ತು ಅಂಗಡಿ-ಮುಂಗಟ್ಟು ಅಥವಾ ಇತರೆ ಸಂಸ್ಥೆಗಳನ್ನು ಮುಚ್ಚುವಂತೆ ಹಾಗೂ ವಾಹನಗಳ ಸಂಚಾರವನ್ನು ತಡೆಯುವಂತೆ ಅಥವಾ ಅವರ ಇಚ್ಛೆಗೆ ವಿರುದ್ಧವಾಗಿ ಯಾವುದೇ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಒತ್ತಾಯಿಸುವುದು, ಬೆದರಿಸುವುದು ಅಥವಾ ಬಲವಂತಪಡಿಸುವುದು ಸರಿಯಲ್ಲ.

ಯಾವುದೇ ರೀತಿಯ ಹಿಂಸಾಚಾರ, ಬೆದರಿಕೆ. ಸಾರ್ವಜನಿಕ ಅಥವಾ ಖಾಸಗಿ ಆಸ್ತಿಪಾಸ್ತಿಗಳಿಗೆ ಹಾನಿ, ರಸ್ತೆ ಸಂಚಾರ. ಅಗತ್ಯ ಸೇವೆಗಳಿಗೆ ಅಡ್ಡಿಪಡಿಸುವುದು ಹಾಗೂ ಕಾನೂನನ್ನು ಕೈಗೆತ್ತಿಕೊಳ್ಳುವ ಯಾವುದೇ ಕೃತ್ಯವೆಸಗಿದಲ್ಲಿ ಕಾನೂನಿನನ್ವಯ ಸೂಕ್ತವಾಗಿ ಮತ್ತು ದೃಢವಾಗಿ ನಿಭಾಯಿಸಲಾಗುವುದು. ಸಾರ್ವಜನಿಕರ ಸುರಕ್ಷತೆ ಮತ್ತು ಭದ್ರತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸ್ ವತಿಯಿಂದ ನಗರದಾದ್ಯಂತ ಅಗತ್ಯ ಮುಂಜಾಗ್ರತಾ ಮತ್ತು ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಪ್ರಮುಖ ಹಾಗೂ ಸೂಕ್ಷ್ಮ ಸ್ಥಳಗಳಲ್ಲಿ ಅಗತ್ಯ ಪೊಲೀಸ್ ಬಂದೋಬಸ್ತ್, ಗಸ್ಸು ಮತ್ತು ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ.

ಶಾಲಾ-ಕಾಲೇಜುಗಳು, ಕಚೇರಿಗಳು, ಅಂಗಡಿ-ಮುಂಗಟ್ಟುಗಳು ಹಾಗೂ ವಾಣಿಜ್ಯ ಸಂಸ್ಥೆಗಳು, ಸಾರ್ವಜನಿಕ ಸಾರಿಗೆ ಮತ್ತು ಇತರ ಸಾಮಾನ್ಯ ಚಟುವಟಿಕೆಗಳು ಎಂದಿನಂತೆ ನಡೆಯುವ ನಿರೀಕ್ಷೆಯಿದೆ. ಸಾರ್ವಜನಿಕರು ಯಾವುದೇ ಭಯ ಅಥವಾ ಆತಂಕಕ್ಕೆ ಒಳಗಾಗದೆ ತಮ್ಮ ದೈನಂದಿನ ಚಟುವಟಿಕೆಗಳನ್ನು ಎಂದಿನಂತೆ ಮುಂದುವರಿಸುವಂತೆ ಕೋರಲಾಗಿದೆ.

ಬೆಂಗಳೂರು ನಗರವು ಸದಾ ಶಾಂತಿ, ಪರಸ್ಪರ ಗೌರವ ಮತ್ತು ಸಹಕಾರದ ಮನೋಭಾವವನ್ನು ಪ್ರದರ್ಶಿಸಿದೆ. ಈ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಲು ಎಲ್ಲಾ ಸಂಘಟನೆಗಳ ಸದಸ್ಯರು ಹಾಗೂ ಸಾರ್ವಜನಿಕರು ಬೆಂಗಳೂರು ನಗರದ ಪೊಲೀಸರೊಂದಿಗೆ ಸಂಪೂರ್ಣವಾಗಿ ಸಹಕರಿಸಿ. ನಗರವು ಶಾಂತಿಯುತವಾಗಿ, ಸುರಕ್ಷಿತವಾಗಿ ಮತ್ತು ಸಹಜ ಸ್ಥಿತಿಯಲ್ಲಿ ಇರುವಂತೆ ಸಹಕರಿಸಬೇಕೆಂದು ಮನವಿ.

ಒಟ್ಟಾರೆ, ಇಂದು ರಾಜ್ಯದಲ್ಲಿ ಸಂಪೂರ್ಣ ಬಂದ್‌ಗಿಂತ ಪ್ರತಿಭಟನೆ ಹಾಗೂ ಮೆರವಣಿಗೆಗಳಿಗೆ ಹೆಚ್ಚಿನ ಒತ್ತು ಸಿಗುವ ಸಾಧ್ಯತೆಯಿದ್ದು, ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಕಟ್ಟುನಿಟ್ಟಿನ ನಿಗಾ ವಹಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+