Lok Sabha Election 2024 : ಬಿಜೆಪಿಯ 13 ಕ್ಕೂ ಹೆಚ್ಚು ಹಾಲಿ ಸಂಸದರಿಗೆ ಟಿಕೆಟ್ ಡೌಟ್- ‘ಕೊಕ್ ʼ ಪಟ್ಟಿಯಲ್ಲಿ ಯಾರಿದ್ದಾರೆ?
ಬೆಂಗಳೂರು, ನವೆಂಬರ್ 25: 2023 ರ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಳಿಕ ಬಿಜೆಪಿ ಹೈಕಮಾಂಡ್ ಕರ್ನಾಟಕ ಬಿಜೆಪಿ ನಾಯಕರ ನಡುವೆ ಅಂತರವನ್ನ ಕಾಯ್ದಕೊಂಡಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ತಯಾರಿಯನ್ನ ಬಿಜೆಪಿ ಹೈಕಮಾಂಡ್ ನಡೆಸಿದೆ.
ಹೌದು, ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಟಿಕೆಟ್ ಕೊಟ್ಟ ಮಾದರಿಯಲ್ಲಿಯೇ ಲೋಕಸಭಾ ಚುನಾವಣೆಯಲ್ಲೂ ಅದೇ ಮಾದರಿಯನ್ನ ಅನುಸರಿಸಲು ಹೈಕಮಾಂಡ್ ಲೆಕ್ಕಾಚಾರವನ್ನ ಹಾಕಿಕೊಂಡಿದೆ ಎನ್ನಲಾಗಿದ್ದು, ಬಿಜೆಪಿ ಹೈಕಮಾಂಡ್ ಈಗಾಗಲೇ ಕರ್ನಾಟಕದಲ್ಲಿರುವ ತನ್ನ ಹಾಲಿ ಸಂಸದರಲ್ಲಿ ಕೆಲವರಿಗೆ ಟಿಕೆಟ್ ನೀಡದೇ ಹೊಸ ಮುಖಗಳಿಗೆ ಗಾಳ ಟಿಕೆಟ್ ನೀಡುವ ಲೆಕ್ಕಾಚಾರವನ್ನ ಹಾಕಿಕೊಂಡಿದೆ.

ವಿಧಾನಸಭಾ ಚುನಾವಣೆಯ ತಂದ ಬದಲಾವಣೆಯಂತೆ ವಯೋಮಿತಿಯ ಆಧಾರದ ಮೇಲೆ ಹಾಗೂ ಮುಂದಿನ ತಲೆಮಾರಿನ ನಾಯಕರನ್ನು ಬೆಳೆಸುವ ಅನಿವಾರ್ಯತೆ ದೃಷ್ಟಿಯಿಂದ ಕೆಲವು ಹಾಲಿ ಸಂಸದರಿಗೆ ಟಿಕೆಟ್ ನೀಡಿರಲು ನಿರ್ಧರಿಸಿದೆ ಎಂದು ಹೇಳಲಾಗಿದ್ದು, ಹೈಕಮಾಂಡ್ ಸೂಚನೆ ಮೇರೆಗೆ ಈಗಾಗಲೇ ಮಾಜಿ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಸದಾನಂದಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದು, ಬೆಂಗಳೂರು ಉತ್ತರಕ್ಕೆ ಹೊಸ ಮುಖಕ್ಕೆ ಮಣೆ ಹಾಕಲು ಹೈಕಮಾಂಡ್ ತಯಾರಿ ನಡೆಸಿದೆ.
ಇನ್ನೂ ಚಿಕ್ಕಬಳ್ಳಾಪುರದ ಬಿಜೆಪಿ ಸಂಸದ ಬಚ್ಚೇಗೌಡ ರಾಜಕೀಯ ನಿವೃತ್ತಿ ಘೋಷಿಸಿದ್ದು, ಚಾಮರಾಜನಗರದ ಸಂಸದ ಶ್ರೀನಿವಾಸ ಪ್ರಸಾದ್ ಅವರು ಮುಂದಿನ ವರ್ಷ ಮಾರ್ಚ್ ತಿಂಗಳಿನಲ್ಲಿ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದಾರೆ. ಈ ಮೂವರು ಸಂಸದರು ಹೈಕಮಾಂಡ್ ಸೂಚನೆಯ ಮೇರೆಗೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಕೋಲಾರ ಸಂಸದ ಮುನಿಸ್ವಾಮಿ, ವಿಜಯಪುರ ಸಂಸದ ರಮೇಶ್ ಜಿಗಜಿಣಗಿ, ತುಮಕೂರು ಸಂಸದ ಜಿ.ಎಸ್. ಬಸವರಾಜು, ಕೊಪ್ಪಳದ ಸಂಸದ ಸಂಗಣ್ಣ ಕರಡಿ, ದಾವಣಗೆರೆಯ ಸಂಸದ ಜಿ.ಎಂ. ಸಿದ್ದೇಶ್ವರ ಅವರು ಸೇರಿದಂತೆ ಹಲವು ಸಂಸದರಿಗೆ ಟಿಕೆಟ್ ಸಿಗುವುದು ಡೌಟ್ ಎನ್ನಲಾಗಿದೆ.

