Karnataka Budget 2023: ಮಕ್ಕಳಿಗೆ ವಾರಕ್ಕೆರಡು ಮೊಟ್ಟೆ, ಚಿಕ್ಕಿ, ರಾಜ್ಯಕ್ಕಾಗಿ ಹೊಸ ಶಿಕ್ಷಣ ವ್ಯವಸ್ಥೆ ಜಾರಿ: ಸಿದ್ದರಾಮಯ್ಯ
ಬೆಂಗಳೂರು, ಜುಲೈ 7: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1 ರಿಂದ 10ನೇ ತರಗತಿಯ 60 ಲಕ್ಷ ವಿದ್ಯಾರ್ಥಿಗಳಿಗೆ 280 ಕೋಟಿ ರೂ.ಗಳ ವೆಚ್ಚದಲ್ಲಿ ಒಂದು ಬಾರಿ ಮೊಟ್ಟೆ, ಶೇಂಗಾ ಚಿಕ್ಕಿ, ಬಾಳೆಹಣ್ಣನ್ನು ವಾರದಲ್ಲಿ ಎರಡು ದಿನ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲಿ ಘೋಷಿಸಿದ್ದಾರೆ.
1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ಬಾರಿ ಮೊಟ್ಟೆ/ ಶೇಂಗಾ ಚಿಕ್ಕಿ/ ಬಾಳೆಹಣ್ಣನ್ನು ವಿತರಿಸಲಾಗುತ್ತಿದ್ದು, ಈಗ ವಾರದಲ್ಲಿ ಎರಡು ದಿವಸ ಪ್ರಸಕ್ತ ಸಾಲಿನಿಂದ ಈ ಯೋಜನೆಯನ್ನು 9 ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮರುಸಿಂಚನʼ ಎಂಬ ಹೊಸ ಯೋಜನೆ:
ಮಕ್ಕಳಲ್ಲಿ ಉಂಟಾಗಿರುವ ಕಲಿಕಾ ನ್ಯೂನತೆಯನ್ನು ಹೋಗಲಾಡಿಸಲು ಸುಮಾರು 33 ಲಕ್ಷ ವಿದ್ಯಾರ್ಥಿಗಳಿಗೆ 80 ಕೋಟಿ ರೂ.ಗಳ ವೆಚ್ಚದಲ್ಲಿ ಕಲಿಕಾ ಬಲವರ್ಧನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ʻಮರುಸಿಂಚನʼ ಎಂಬ ಹೊಸ ಯೋಜನೆಯಡಿಯಲ್ಲಿ ಕಲಿಕೆಯಲ್ಲಿ ಹಿಂದುಳಿದ ಒಂದೂವರೆ ಲಕ್ಷ ವಿದ್ಯಾರ್ಥಿಗಳನ್ನು ಪ್ರೌಢ ಹಂತದ ಪರೀಕ್ಷೆಗಳಿಗೆ ಸಜ್ಜುಗೊಳಿಸಲು ವಿಶೇಷ ತರಬೇತಿಯನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
'ಸಸ್ಯ ಶ್ಯಾಮಲ' ಕಾರ್ಯಕ್ರಮ ಆರಂಭ:
ಶಾಲಾ ಶಿಕ್ಷಣ ಇಲಾಖೆಯಲ್ಲಿನ ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸುವ ಸ್ಯಾಟ್ಸ್ ತಂತ್ರಾಂಶವನ್ನು SATS 2.0 ಎಂದು ಉನ್ನತೀಕರಿಸಲಾಗುವುದು. 2023-24ನೇ ಸಾಲಿನಲ್ಲಿ ಪ್ರತಿ ಕಂದಾಯ ವಿಭಾಗದಲ್ಲಿ ನಾಲ್ಕು ಪ್ರಯೋಗಾಲಯಗಳನ್ನು ಎರಡು ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಶಾಲೆಗಳ ಸುತ್ತಮುತ್ತ ಒಂದು ವರ್ಷದ ಕಾಲಾವಧಿಯಲ್ಲಿ 50 ಲಕ್ಷ ಸಸಿಗಳನ್ನು ನೆಡುವ ವಿನೂತನʻಸಸ್ಯ ಶ್ಯಾಮಲʼ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಹೊಸ ಶಿಕ್ಷಣ ನೀತಿ:
