Karnataka BJP: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಟಿ ರವಿ, ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಯತ್ನಾಳ್? ಕೆರಳಿದ ಕುತೂಹಲ
ಬೆಂಗಳೂರು, ಜುಲೈ 25: ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತಿದೆ. ಚುನಾವಣೆ ಫಲಿತಾಂಶ ಹೊರಬಂದು ಎರಡು ತಿಂಗಳು ಕಳೆದರೂ, ಬಿಜೆಪಿ ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ. ಇದು ಕಾಂಗ್ರೆಸ್ ನಾಯಕರ ಗೇಲಿಗೆ ಕಾರಣವಾಗಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೂ ಹೊಸಬರನ್ನು ಆಯ್ಕೆ ಮಾಡುವ ಹೊಣೆ ಬಿಜೆಪಿ ಹೈಕಮಾಂಡ್ ಮೇಲಿದೆ.
ರಾಜ್ಯ ನಾಯಕತ್ವಕ್ಕೆ ಹೊಸ ಹುರುಪನ್ನು ತುಂಬುವ ನಿಟ್ಟಿನಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿ ಸರಣಿ ಸಭೆ ನಡೆಸಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ ಎಲ್ ಸಂತೋಷ್ ಅವರು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದು, ನೂತನ ರಾಜ್ಯ ಘಟಕದ ಅಧ್ಯಕ್ಷ ಮತ್ತು ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ಸಭೆಗಳಲ್ಲಿ ಭಾಗವಹಿಸುತ್ತಿದ್ದಾರೆ.

ಪಕ್ಷದ ಅಧ್ಯಕ್ಷರಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಮತ್ತು ವಿರೋಧ ಪಕ್ಷದ ನಾಯಕರಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೆಸರುಗಳು ಸಭೆಯಲ್ಲಿ ಮುನ್ನೆಲೆಗೆ ಬಂದಿವೆ. ಈ ಎರಡು ಹೆಸರುಗಳನ್ನು ಕೇಂದ್ರ ನಾಯಕರು ಪರಿಗಣಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಬಿಜೆಪಿ ಮತ್ತೆ ಜಾತಿ ಸಮೀಕರಣದ ಲೆಕ್ಕಾಚಾರದಲ್ಲಿ ತೊಡಗಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಒಕ್ಕಲಿಗ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಲಿಂಗಾಯತರನ್ನು ತಂದು ಕೂರಿಸುವ ಚಿಂತನೆಯಲ್ಲಿದೆ ಎಂಬುದು ಸ್ಪಷ್ಟವಾಗುತ್ತಿದೆ.

ಹೀನಾಯ ಸೋಲಿನ ಬಳಿಕ ಕರ್ನಾಟಕ ಬಿಜೆಪಿಯು ವಾಸ್ತವಿಕವಾಗಿ ನಾಯಕರಿಲ್ಲದ ಸ್ಥಿತಿಯಲ್ಲಿದೆ. ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಿಲ್ಲದೇ ಕಾರ್ಯನಿರ್ವಹಿಸುತ್ತಿದೆ.
ಚುನಾವಣಾ ಸೋಲಿನ ನಂತರ ನಳಿನ್ ಕುಮಾರ್ ಕಟೀಲ್ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಸಬೇಕೆಂಬ ಒತ್ತಾಯಗಳು ಕೇಳಿಬಂದಿವೆ. ಅವರೂ ಸಹ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಕೇಳಿಬಂದ ಹಲವು ಹೆಸರು
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹಲವು ಹೆಸರುಗಳು ಕೇಳಿಬಂದಿವೆ. ಒಕ್ಕಲಿಗ ನಾಯಕರಾದ ಆರ್ ಅಶೋಕ್, ಡಾ ಸಿ ಎನ್ ಅಶ್ವತ್ಥನಾರಾಯಣ, ಬಿವೈ ವಿಜಯೇಂದ್ರರ ಹೆಸರುಗಳು ರಾಜಕೀಯ ವಲಯದಲ್ಲಿ ಹರಿದಾಡಿವೆ. ಮಾಜಿ ಸಚಿವ, ಹಿರಿಯ ನಾಯಕ ವಿ ಸೋಮಣ್ಣನವರು ತಮಗೆ ಅಧ್ಯಕ್ಷ ಸ್ಥಾನ ನೀಡುವಂತೆ ಒತ್ತಾಯಿಸಿ ಬಿಜೆಪಿ ರಾಷ್ಟ್ರೀಯ ನಾಯಕರಿಗೆ ಪತ್ರ ರವಾನಿಸಿದ್ದಾರೆ.
ಇನ್ನು ವಿರೋಧ ಪಕ್ಷದ ನಾಯಕರ ಸ್ಥಾನಕ್ಕೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಸುನೀಲ್ ಕುಮಾರ್ ಹೆಸರುಗಳು ಮುನ್ನೆಲೆಗೆ ಬಂದಿವೆ.

ದೆಹಲಿಗೆ ಭೇಟಿ ನೀಡಿರುವ ಬಿವೈ ವಿಜಯೇಂದ್ರ
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಪುತ್ರ, ಶಿಕಾರಿಪುರ ಶಾಸಕ ಬಿವೈ ವಿಜಯೇಂದ್ರ ಅವರು ರಾಷ್ಟ್ರ ನಾಯಕನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿಯೂ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.












Click it and Unblock the Notifications