ಕುಡಿಯುವ ನೀರಿಗಾಗಿ ಬಿಜೆಪಿ ಯುವಮೋರ್ಚಾ ಪಾದಯಾತ್ರೆ
ಚಿಕ್ಕಬಳ್ಳಾಪುರ, ಡಿ. 19 : ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ಬಿಜೆಪಿ ಯುವಮೋರ್ಚಾ ಮೂರು ದಿನಗಳ ಪಾದಯಾತ್ರೆಯನ್ನು ಹಮ್ಮಿಕೊಂಡಿದೆ.
ಡಿ.20ರ ಶನಿವಾರ ಬೆಳಗ್ಗೆ ಚಿಕ್ಕಬಳ್ಳಾಪುರದಲ್ಲಿನ ಶಿಡ್ಲಘಟ್ಟ ವೃತ್ತದಲ್ಲಿ ಪಾದಯಾತ್ರೆಗೆ ಚಾಲನೆ ದೊರೆಯಲಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸೋಮವಾರ ಅಂತ್ಯಗೊಳ್ಳಲಿದೆ. ಸುಮಾರು 2 ಸಾವಿರಕ್ಕೂ ಹೆಚ್ಚು ಯುವಮೋರ್ಚಾ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಯುವಮೋರ್ಚಾದ ರಾಜ್ಯಾಧ್ಯಕ್ಷ ಮುನಿರಾಜು ಗೌಡ ಹೇಳಿದ್ದಾರೆ.

ಮೂರು ದಿನಗಳ ಪಾದಯಾತ್ರೆಯಲ್ಲಿ ರಾಜ್ಯ ಬಿಜೆಪಿಯ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ. ಶನಿವಾರ ರಾಜ್ಯ ಬಿಜೆಪಿ ಉಸ್ತುವಾರಿ ಮಧುಸೂದನ್ ರಾವ್, ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಪಾಲ್ಗೊಳ್ಳಲಿದ್ದು, ಭಾನುವಾರ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ವಿಧಾನ ಪರಿಷತ್‌ನ ಪ್ರತಿಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. [ಕುಡಿಯುವ ನೀರಿಗಾಗಿ ಕಣ್ಣೀರಿಟ್ಟ ಶಾಸಕ]
ಪಾದಯಾತ್ರೆಯ ಸಂದರ್ಭದಲ್ಲಿ ದೇವನಹಳ್ಳಿ ಹಾಗೂ ಯಲಹಂಕದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಆಯೋಜಿಸಲಾಗಿದೆ. ಸೋಮವಾರ ಪಾದಯಾತ್ರೆ ಬೆಂಗಳೂರು ತಲುಪಲಿದ್ದು, ಫ್ರೀಡಂ ಪಾರ್ಕ್‌ನಲ್ಲಿ ಅಂತ್ಯಗೊಳ್ಳಲಿದೆ. ಅಂದಿನ ಕಾರ್ಯಕ್ರಮದಲ್ಲಿ ವಿಧಾನ ಸಭೆ ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಸೇರಿದಂತೆ ಪ್ರಮುಖ ನಾಯಕರು ಪಾಲ್ಗೊಳ್ಳುತ್ತಾರೆ.
ಫ್ರೀಡಂ ಪಾರ್ಕ್‌ನಿಂದ ರಾಜಭವನ ಹಾಗೂ ವಿಧಾನಸೌಧಕ್ಕೆ ತೆರಳಿ ಹಿಂದುಳಿದ ಪ್ರದೇಶಗಳಿಗೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಮನವಿ ಪತ್ರ ಸಲ್ಲಿಸಲಾಗುತ್ತದೆ ಎಂದು ಮುನಿರಾಜು ಗೌಡ ಹೇಳಿದ್ದಾರೆ.











Click it and Unblock the Notifications