ಕೇಂದ್ರ ಸರ್ಕಾರ ಜಾರಿಗೊಳಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವಂತಹ ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿರುವ ಅವೈಜ್ಞಾನಿಕ ಅಂಶಗಳನ್ನು ಒಳಗೊಂಡಿದೆ. ಬಹುಧರ್ಮ, ಬಹುಭಾಷೆ, ಬಹುಸಂಸ್ಕೃತಿ ಇರುವ ನಮ್ಮ ದೇಶಕ್ಕೆ ಏಕರೂಪದ ಶಿಕ್ಷಣ ವ್ಯವಸ್ಥೆ ಹೊಂದಿಕೊಳ್ಳುವುದಿಲ್ಲ. ರಾಜ್ಯದ ಅಸ್ಮಿತೆಯನ್ನು ಎತ್ತಿ ಹಿಡಿಯುವ, ಉನ್ನತ ಶಿಕ್ಷಣವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಶಿಕ್ಷಣವನ್ನು ನೀಡಿ ಯುವಜನರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲಗೊಳಿಸಲು ಒತ್ತು ನೀಡುವ ನಿಟ್ಟಿನಲ್ಲಿ ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಾಂಶಗಳನ್ನು ಒಳಗೊಂಡ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Ph.D. ಸೀಟು ಭರ್ತಿಗೆ ಏಕರೂಪತೆ:
ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ Ph.D. ಸೀಟುಗಳನ್ನು ಭರ್ತಿ ಮಾಡುವ ವಿಧಾನದಲ್ಲಿ ಏಕರೂಪತೆಯನ್ನು ತರಲಾಗುವುದು. ಸರ್ಕಾರಿ ವಿಶ್ವವಿದ್ಯಾಲಯಗಳ Ph.D. ಸೀಟುಗಳಿಗೆ ಮತ್ತು ಖಾಸಗಿ ವಿಶ್ವವಿದ್ಯಾಲಯಗಳ ಶೇ.40 ಸೀಟುಗಳಿಗೆ ಕೌನ್ಸೆಲಿಂಗ್ ನಡೆಸಲಾಗುವುದು. ನಕಲಿ ಅಂಕಪಟ್ಟಿ ಹಾವಳಿಯನ್ನು ತಪ್ಪಿಸುವ ದೃಷ್ಟಿಯಿಂದ ರಾಜ್ಯದ ಎಲ್ಲಾ ಉನ್ನತ ಶಿಕ್ಷಣದ ವಿದ್ಯಾರ್ಥಿಗಳು Academic Bank of Credits ನಲ್ಲಿ ನೋಂದಾಯಿಸಿಕೊಂಡು ಹಾಗೂ ನೇಮಕಾತಿಯಲ್ಲಿ NAD/Digilocker ನಲ್ಲಿನ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಲು ಕ್ರಮಕೈಗೊಳ್ಳಲಾಗುವುದು.
ಕನ್ನಡದಲ್ಲಿ ಪರೀಕ್ಷೆ ಬರೆಯಲು ರೆಫರೆನ್ಸ್ ಪುಸ್ತಕ:
ಉನ್ನತ ಶಿಕ್ಷಣ ಪಡೆಯಲು ಇರುವ ಭಾಷೆಯ ತೊಡಕು ನಿವಾರಿಸಲು ಕರ್ನಾಟಕದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅನುವಾಗುವಂತೆ ವ್ಯಾಪಕ ಬಳಕೆಯಲ್ಲಿರುವ ರೆಫರೆನ್ಸ್ ಪುಸ್ತಕಗಳನ್ನು ಹಾಗೂ ಪಠ್ಯ ವಿಷಯಗಳನ್ನು ಭಾಷಾಂತರಿಸಲು ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಎಲ್ಲಾ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬ್ರಿಟಿಷ್ ಕೌನ್ಸಿಲ್ ಮತ್ತು ಪ್ರಾದೇಶಿಕ ಆಂಗ್ಲ ಸಂಸ್ಥೆಯ ಸಹಕಾರದೊಂದಿಗೆ ವ್ಯಾವಹಾರಿಕ ಆಂಗ್ಲ ತರಗತಿಗಳನ್ನು ಪ್ರಾರಂಭಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.












Click it and Unblock the Notifications