ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ಕಾರಣ ಇಲ್ಲಿದೆ
ಬೆಂಗಳೂರು, ಸೆಪ್ಟೆಂಬರ್ 08: ರಾಜ್ಯ ಸರ್ಕಾರದ ವೈಫಲ್ಯ ಹಾಗೂ ರೈತ ವಿರೋಧಿ ನೀತಿಗಳ ವಿರುದ್ಧ ಇಂದು(ಸೆಪ್ಟೆಂಬರ್ 08) ರಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ.
ಈ ಬಾರಿ ಮಳೆ ಬಾರದೇ ರಾಜ್ಯದಲ್ಲಿ ಬರಗಾಲದ ಛಾಯೆ ಇದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಕೆಆರ್‌ಎಸ್ ನೀರಿನ ಮಟ್ಟ ಕಡಿಮೆಯಾಗುತ್ತಿದ್ದರೂ ತಮಿಳುನಾಡಿಗೆ ನೀರು ಹರಿಸುತ್ತಿದ್ದಾರೆ. ಅಲ್ಲದೇ ಬಿಜೆಪಿ ಅವಧಿಯ ಕಾಮಗಾರಿಗಳನ್ನು ಕಾಂಗ್ರೆಸ್ ತಡೆದಿದೆ ಎಂದು ಕಾಂಗ್ರೆಸ್ ಸರ್ಕಾರದ ಮೇಲೆ ಆರೋಪ ಮಾಡಿರುವ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

ಇನ್ನು ಈ ಬಗ್ಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಮಳೆ ಬಾರದೆ ದನ ಕರುಗಳಿಗೆ ಕುಡಿಯುವ ನೀರಿಲ್ಲ, ಮೇವೂ ಇಲ್ಲದ ಪರಿಸ್ಥಿತಿ ಇದೆ. ಈ ಬಗ್ಗೆ ಸರ್ಕಾರದಿಂದ ಯಾವ ಕ್ರಮ ಇಲ್ಲ. ವಿದ್ಯುತ್ ಬಿಲ್ ದುಬಾರಿಯಾಗಿದ್ದರಿಂದ ಮಧ್ಯಮ ವರ್ಗದವರು ಪರಿತಪಿಸುತ್ತಿದ್ದಾರೆ. ಹಾಲಿನ ದರವನ್ನೂ ಹೆಚ್ಚಿಸಿದ್ದಾರೆ. ಬಿಜೆಪಿ ಸರಕಾರ ಇದ್ದಾಗ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ಹೆಚ್ಚುವರಿಯಾಗಿ 4 ಸಾವಿರ ರೂಪಾಯಿ ನೀಡಲಾಗುತ್ತಿತ್ತು. ಅದನ್ನೂ ರದ್ದು ಮಾಡಿದ್ದಾರೆ. ರಾಜ್ಯದಲ್ಲಿ ನೂರಾರು ಸಮಸ್ಯೆಗಳು ತಾಂಡವವಾಡುತ್ತಿದ್ದರೂ ಕಾಂಗ್ರೆಸ್ 100 ದಿನಗಳ ಆಡಳಿತದಲ್ಲಿ ಐದು ಗ್ಯಾರಂಟಿಗಳನ್ನು ತೋರಿಸುತ್ತಿದೆ ಎಂದು ವ್ಯಂಗ್ಯವಾಡಿದರು.
ಬೆಂಗಳೂರಿನಲ್ಲಿ ಹದಿನೈದರಿಂದ ಇಪ್ಪತ್ತು ಸಾವಿರ ಜನರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ರಾಜ್ಯ ಸರ್ಕಾರವೇ ಹೊಣೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಮಾಜಿ ಸಚಿವ ಆರ್.ಅಶೋಕ್, ಡಾ.ಸಿ.ಎನ್.ಅಶ್ವತ್ಥನಾರಾಯಣ್, ಬೆಂಗಳೂರಿನ ಎಲ್ಲಾ ಸಂಸದರು ಹಾಗೂ ಶಾಸಕರು ನಗರದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಇನ್ನು ಬಿಜೆಪಿ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದ್ದಾರೆ.












Click it and Unblock the Notifications