ಮುಂಜಾಗ್ರತಾ ಕ್ರಮವಾಗಿ ಡಾಲರ್ಸ್ ಕಾಲೋನಿ ನಿವಾಸದಿಂದಲೇ ವಾಟಾಳ್ ನಾಗರಾಜ್ ವಶಕ್ಕೆ
ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಆಗ್ರಹಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೋರಾಟಕ್ಕೆ ಮುಂದಾಗಿದ್ದಾರೆ. ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಅವರ ಡಾಲರ್ಸ್ ಕಾಲೋನಿ ನಿವಾಸದಿಂದಲೇ ವಶಕ್ಕೆ ಪಡೆದಿದ್ದಾರೆ.
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡಬೇಕು ಎಂದು ಆಗ್ರಹಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಲು ಸಿದ್ಧತೆ ನಡೆದಿತ್ತು. ಆದರೆ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಅವರನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ. ಬಂದ್ ಹಿನ್ನೆಲೆಯಲ್ಲಿ ವಾಟಾಳ್ ನಾಗರಾಜ್ ಅವರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಲು ಮನೆಯಿಂದ ಹೊರಡದಂತೆ ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರು. ಪೊಲೀಸರು ತಡೆಯೊಡ್ಡುತ್ತಿದ್ದಂತೆ ವಾಟಾಳ್ ಅವರು ತಮ್ಮ ನಿವಾಸದ ಗೇಟ್ ಒಳಗಡೆಯೇ ಕುಳಿತು ಪ್ರತಿಭಟನೆ ನಡೆಸಿದರು.

'ನಾನು ಮನೆಯಿಂದ ಹೊರಗೆ ಬರುವುದಿಲ್ಲ, ವಶಕ್ಕೆ ಪಡೆಯುವ ಕಾರಣಕ್ಕಾಗಿ ಹೊರಗೆ ಬರಲ್ಲ' ಎಂದು ಹೇಳಿ ಪೊಲೀಸರ ಮನವೊಲಿಕೆಗೆ ಅವರು ಒಪ್ಪಲಿಲ್ಲ. ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಸರ್ಕಾರದ ನಿಲುವನ್ನು ಖಂಡಿಸಿ ವಾಟಾಳ್ ನಾಗರಾಜ್ ಅವರು ಬಾಯಿಗೆ ಸೆಲ್ಲೋ ಟೇಪ್ ಹಾಕಿಕೊಂಡು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಎಸಿಪಿ ತನ್ವೀರ್ ಹಾಗೂ ಡಿಸಿಪಿ ನೇಮಗೌಡ ನೇತೃತ್ವದ ಪೊಲೀಸ್ ಅಧಿಕಾರಿಗಳ ತಂಡ ವಾಟಾಳ್ ನಾಗರಾಜ್ ಅವರ ಮನವೊಲಿಸಲು ಸುಮಾರು ಅರ್ಧ ಗಂಟೆ ಪ್ರಯತ್ನಿಸಿತು. ಆದರೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವಾಟಾಳ್ ಅವರು ಪೊಲೀಸರ ಮನವಿಗೆ ಸ್ಪಂದಿಸಲಿಲ್ಲ. ಬಳಿಕ ಬೇರೆ ದಾರಿ ಇಲ್ಲದೆ ಪೊಲೀಸರು ಅವರನ್ನು ಸ್ಥಳದಲ್ಲೇ ವಶಕ್ಕೆ ಪಡೆದು ಕರೆದೊಯ್ದರು.
ನಿವಾಸದ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್
ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ವಾಟಾಳ್ ನಾಗರಾಜ್ ಅವರ ಡಾಲರ್ಸ್ ಕಾಲೋನಿ ನಿವಾಸದ ಬಳಿ ಬೆಳಗ್ಗೆಯಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಅವರು ಟೌನ್‌ಹಾಲ್‌ಗೆ ತೆರಳಿ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಪೊಲೀಸರು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದರು.
ಇದೇ ವೇಳೆ, ವಾಟಾಳ್ ನಾಗರಾಜ್ ಅವರನ್ನು ಬೆಂಬಲಿಸಲು ಬೆಳಗ್ಗೆಯೇ ನಿವಾಸದ ಬಳಿ ಆಗಮಿಸಿದ್ದ ನಾರಾಯಣ್ ಸೇರಿದಂತೆ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಹೊಯ್ಸಳ ವಾಹನದಲ್ಲಿ ಕರೆದೊಯ್ದರು.
ಪೊಲೀಸರ ಕ್ರಮಕ್ಕೆ ಬೆಂಬಲಿಗರ ಆಕ್ರೋಶ
ವಾಟಾಳ್ ನಾಗರಾಜ್ ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರ ಕ್ರಮಕ್ಕೆ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಮತ್ತು ಪೊಲೀಸರು ಜಂಟಿಯಾಗಿ ಕನ್ನಡಪರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡಬೇಕು ಎಂದು ಆಗ್ರಹಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಲು ಸಿದ್ಧತೆ ನಡೆದಿತ್ತು. ಆದರೆ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಅವರನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ.


Click it and Unblock the Notifications