2023 ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಸಮರ್ಪಕವಾಗಿ ಮುನ್ನಡೆಸದಿರುವುದರಿಂದ ನಳೀನ್ ಕುಮಾರ್ ಕಟೀಲ್ ಅವರ ಮೇಲೆ ಬಿಜೆಪಿ ಹೈಕಮಾಂಡ್ ಮುನಿಸಿಕೊಂಡ ಕಾರಣ ಈ ಬಾರೀ ಕಟೀಲ್ ಅವರಿಗೆ ಟಿಕೆಟ್ ಸಿಗುವುದು ಡೌಟ್ ಎನ್ನಲಾಗಿದೆ. ಆದರೆ, ಮೊನ್ನೆಯಷ್ಟೇ ದಕ್ಷಿಣ ಕನ್ನಡಕ್ಕೆ ಭೇಟಿ ನೀಡಿದ್ದ ವಿಜಯೇಂದ್ರ ಅವರು ಮತ್ತೊಮ್ಮೆ ನಳಿನ್ ಕುಮಾರ್ ಕಟೀಲ್ ಅವರನ್ನ ಗೆಲ್ಲಿಸಿ ಎಂದು ಮನವಿ ಮಾಡಿದ್ದಾರೆ.
ಇನ್ನೂ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ಹೈಕಮಾಂಡ್ ನಾಯಕರಿಂದ ಬಾರೀ ಅಂತರವನ್ನ ಕಾಯ್ದುಕೊಂಡಿರುವ ಉತ್ತರ ಕನ್ನಡ ಕ್ಷೇತ್ರದ ಸಂಸದ ಅನಂತ್ ಕುಮಾರ್ ಹೆಗ್ಡೆಯವರಿಗೂ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ. ಈಗಾಗಲೇ ಅನಾರೋಗ್ಯದ ಕಾರಣದಿಂದಾಗಿ ಪಕ್ಷದ ಕಾರ್ಯಚಟುವಟಿಕೆಯಿಂದ ಅಂತರವನ್ನ ಕಾಯ್ದಕೊಂಡಿದ್ದು, ಈ ಬಾರೀ ಟಿಕೆಟ್ ಸಿಗುವುದು ಅನುಮಾನ ಎನ್ನಲಾಗಿದೆ.
ಒಟ್ನಲಿ, ಲೋಕಸಭಾ ಚುನಾವಣೆಯಲ್ಲಿ ಮತ್ತೆ ಪ್ರಧಾನಿ ಮೋದಿ ಅವರನ್ನ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಬಿಜೆಪಿ ಹೈಕಮಾಂಡ್ ವಿಧಾನಸಭಾ ಚುನಾವಣೆಯಂತೆ ಮುಂದಿನ ಲೋಕಸಭಾ ಚುನಾವಣೆಯಲ್ಲೂ ಇದೇ ರೀತಿಯ ಪ್ರಯೋಗವನ್ನು ಮಾಡಲು ಬಿಜೆಪಿ ನಿರ್ಧರಿಸಿದೆ ಎಂಬ ಮಾತುಗಳು ಕೇಳಿ ಬಂದಿದ್ದು, ಹೈಕಮಾಂಡ್ ಈ ಬಾರೀ ಯಾರಿಗೆ ಟಿಕೆಟ್ ನೀಡುತ್ತೇ ಎಂಬುದನ್ನ ಕಾದುನೋಡಬೇಕಾಗಿದೆ.












Click it and Unblock the Notifications